ಶಿವಮೊಗ್ಗ : ಲೋಕಸಭಾ ಚುನಾವಣೆಗೆ ರಾಜ್ಯದಲ್ಲಿ ಕೆಲ ದಿನವಷ್ಟೇ ಬಾಕಿ ಇದೆ. ಇದೇ ವೇಳೆ ಬಿಜೆಪಿ ನಾಯಕರು ಭರ್ಜರಿ ಪ್ರಚಾರದಲ್ಲಿ ನಿರತರಾಗಿದ್ದು, ಅತಿ ಹೆಚ್ಚಿನ ಸ್ಥಾನ ಪಡೆದು ಗೆಲ್ಲುವ ಭರವಸೆಯಲ್ಲಿದ್ದಾರೆ. 

ಇನ್ನು ಶಿವಮೊಗ್ಗದಲ್ಲಿ ಮಾತನಾಡಿದ ಬಿಜೆಪಿ ನಾಯಕ ಕೆ.ಎಸ್. ಈಶ್ವರಪ್ಪ  ರಾಜ್ಯದಲ್ಲಿ ಬಿಜೆಪಿಗೆ ನಿರೀಕ್ಷೆಗೂ ಮೀರಿ ಬೆಂಬಲ ಸಿಕ್ಕಿದ್ದು
22 ಕ್ಕೂ ಹೆಚ್ಚು ಸ್ಥಾನ ಪಡೆಯಲಿದೆ ಎಂದು ಹೇಳಿದ್ದಾರೆ. 

ಕಾಂಗ್ರೆಸ್ -  ಜೆಡಿಎಸ್ ಪಕ್ಷಗಳ ಮೈತ್ರಿ ಈಗಾಗಲೇ ಮುರಿದು ಬಿದ್ದಿದೆ. ಹೆಚ್ಚಿನ ಸ್ಥಾನ ಗಳಿಸಲು ಸಾಧ್ಯವಿಲ್ಲ.  ದೇವೇಗೌಡರು ಮತ್ತವರ ಮೊಮ್ಮಕ್ಕಳು ಕಳೆದ ಬಾರಿ ಗೆದ್ದ 2 ಸ್ಥಾನ ಕೂಡ ಗೆಲ್ಲಲು ಸಾಧ್ಯವಿಲ್ಲ. ಕಾಂಗ್ರೆಸ್ ಕೂಡ ಎರಡಂಕಿ ದಾಟುವುದಿಲ್ಲ ಎಂದರಿ. 

ಗೌಡರ ಕುಟುಂಬಕ್ಕೆ ಸುಳ್ಳು ಹೇಳುವುದು ಅಭ್ಯಾಸವಾಗಿದೆ. ಮೈತ್ರಿ ಪಕ್ಷ 22 ಸ್ಥಾನ ಗೆಲ್ಲದಿದ್ದರೆ ನಿವೃತ್ತಿ ಪಡೆಯುವುದಾಗಿ ಹೇಳಿದ್ದಾರೆ. ಹಿಂದೆ ದೇವೇಗೌಡರೂ, ಮೋದಿ ಪ್ರಧಾನಿಯಾದರೆ ದೇಶ ಬಿಡುತ್ತೇನೆ ಎಂದಿದ್ದರು.  ನೀವಿಬ್ಬರು ರಾಜಕೀಯ ಸನ್ಯಾಸ ಹಾಗೂ ದೇಶ ಬಿಟ್ಟು ಹೋಗ ಬೇಕಾಗಿಲ್ಲ. ಸುಳ್ಳು ಹೇಳುವುದು ಬಿಡಿ ಎಂದು ಗೌಡರ ಕುಟುಂಬದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. 

ಇನ್ನು ಇದೇ ವೇಳೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಮತ್ತೆ ಅಧಿಕಾರಕ್ಕೆ ಬಂದು ಯಡಿಯೂರಪ್ಪ ಸಿಎಂ ಆಗುತ್ತಾರೆ ಎಂದು ಭವಿಷ್ಯ ನುಡಿದಿದ್ದಾರೆ. 

ದೇಶದಲ್ಲಿ ಏ.11 ರಿಂದ ಮೇ 19ರವರೆಗೆ ಏಳು ಹಂತಗಳಲ್ಲಿ ಮತದಾನ. ಕರ್ನಾಟಕದಲ್ಲಿ ಏ.18 ಹಾಗೂ ಏ.23ರಂದು ಎರಡು ಹಂತಗಳಲ್ಲಿ ಮತದಾನ. ಭಾರತದಲ್ಲಿ 543 ಲೋಕಸಭಾ ಕ್ಷೇತ್ರ, ಕರ್ನಾಟಕದಲ್ಲಿ 28.