ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಪುನಾರಂಭ: 1-2 ದಿನದಲ್ಲಿ ಟ್ರಾನ್ಸ್ಫರ್ ವೇಳಾಪಟ್ಟಿ ಪ್ರಕಟ
ಹೆಚ್ಚುವರಿ ಶಿಕ್ಷಕರ ಕೌನ್ಸಿಲಿಂಗ್ ಮತ್ತು ಸಾಮಾನ್ಯ ವರ್ಗಾವಣೆ ಪ್ರಕ್ರಿಯೆಗೆ ದಿನಾಂಕ ನಿಗದಿಯಾಗಿತ್ತು. ಅಷ್ಟರಲ್ಲಿ ವಿಧಾನಸಭೆ ಚುನಾವಣೆ ಎದುರಾಗಿದ್ದರಿಂದ ವರ್ಗಾವಣೆ ಪ್ರಕ್ರಿಯೆಯನ್ನು ಚುನಾವಣಾ ಆಯೋಗದ ನಿರ್ದೇಶನದಂತೆ ಸರ್ಕಾರ ತಾತ್ಕಾಲಿಕವಾಗಿ ತಡೆ ಹಿಡಿದಿತ್ತು.

ಬೆಂಗಳೂರು(ಜೂ.01): ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ತಡೆಹಿಡಿಯಲಾಗಿದ್ದ ರಾಜ್ಯ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಕರ ವರ್ಗಾವಣೆ ವರ್ಗಾವಣೆ ಪ್ರಕ್ರಿಯೆ ಪುನಾರಂಭಿಸಲು ಸರ್ಕಾರ ಬುಧವಾರ ಅನುಮತಿಸಿದೆ. ಇದರ ಬೆನ್ನಲ್ಲೇ ಶಿಕ್ಷಣ ಇಲಾಖೆಯು ವರ್ಗಾವಣೆಗೆ ಪರಿಷ್ಕೃತ ವೇಳಾಪಟ್ಟಿಸಿದ್ಧಗೊಳಿಸುತ್ತಿದ್ದು ಒಂದೆರಡು ದಿನಗಳಲ್ಲಿ ಹೊರಬೀಳಲಿದೆ.
2023-24ನೇ ಶೈಕ್ಷಣಿಕ ಸಾಲು ಆರಂಭಕ್ಕೆ ಮೊದಲೇ ಶಿಕ್ಷಕರ ವರ್ಗಾವಣೆ ಪೂರ್ಣಗೊಳಿಸಬೇಕೆಂಬ ಉದ್ದೇಶದಿಂದ ಶಿಕ್ಷಣ ಇಲಾಖೆಯು ಕಳೆದ ಫೆಬ್ರವರಿಯಲ್ಲೇ ವರ್ಗಾವಣೆ ಪ್ರಕ್ರಿಯೆಗೆ ವೇಳಾಪಟ್ಟಿ ಪ್ರಕಟಿಸಿತ್ತು. ಸುಮಾರು 75 ಸಾವಿರಕ್ಕೂ ಹೆಚ್ಚು ಶಿಕ್ಷಕರು ವರ್ಗಾವಣೆ ಬಯಸಿ ಅರ್ಜಿ ಸಲ್ಲಿಸಿದ್ದರು. ಮೊದಲು ಹೆಚ್ಚುವರಿ ಶಿಕ್ಷಕರ ಕೌನ್ಸಿಲಿಂಗ್ ಮತ್ತು ಸಾಮಾನ್ಯ ವರ್ಗಾವಣೆ ಪ್ರಕ್ರಿಯೆಗೆ ದಿನಾಂಕ ನಿಗದಿಯಾಗಿತ್ತು. ಅಷ್ಟರಲ್ಲಿ ವಿಧಾನಸಭೆ ಚುನಾವಣೆ ಎದುರಾಗಿದ್ದರಿಂದ ವರ್ಗಾವಣೆ ಪ್ರಕ್ರಿಯೆಯನ್ನು ಚುನಾವಣಾ ಆಯೋಗದ ನಿರ್ದೇಶನದಂತೆ ಸರ್ಕಾರ ತಾತ್ಕಾಲಿಕವಾಗಿ ತಡೆ ಹಿಡಿದಿತ್ತು.
Uttara Kannada: ಶಿಕ್ಷಕಿಯ ವರ್ಗಾವಣೆ ನಡೆಸದಂತೆ ವಿದ್ಯಾರ್ಥಿಗಳ ಪ್ರತಿಭಟನೆ
ಇದೀಗ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಮನವಿ ಮೇರೆಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಧಾನ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್ ವರ್ಗಾವಣೆ ಪ್ರಕ್ರಿಯೆ ಪುನಾರಂಭಿಸಲು ಸೂಚಿಸಿ ಶಾಲಾ ಶಿಕ್ಷಣ ಇಲಾಖೆ ಆಯುಕ್ತರಿಗೆ ಪತ್ರ ಬರೆದಿದ್ದಾರೆ. ಇದರ ಬೆನ್ನಲ್ಲೇ ಇಲಾಖೆಯು ಪರಿಷ್ಕೃತ ವೇಳಾಪಟ್ಟಿಸಿದ್ಧತೆ ಆರಂಭಿಸಿದ್ದು, ಗುರುವಾರ ಇಲ್ಲವೇ ಶುಕ್ರವಾರ ಪ್ರಕಟವಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಈಗಾಗಲೇ ಸುಮಾರು 75 ಸಾವಿರಕ್ಕಿಂತ ಹೆಚ್ಚು ಶಿಕ್ಷಕರಿಂದ ವರ್ಗಾವಣೆಗಾಗಿ ಅರ್ಜಿ ಬಂದಿದ್ದು ಸುಮಾರು 25 ಸಾವಿರಕ್ಕೂ ಹೆಚ್ಚು ಶಿಕ್ಷಕರಿಗೆ ವರ್ಗಾವಣೆಯ ಲಾಭ ಸಿಗುವ ನಿರೀಕ್ಷೆ ಇದೆ. ಸರ್ಕಾರಿ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಯರು, ಪ್ರಾಥಮಿಕ ಶಾಲಾ ಶಿಕ್ಷಕರು, ತತ್ಸಮಾನ ವೃಂದದ ಶಿಕ್ಷಕರು, ಸರ್ಕಾರಿ ಪ್ರೌಢ ಶಾಲಾ ಮುಖ್ಯ ಶಿಕ್ಷಕರು, ತತ್ಸಮಾನ ವೃಂದದ ಹೆಚ್ಚುವರಿ ಮತ್ತು ಸಾಮಾನ್ಯ ವರ್ಗಾವಣೆಯ ಗಣಕೀಕೃತ ಕೌನ್ಸಿಲ್‌ಗೆ ಅವಕಾಶ ನೀಡಲಾಗಿದೆ.