ಬೆಂಗಳೂರು(ಮೇ.23): ಲೋಕಸಭೆ ಚುನಾವಣೆಯಲ್ಲಿ ಹೀನಾಯ ಸೋಲಿನತ್ತ ಹೆಜ್ಜೆ ಇರಿಸಿರುವ ಆಡಳಿತಾರೂಢ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದ ಇಂದು ಉರುಳುವ ಸಾಧ್ಯತೆ ದಟ್ಟವಾಗಿದೆ.

ಚುನಾವಣೆಯಲ್ಲಿ ಹೀನಾಯ ಸೋಲು ಅನುಭವಿಸಲಿರುವ ಪರಿಣಾಮ ಸಿಎಂ ಕುಮಾರಸ್ವಾಮಿ ಇಂದು ರಾಜೀನಾಮೆ ನೀಡಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ಈ ಕುರಿತು ರಾಷ್ಟ್ರೀಯ ವಾಹಿನಿಗಳು ಸುದ್ದಿ ಪ್ರಸಾರ ಮಾಡುತ್ತಿದ್ದು, ಇಂದು ಸಂಜೆ ತುರ್ತು ಸಭೆ ನಡೆಸಿ ರಾಜೀನಾಮೆ ಪ್ರಕಟಿಸಲಿದ್ದಾರೆ ಎನ್ನಲಾಗಿದೆ. ಮೈತ್ರಿ ಸರ್ಕಾರಕ್ಕೆ ಇಂದು ಒಂದು ವರ್ಷ ತುಂಬಿದ್ದು, ಇಂದೇ ಸಿಎಂ ರಾಜೀನಾಮೆ ನೀಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಮಂಡ್ಯ, ತುಮಕೂರಿನಲ್ಲಿ ಜೆಡಿಎಸ್ ಸೋಲು ಖಚಿತವಾಗಿದ್ದು, ಕಾಂಗ್ರೆಸ್ ಕೂಡ ರಾಜ್ಯದಲ್ಲಿ ಕೇವಲ 2-3 ಕ್ಷೇತ್ರಗಳಲ್ಲಷ್ಟೇ ಗೆಲುವು ದಾಖಲಿಸಲಿದೆ. ಈ ಹಿನ್ನೆಲೆಯಲ್ಲಿ ಸಿಎಂ ಕುಮಾರಸ್ವಾಮಿ ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.