ಬೆಂಗಳೂರು (ಮಾ. 19):  ಸಮ್ಮಿಶ್ರ ಸರ್ಕಾರದ ಅಳಿವು-ಉಳಿವಿನ ಪರೀಕ್ಷೆ ಎಂದೇ ಬಿಂಬಿತವಾಗಿರುವ ಲೋಕಸಭೆ ಚುನಾವಣೆಗೆ ರಾಜ್ಯದಲ್ಲಿ ನಡೆಯುವ ಮೊದಲ ಹಂತದ ಚುನಾವಣೆಗೆ ಮಂಗಳವಾರ ಅಧಿಸೂಚನೆ ಪ್ರಕಟವಾಗಲಿದ್ದು, ಚುನಾವಣಾ ಕಣ ರಂಗೇರಲಿದೆ.

ರಾಹುಲ್ ಸಂವಾದದಲ್ಲಿ ಮೋದಿ ಪರ ಘೋಷಣೆ: ಕಾಂಗ್ರೆಸ್ ಅಧ್ಯಕ್ಷನಿಗೆ ತೀವ್ರ ಮುಜುಗರ

ಚುನಾವಣಾ ಕಣಕ್ಕಿಳಿಯುವ ಅಭ್ಯರ್ಥಿಗಳಿಗೆ ಇಂದಿನಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ. ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ ಮೊದಲ ಹಂತದಲ್ಲಿ 14 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಮಾ.26ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಮಾ.27ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಮಾ.29ಕ್ಕೆ ಉಮೇದುವಾರಿಕೆ ಹಿಂಪಡೆಯಲು ಕೊನೆಯ ದಿನಾಂಕವಾಗಿದೆ. ಏ.18ರಂದು ಮತದಾನ ನಡೆಯಲಿದೆ.

ನಾಮಪತ್ರಗಳನ್ನು ಸ್ವೀಕರಿಸಲು 14 ಕ್ಷೇತ್ರಗಳ ಚುನಾವಣಾಧಿಕಾರಿಗಳು ಸಜ್ಜಾಗಿದ್ದಾರೆ. ಕಾಂಗ್ರೆಸ್‌, ಜೆಡಿಎಸ್‌ ಮತ್ತು ಬಿಜೆಪಿಯಲ್ಲಿ ಅಭ್ಯರ್ಥಿಗಳ ಅಂತಿಮ ಕಸರತ್ತು ನಡೆಯುತ್ತಿರುವ ಹಿನ್ನೆಲೆಯಲ್ಲಿ ಮೊದಲ ದಿನ ನಿರೀಕ್ಷಿತ ಮಟ್ಟದಲ್ಲಿ ಉಮೇದುವಾರಿಕೆ ಸಲ್ಲಿಕೆಯಾಗುವುದಿಲ್ಲ. ಕೆಲವು ಸ್ವತಂತ್ರ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡುವ ಸಾಧ್ಯತೆ ಇದೆ.

ಏಪ್ರಿಲ್‌ ಅಂತ್ಯಕ್ಕೆ ಪಿಯು, ಎಸ್ಸೆಸ್ಸೆಲ್ಸಿ ಫಲಿತಾಂಶ

ಬುಧವಾರದಿಂದ ನಾಮಪತ್ರ ಸಲ್ಲಿಕೆಯ ಆರ್ಭಟ ಜೋರಾಗಲಿದೆ. ಎರಡನೇ ಹಂತದಲ್ಲಿ ಇನ್ನುಳಿದ 14 ಕ್ಷೇತ್ರಗಳಿಗೆ ಏ.23ರಂದು ಮತದಾನ ನಡೆಯಲಿದ್ದು, ಮಾ.28ರಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭಗೊಳ್ಳಲಿದೆ. ಏ.4ಕ್ಕೆ ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಏ.5ರಂದು ನಾಮಪತ್ರಗಳ ಪರಿಶೀಲನೆ ಹಾಗೂ ಏ.8ರಂದು ನಾಮಪತ್ರ ಹಿಂಪಡೆಯಲು ಅಂತಿಮ ದಿನವಾಗಿರುತ್ತದೆ.

