ಬೆಂಗಳೂರು :  ಲೋಕಸಭಾ ಚುನಾವಣೆ ಪ್ರಚಾರಕ್ಕಾಗಿ ಸಮ್ಮಿಶ್ರ ಸರ್ಕಾರದ ಮಿತ್ರ ಪಕ್ಷದಲ್ಲಿ ಉಂಟಾಗಿರುವ ‘ಅಸಹಕಾರ ಚಳವಳಿ’ ಶಮನಕ್ಕೆ ಒಗ್ಗಟ್ಟು ಪ್ರದರ್ಶಿಸಿದ ಕಾಂಗ್ರೆಸ್‌-ಜೆಡಿಎಸ್‌ ವರಿಷ್ಠರು, ಬಿಜೆಪಿಯನ್ನು ದೂರವಿಡುವ ಉದ್ದೇಶದಿಂದ ಐಕ್ಯತೆಯ ಮಂತ್ರ ಜಪಿಸಿದ್ದಾರೆ. ಅಲ್ಲದೆ, ಜಿಲ್ಲೆಗಳಲ್ಲಿ ಉಭಯ ಪಕ್ಷಗಳ ನಾಯಕರು ಭಿನ್ನತೆ ಮರೆತು ಕೆಲಸ ಮಾಡುವಂತೆ ದೋಸ್ತಿ ನಾಯಕರು ನಿರ್ದೇಶನ ನೀಡಿದ್ದಾರೆ.

ಉಭಯ ಪಕ್ಷಗಳ ಮುಖಂಡರು ಚುನಾವಣಾ ಪ್ರಚಾರವನ್ನು ಜಂಟಿಯಾಗಿ ನಡೆಸಲು ನಿರ್ಧರಿಸಿದ್ದು, ಯಾವುದೇ ರೀತಿಯಿಂದಲೂ ನಾಯಕರು ಹಾಗೂ ಕಾರ್ಯಕರ್ತರು ಒಡಕಿನ ಮಾತುಗಳನ್ನಾಡದಂತೆ ಕಟ್ಟುನಿಟ್ಟಿನ ಸೂಚನೆ ರವಾನಿಸಲು ನಿರ್ಧರಿಸಲಾಗಿದೆ. ಅಲ್ಲದೆ, ಮಾರ್ಚ್ 31ರಂದು ಬೆಂಗಳೂರಲ್ಲಿ ಜಂಟಿಯಾಗಿ ಸಮಾವೇಶ ನಡೆಸಿ ಚುನಾವಣಾ ಪ್ರಚಾರಕ್ಕೆ ರಣಕಹಳೆ ಮೊಳಗಿಸಲು ತೀರ್ಮಾನಿಸಲಾಗಿದೆ.

ಈ ಸಮಾವೇಶದಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ, ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ ಎಚ್‌.ಡಿ.ದೇವೇಗೌಡ ಸೇರಿದಂತೆ ಎರಡೂ ಪಕ್ಷಗಳ ಮುಖಂಡರು ಪಾಲ್ಗೊಳ್ಳಲಿದ್ದಾರೆ. ಅಲ್ಲದೇ, ಒಡಕು ಧ್ವನಿ ಮೂಡದಂತೆ ಪ್ರತಿ ಜಿಲ್ಲೆಗೂ ಉಭಯ ಪಕ್ಷಗಳಿಂದ ವೀಕ್ಷಕರನ್ನು ನಿಯೋಜಿಸಲು ನಿರ್ಣಯ ಕೈಗೊಳ್ಳಲಾಗಿದೆ.

