ಬೆಂಗಳೂರು (ಸೆ.06):  ಶಿಕ್ಷಕ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚು ಬಲ ತುಂಬುವ ಹೊಸ ಶಿಕ್ಷಣ ನೀತಿಯನ್ನು ರಾಜ್ಯದಲ್ಲಿ ಹಂತ ಹಂತವಾಗಿ ಜಾರಿಗೆ ತರಲು ನಿರ್ಧರಿಸಲಾಗಿದೆ. ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ಅಮೂಲಾಗ್ರ ಸುಧಾರಣೆ ತರುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಹೆಜ್ಜೆ ಇಟ್ಟಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್‌.ಅಶ್ವತ್ಥನಾರಾಯಣ ತಿಳಿಸಿದರು.

ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯಿಂದ ಶನಿವಾರ ಭಾರತ್‌ ಸ್ಕೌಟ್ಸ್‌ ಮತ್ತು ಗೈಡ್ಸ್‌ ಭವನದಲ್ಲಿ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಸರ್ವಪಲ್ಲಿ ರಾಧಾಕೃಷ್ಣನ್‌ ಸೇರಿದಂತೆ ಈ ದೇಶವನ್ನು ಕಟ್ಟಿದ ಮಹಾಪುರುಷರ ಸ್ಫೂರ್ತಿಯೊಂದಿಗೆ ಸರ್ಕಾರ ಕೆಲಸ ಮಾಡುತ್ತಿದೆ. ಶಿಕ್ಷಣ ಕ್ಷೇತ್ರದಲ್ಲಿ ಕರ್ನಾಟಕ ಸಾಕಷ್ಟುಮುಂದಿದೆ. ಸಾಗಬೇಕಿರುವ ದೂರವೂ ಸಾಕಷ್ಟಿದೆ. ಶಿಕ್ಷಣ ಕ್ಷೇತ್ರದಲ್ಲಿ ಕಳೆದ ಒಂದು ವರ್ಷದಲ್ಲಿ ಅನೇಕ ಸುಧಾರಣೆಗಳನ್ನು ಜಾರಿಗೆ ತರಲಾಗಿದೆ ಎಂದರು.

1558 ಕ್ಲರ್ಕ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ ...

ಗುಣಮಟ್ಟದ ಶಿಕ್ಷಣ, ಬೋಧನೆ ಹಾಗೂ ಗುಣಮಟ್ಟದ ವಿದ್ಯಾರ್ಥಿಗಳನ್ನು ರೂಪಿಸಲು ಹೊಸ ಶಿಕ್ಷಣ ನೀತಿ ಸಹಕಾರಿಯಾಗಲಿದೆ. ದೇಶದಲ್ಲೇ ಈ ನೀತಿಯನ್ನು ಮೊದಲು ಜಾರಿ ಮಾಡಿದ ರಾಜ್ಯವಾಗಿ ಕರ್ನಾಟಕ ಹೊರಹೊಮ್ಮಲಿದೆ. ಶೈಕ್ಷಣಿಕ ವ್ಯವಸ್ಥೆಯ ದಿಕ್ಸೂಚಿಯನ್ನೇ ಬದಲಾಯಿಸುವ ಶಕ್ತಿ ರಾಷ್ಟ್ರೀಯ ಶಿಕ್ಷಣ ನೀತಿಗೆ ಇದೆ ಎಂದು ಹೇಳಿದರು.

ಯುಜಿಸಿ ಸದಸ್ಯ ಪ್ರೊ.ಎಂ.ಕೆ.ಶ್ರೀಧರ್‌ ಮಾತನಾಡಿ, ಹೊಸ ಶಿಕ್ಷಣ ನೀತಿ ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಅಮೂಲಾಗ್ರವಾದ ಬದಲಾವಣೆ ತರಲಿದೆ. ಪ್ರಾಥಮಿಕ, ಪ್ರೌಢ ಹಾಗೂ ಉನ್ನತ ಶಿಕ್ಷಣದ ಇಂದಿನ ಅಗತ್ಯವನ್ನು ನೀತಿ ಒಳಗೊಂಡಿದೆ ಎಂದು ಹೇಳಿದರು.

15ರೊಳಗೆ ಪ್ರೌಢಶಾಲಾ ಶಿಕ್ಷಕರಿಗೆ ಬಡ್ತಿ ...

ಉನ್ನತ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಕುಮಾರ್‌ ನಾಯಕ್‌, ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಆಯುಕ್ತ ಪಿ.ಪ್ರದೀಪ್‌, ಬೆಂಗಳೂರು ಕೇಂದ್ರ ವಿವಿ ಕುಲಪತಿ ಪ್ರೊ.ಎಸ್‌.ಜಾಫೆಟ್‌, ಬೆಂಗಳೂರು ಉತ್ತರ ವಿವಿ ಕುಲಪತಿ ಡಾ. ಕೆಂಪರಾಜು, ಉನ್ನತ ಶಿಕ್ಷಣ ಪರಿಷತ್‌ ಕಾರ್ಯನಿರ್ವಾಹಕ ನಿರ್ದೇಶಕ ಗೋಪಾಲಕೃಷ್ಣ ಜೋಷಿ ಉಪಸ್ಥಿತರಿದ್ದರು.

ವಿದ್ಯಾರ್ಥಿಗಳಿಗೆ ಸರ್ಕಾರ ನೆರವು

ಕೊರೋನಾ ವೇಳೆ ಸಿಇಟಿ ಬರೆಯಲಿದ್ದ ವಿದ್ಯಾರ್ಥಿಗಳಿಗೆ ಗೆಟ್‌ಸೆಟ್‌ಗೋ ಮೂಲಕ ಆನ್‌ಲೈನ್‌ ತರಗತಿಗಳನ್ನು ನಡೆಸಲಾಯಿತು. ಎರಡು ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆದುಕೊಂಡರು. ಯಶಸ್ವಿಯಾಗಿ ಸಿಇಟಿ ಪರೀಕ್ಷೆ ನಡೆಸಿದ್ದೇವೆ. ಇತರೆ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ 70 ಸಾವಿರ ಆನ್‌ಲೈನ್‌ ತರಗತಿಗಳನ್ನು ನಡೆಸಿದ್ದೇವೆ. 12 ಸಾವಿರಕ್ಕೂ ಹೆಚ್ಚು ಉಪನ್ಯಾಸಕರು ಯೂ-ಟ್ಯೂಬ್‌ ಮೂಲಕ ಮಕ್ಕಳಿಗೆ ಪಾಠ ಮಾಡಿದ್ದಾರೆ ಎಂದು ಸಚಿವ ಡಾ

ಸಿ.ಎನ್‌. ಅಶ್ವತ್ಥ ನಾರಾಯಣ ಮಾಹಿತಿ ನೀಡಿದರು.