ಬೆಂಗಳೂರು[ಮಾ.21]: ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದು ಪಕ್ಷಗಳೆಲ್ಲಾ ಬಿರುಸಿನ ಪ್ರಚಾರದಲ್ಲಿ ತೊಡಗಿಸಿಕೊಂಡಿವೆ. ರಾಜ್ಯದಲ್ಲೂ ರಾಜಕೀಯ ಮುಖಂಡರು ಮತದಾರ ಓಲೈಕೆಯಲ್ಲಿ ತೊಡಗಿಸಿಕೊಂಡಿವೆ. ಕರ್ನಾಟಕದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಂಡು ಚುನಾವಣಾ ಕಣಕ್ಕಿಳಿಯುತ್ತಿವೆ. ಈಗಾಗಲೇ ಕ್ಷೇತ್ರ ಹಂಚಿಕೆ ನಡೆದಿದ್ದು, ಅಭ್ಯರ್ಥಿಗಳ ಆಯ್ಕೆ ನಡೆಯುತ್ತಿದೆ. ಆದರೀಗ ಬೆಂಗಳೂರು ಉತ್ತರ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಮಹತ್ತರ ಬೆಳವಣಿಗೆಗಳಾಗಿವೆ. ಎಲ್ಲವೂ ಸರಿಯಾಗಿದೆ ಎನ್ನುವಷ್ಟರಲ್ಲಿ ಗೌಡರು ಈ ಕ್ಷೇತ್ರದಿಂದ ಹಿಂದೆ ಸರಿದಿದ್ದು, ಬೆಂಗಳೂರು ಉತ್ತರ ಕಾಂಗ್ರೆಸ್ ಪಾಲಾಗಿದೆ.

ಹೌದು ಮೈತ್ರಿ ಪಕ್ಷಗಳ ನಡುವೆ ಕ್ಷೇತ್ರ ಹಂಚಿಕೆ ನಡೆದಂದಿನಿಂದಲೂ ಬೆಂಗಳೂರು ಉತ್ತರ ಕ್ಷೇತ್ರ ಭಾರೀ ಸದ್ದು ಮಾಡಿತ್ತು. ಇಲ್ಲಿಂದ ದೇವೇಗೌಡರೇ ಕಣಕ್ಕಿಳಿಯುವ ಸಾಧ್ಯತೆಗಳಿವೆ ಎನ್ನಲಾಗಿತ್ತಾದರೂ ತುಮಕೂರಿನ ಮೇಲೂ ಗೌಡರು ಕಣ್ಣಿಟ್ಟಿದ್ದರು. ಹೀಗಾಗಿ ಗೊಂದಲಗಳು ಏರ್ಪಟ್ಟಿದ್ದವು. ಆದರೀಗ ದೇವೇಗೌಡರು ಬೆಂಗಳೂರು ಉತ್ತರದಿಂದ ಸ್ಪರ್ಧಿಸುವ ನಿರ್ಧಾರವನ್ನು ಕೈ ಬಿಟ್ಟಿದ್ದಾರೆ ಹಾಗೂ ಹೀಗಾಗಿ ಈ ಕ್ಷೇತ್ರವನ್ನು ಜೆಡಿಎಸ್ ಕಾಂಗ್ರೆಸ್ ಗೆ ಬಿಟ್ಟುಕೊಟ್ಟಿದೆ. 

ಯಾರಾಗ್ತಾರೆ ಕಾಂಗ್ರೆಸ್ ಅಭ್ಯರ್ಥಿ?

ಕಾಂಗ್ರೆಸ್ ತೆಕ್ಕೆಗೆ ಸೇರಿರುವ ಈ ಕ್ಷೇತ್ರದಿಂದ ಮೈತ್ರಿ ಕೂಟದ ಅಭ್ಯರ್ಥಿಯಾಗಿ ಒಕ್ಕಲಿಗ ಮುಖಂಡರಾಗಿರುವ ಕಾಂಗ್ರೆಸ್ ನ ಬಿ.ಎಲ್.ಶಂಕರ್ ಸ್ಪರ್ಧಿಸುವ ಅನುಮಾನಗಳು ವ್ಯಕ್ತವಾಗಿವೆ. ಅತ್ತ ತಮ್ಮ ನಿರ್ಧಾರ ಬದಲಾಯಿಸಿರುವ ದೇವೇಗೌಡರು ತುಮಕೂರಿನಿಂದ ಸ್ಪರ್ಧಿಸುವುದು ಬಹುತೇಕ ಖಚಿತವಾಗಿದೆ. ದೋಸ್ತಿ ಪಕ್ಷಗಳ ನಡುವಿನ ಈ ಮಹತ್ತರ ಬದಲಾವಣೆಯಿಂದ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದ 21 ಕ್ಷೇತ್ರಗಳಲ್ಲಿ ಕಾಂಗ್ರೆಸ್, ಹಾಗೂ ಜೆಡಿಎಸ್ 7 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿವೆ.

ಮತದಾನ ನಮ್ಮ ಹಕ್ಕು... ಪ್ರಜಾಪ್ರಭುತ್ವದ ಉತ್ಸವವನ್ನು ಯಶಸ್ವಿಗೊಳಿಸೋಣ...

ದೇಶದಲ್ಲಿ ಏ.11 ರಿಂದ ಮೇ 19ರವರೆಗೆ ಏಳು ಹಂತಗಳಲ್ಲಿ ಮತದಾನ ನಡೆಯಲಿದ್ದು, ಕರ್ನಾಟಕದಲ್ಲಿ ಏ.18 ಹಾಗೂ ಏ.23ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ. 543 ಲೋಕಸಭಾ ಕ್ಷೇತ್ರಗಳಿಗೆ ನಡೆಯುವ ಚುನಾವಣೆಯಲ್ಲಿ ಮತ ಚಲಾಯಿಸಲು 90 ಕೋಟಿ ಮಂದಿ ಅರ್ಹರಾಗಿದ್ದಾರೆ