ಮಂಡ್ಯ, ಹಾಸನ ಸೇರಿದಂತೆ ಇತರೆಡೆಗಳಲ್ಲಿ ಮಿತ್ರ ಪಕ್ಷದ ಕಾರ್ಯಕರ್ತರ ನಡುವೆ ಸಹಕಾರ ಇಲ್ಲದಿರುವುದರಿಂದ ನಗರದ ಖಾಸಗಿ ಹೋಟೆಲ್‌ನಲ್ಲಿ ಮಂಗಳವಾರ ಎರಡು ಪಕ್ಷಗಳ ಮುಖಂಡರು ಮಹತ್ವದ ಸಭೆ ನಡೆಸಿದರು. ಸಭೆಯಲ್ಲಿ ಲೋಕಸಭೆ ಚುನಾವಣೆಯಲ್ಲಿ ರೂಪಿಸಬೇಕಾದ ರಣತಂತ್ರಗಳ ಕುರಿತು ವಿಸ್ತೃತವಾಗಿ ಚರ್ಚಿಸಿದರು. ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ, ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ, ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌, ಕಾರ್ಯಾಧ್ಯಕ್ಷ ಈಶ್ವರ್‌ ಖಂಡ್ರೆ, ಸಚಿವ ಡಿ.ಕೆ.ಶಿವಕುಮಾರ್‌ ಸೇರಿದಂತೆ ಇತರರು ಸಭೆಯಲ್ಲಿ ಭಾಗವಹಿಸಿದ್ದರು.

ಬಿಜೆಪಿಯನ್ನು ಚುನಾವಣೆಯಲ್ಲಿ ಮಣಿಸಬೇಕಾದರೆ ಉಭಯ ಪಕ್ಷದಲ್ಲಿ ಐಕ್ಯತೆ ಇರಬೇಕು ಎಂಬ ಉದ್ದೇಶದಿಂದ ಮಿತ್ರಪಕ್ಷಗಳ ನಾಯಕರು ಭಿನ್ನರಾಗ ವ್ಯಕ್ತಪಡಿಸದೆ ಕಾರ್ಯಕರ್ತರಲ್ಲಿ ಹುರುಪು ಮೂಡಿಸಬೇಕು ಎಂಬ ಕಟ್ಟಪ್ಪಣೆಯನ್ನು ಸಭೆಯ ಮೂಲಕ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಸಭೆಯ ಬಳಿಕ ನಡೆಸಿದ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ, ಲೋಕಸಭೆ ಚುನಾವಣೆಯಲ್ಲಿ ಜಂಟಿಯಾಗಿ ಪ್ರಚಾರ ನಡೆಸುವುದು ಈಗ ಕೈಗೊಂಡಿರುವ ತೀರ್ಮಾನವಲ್ಲ. ಸಮ್ಮಿಶ್ರ ಸರ್ಕಾರ ರಚನೆ ವೇಳೆಯೇ ನಿರ್ಣಯಿಸಲಾಗಿದೆ. ಇದರ ಪರಿಣಾಮವಾಗಿ ಲೋಕಸಭೆ ಮತ್ತು ವಿಧಾನಸಭೆ ಉಪಚುನಾವಣೆಯಲ್ಲಿ ಮೈತ್ರಿ ಪಕ್ಷಗಳ ಅಭ್ಯರ್ಥಿಗಳು ಭಾರೀ ಅಂತರದಲ್ಲಿ ಗೆಲುವು ಸಾಧಿಸಲು ಸಾಧ್ಯವಾಗಿದೆ. ಶಿವಮೊಗ್ಗ ಲೋಕಸಭೆ ಉಪಚುನಾವಣೆಯಲ್ಲಿ ಬಿಜೆಪಿಗೆ ಉತ್ತಮ ಪೈಪೋಟಿ ನೀಡಲಾಗಿದೆ. ರಾಜ್ಯದಲ್ಲಿ ಕೋಮುವಾದಿ ಪಕ್ಷಕ್ಕೆ ಬೆಂಬಲ ಕಡಿಮೆ ಇದೆ. ಜಾತ್ಯತೀತ ನಿಲುವಿನಲ್ಲಿ ಜನತೆಗೆ ನಂಬಿಕೆ ಇದೆ. ಬಿಜೆಪಿಯನ್ನು ಮಣಿಸಬೇಕು ಎಂಬ ಉದ್ದೇಶದಿಂದ ಚುನಾವಣೆಯನ್ನು ಎದುರಿಸುತ್ತಿದ್ದೇವೆ ಎಂದು ಹೇಳಿದರು.