ಮೊದಲ ಹಂತದ 14 ಕ್ಷೇತ್ರಗಳು

ಮೈಸೂರು, ಚಾಮರಾಜನಗರ, ದಕ್ಷಿಣ ಕನ್ನಡ, ಚಿತ್ರದುರ್ಗ, ಮಂಡ್ಯ, ಹಾಸನ, ತುಮಕೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಬೆಂಗಳೂರು ಕೇಂದ್ರ, ಚಿಕ್ಕಬಳ್ಳಾಪುರ, ಕೋಲಾರ, ಉಡುಪಿ-ಚಿಕ್ಕಮಗಳೂರು.

ಮೈತ್ರಿಯೊಂದಿಗೆ ಕಣಕ್ಕಿಳಿಯುತ್ತಿರುವ ಜೆಡಿಎಸ್‌ ತನಗೆ ಲಭ್ಯವಾಗಿರುವ ಎಂಟು ಕ್ಷೇತ್ರಗಳ ಪೈಕಿ ಈಗಾಗಲೇ ಮಂಡ್ಯ, ಹಾಸನ, ಶಿವಮೊಗ್ಗ ಕ್ಷೇತ್ರದ ಅಭ್ಯರ್ಥಿಯನ್ನು ಅಂತಿಮಗೊಳಿಸಿದೆ. ಇನ್ನುಳಿದ ಕ್ಷೇತ್ರಗಳ ಅಭ್ಯರ್ಥಿಗಳನ್ನು ಅಂತಿಮಗೊಳಿಸಲು ತೀವ್ರ ಕಸರತ್ತು ನಡೆಯುತ್ತಿದೆ.

ಸರ್ಕಾರದ ಪಾಲುದಾರ ಪಕ್ಷ ಕಾಂಗ್ರೆಸ್‌ ಮತ್ತು ಬಿಜೆಪಿ ಒಂದೆರಡು ದಿನದಲ್ಲಿ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಲಿದೆ. ಬಿಎಸ್‌ಪಿ ಸಹ ಎಲ್ಲಾ ಕ್ಷೇತ್ರದಲ್ಲಿ ಸ್ಪರ್ಧಿಸಲು ಮುಂದಾಗಿರುವ ಹಿನ್ನೆಲೆಯಲ್ಲಿ ಅಭ್ಯರ್ಥಿ ಆಯ್ಕೆಯಲ್ಲಿ ತೊಡಗಿದೆ. ಜೆಡಿಯು, ಸಿಪಿಎಂ ಸೇರಿದಂತೆ ಇನ್ನಿತರ ಪಕ್ಷಗಳು ಸಹ ಚುನಾವಣಾ ಕಣಕ್ಕೆ ಧುಮುಕಲಿವೆ.

ಮಿತ್ರ ಪಕ್ಷಗಳಿಗೆ ಪ್ರತಿಷ್ಠೆಯ ಕಣವಾಗಿರುವ ಕ್ಷೇತ್ರಗಳಿಗೆ ಮೊದಲ ಹಂತದಲ್ಲಿಯೇ ಚುನಾವಣೆ ನಡೆಯುವುದರಿಂದ ಭಾರೀ ಕುತೂಹಲ ಮೂಡಿದೆ. ಮೈಸೂರು, ಚಾಮರಾಜನಗರ, ದಕ್ಷಿಣ ಕನ್ನಡ, ಚಿತ್ರದುರ್ಗ, ಮಂಡ್ಯ, ಹಾಸನ, ತುಮಕೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಬೆಂಗಳೂರು ಕೇಂದ್ರ, ಚಿಕ್ಕಬಳ್ಳಾಪುರ, ಕೋಲಾರ, ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಏ.18ರಂದು ಮತದಾನ ನಡೆಯಲಿದೆ.