ಮುಂದಿನ 2-3 ದಿನದಲ್ಲಿ ಎರಡು ಪಕ್ಷಗಳ ಅಭ್ಯರ್ಥಿಗಳ ಘೋಷಣೆಯಾಗಲಿದೆ. ಉಭಯ ಪಕ್ಷದ ಶಾಸಕರು, ಸಂಸದರು, ಸಚಿವರು, ಜಿಲ್ಲಾ ಘಟಕದ ಅಧ್ಯಕ್ಷರು ಸೇರಿದಂತೆ ಎಲ್ಲಾ ನಾಯಕರು ಏನೇ ವ್ಯತ್ಯಾಸ, ಭಿನ್ನಾಭಿಪ್ರಾಯಗಳಿದ್ದರೂ ಅದೆಲ್ಲವನ್ನು ಬದಿಗೊತ್ತಿ ಮಿತ್ರ ಪಕ್ಷಗಳ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಬೇಕು ಎಂಬ ಸಂದೇಶವನ್ನು ಎರಡು ಪಕ್ಷದ ವರಿಷ್ಠರು ರವಾನಿಸಲಿದ್ದಾರೆ. ಪ್ರಚಾರದ ವೇಳೆ ಮತ್ತು ಮತದಾರರನ್ನು ಸೆಳೆಯುವಾಗ ಭಿನ್ನಾಭಿಪ್ರಾಯ ಮೂಡದಂತೆ ಎಚ್ಚರ ವಹಿಸಬೇಕು. ಬಿಜೆಪಿಯನ್ನು ಸೋಲಿಸಿ ರಾಜ್ಯದಲ್ಲಿನ 28 ಕ್ಷೇತ್ರಗಳನ್ನು ಗೆಲ್ಲಿಸುವುದು ದೋಸ್ತಿ ಪಕ್ಷಗಳ ಗುರಿಯಾಗಿದೆ ಎಂದು ಹೇಳಿದರು.

ಜಿಲ್ಲೆಗಳಲ್ಲಿ ಭಿನ್ನರಾಗ ಕೇಳಬಾರದು ಎಂಬ ಉದ್ದೇಶದಿಂದ ಎರಡೂ ಪಕ್ಷಗಳಿಂದ ಒಬ್ಬೊಬ್ಬರನ್ನು ವೀಕ್ಷಕರನ್ನಾಗಿ ನಿಯೋಜಿಸಲಾಗುವುದು. ಪ್ರತಿ ಜಿಲ್ಲೆಯಲ್ಲಿಯೂ ವೀಕ್ಷಕರ ನೇಮಕ ಮಾಡಲಾಗುವುದು. ಪಕ್ಷದ ಕಾರ್ಯಕರ್ತರು ಮುಖಂಡರ ತೀರ್ಮಾನಕ್ಕೆ ಬದ್ಧವಾಗಿರಲಿದ್ದಾರೆ ಎಂಬ ವಿಶ್ವಾಸ ಇದೆ. ವೈಯಕ್ತಿಕ ಹಿತಾಸಕ್ತಿಗಳನ್ನು ಬದಿಗೊತ್ತಿ ರಾಜ್ಯ, ರಾಷ್ಟ್ರದ ಮತ್ತು ಪ್ರಜಾಪ್ರಭುತ್ವದ ಹಿತಾಸಕ್ತಿಯಿಂದ ಕೆಲಸ ಮಾಡಬೇಕು ಎಂಬ ಸಂದೇಶವನ್ನು ಜನರಿಗೆ ತಿಳಿಸಿಕೊಡಬೇಕು ಎಂದರು.

ಮಾ.31ರಿಂದ ರಾಜ್ಯದಲ್ಲಿ ಚುನಾವಣಾ ಪ್ರಚಾರದ ರಣಕಹಳೆ ಮೊಳಗಿಸಲಾಗುವುದು. ಸಾರ್ವಜನಿಕ ಸಭೆ ನಡೆಸುವ ಮೂಲಕ ಪ್ರಚಾರ ಆರಂಭಿಸಲಾಗುವುದು. ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಮತ್ತು ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ಸೇರಿದಂತೆ ಉಭಯ ಪಕ್ಷಗಳ ನಾಯಕರು ಭಾಗವಹಿಸಲಿದ್ದಾರೆ. ಸಾರ್ವಜನಿಕ ಸಭೆಯ ತರುವಾಯ ಜಂಟಿಯಾಗಿ 28 ಕ್ಷೇತ್ರದಲ್ಲಿ ಪ್ರಚಾರ ಕೈಗೊಂಡು ಕಾರ್ಯಕರ್ತರ ಮನಸು ಗಟ್ಟಿಗೊಳಿಸಿ ಹೊಸ ಹುರುಪು ಮೂಡುವಂತೆ ಮಾಡಲಾಗುವುದು ಎಂದು ತಿಳಿಸಿದರು.

ಜಿಲ್ಲೆಗಳಲ್ಲಿ ಭಿನ್ನರಾಗ ಕೇಳಬಾರದು ಎಂಬ ಉದ್ದೇಶದಿಂದ ಉಭಯ ಪಕ್ಷಗಳಿಂದ ಪ್ರತಿ ಜಿಲ್ಲೆಯಲ್ಲಿಯೂ ವೀಕ್ಷಕರ ನೇಮಕ ಮಾಡಲಾಗುವುದು. ಪಕ್ಷದ ಕಾರ್ಯಕರ್ತರು ಮುಖಂಡರ ತೀರ್ಮಾನಕ್ಕೆ ಬದ್ಧವಾಗಿರಲಿದ್ದಾರೆ ಎಂಬ ವಿಶ್ವಾಸ ಇದೆ. ಪಕ್ಷದ ಕಾರ್ಯಕರ್ತರು, ಮುಖಂಡರು ವೈಯಕ್ತಿಕ ಹಿತಾಸಕ್ತಿಗಳನ್ನು ಬದಿಗೊತ್ತಿ ರಾಜ್ಯ, ರಾಷ್ಟ್ರದ ಮತ್ತು ಪ್ರಜಾಪ್ರಭುತ್ವದ ಹಿತಾಸಕ್ತಿಯಿಂದ ಕೆಲಸ ಮಾಡಬೇಕು.

- ಸಿದ್ದರಾಮಯ್ಯ, ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ

ಮೈಸೂರು, ಮಂಡ್ಯದಲ್ಲಿ ಏನಾಗುತ್ತದೋ ಎಂಬ ಎಲ್ಲಾ ರೀತಿಯ ಅನುಮಾನಗಳಿಗೆ ಸಭೆಯಲ್ಲಿ ತೆರೆ ಎಳೆಯಲಾಗಿದೆ. ಯಾವುದೇ ರೀತಿಯ ಅನುಮಾನಗಳು ಬೇಡ. ನಾನು ಮತ್ತು ಸಿದ್ದರಾಮಯ್ಯ ಜಂಟಿಯಾಗಿಯೇ ಪ್ರಚಾರ ಕೈಗೊಳ್ಳುತ್ತೇವೆ. ಅಲ್ಲದೆ, ಕಾಂಗ್ರೆಸ್‌ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಇತರೆ ಎಲ್ಲಾ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕಾರ್ಯ ನಿರ್ವಹಿಸಲಾಗುವುದು.

- ಎಚ್‌.ಡಿ.ದೇವೇಗೌಡ, ಜೆಡಿಎಸ್‌ ವರಿಷ್ಠ

ಮತದಾನ ನಮ್ಮ ಹಕ್ಕು... ಪ್ರಜಾಪ್ರಭುತ್ವದ ಉತ್ಸವವನ್ನು ಯಶಸ್ವಿಗೊಳಿಸೋಣ...

ದೇಶದಲ್ಲಿ ಏ.11 ರಿಂದ ಮೇ 19ರವರೆಗೆ ಏಳು ಹಂತಗಳಲ್ಲಿ ಮತದಾನ ನಡೆಯಲಿದ್ದು, ಕರ್ನಾಟಕದಲ್ಲಿ ಏ.18 ಹಾಗೂ ಏ.23ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ. 543 ಲೋಕಸಭಾ ಕ್ಷೇತ್ರಗಳಿಗೆ ನಡೆಯುವ ಚುನಾವಣೆಯಲ್ಲಿ ಮತ ಚಲಾಯಿಸಲು 90 ಕೋಟಿ ಮಂದಿ ಅರ್ಹರಾಗಿದ್ದಾರೆ