ಕೇರಳ(ಮಾ.23): ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ 2019ರ ಲೋಕಸಭೆ ಚುನಾವಣೆಯಲ್ಲಿ ಯಾವ ಕ್ಷೇತ್ರದಿಂದ ಸ್ಪರ್ಧಿಸಬೇಕು ಎಂಬ ಗೊಂದಲದಲ್ಲಿ ಇದ್ದಂತಿದೆ.

ರಾಹುಲ್ ಕರ್ನಾಟಕದಿಂದ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲಿದ್ದಾರೆ ಎಂಬ ಮಾತುಗಳು ಕೇಳಿ ಬಂದಿದ್ದವು. ಇದೀಗ ರಾಹುಲ್ ಕೇರಳದಿಂದ ಸ್ಪರ್ಧೆ ಮಾಡಲಿದ್ದಾರೆ ಎನ್ನಲಾಗುತ್ತಿದೆ.

ಕರ್ನಾಟಕದಿಂದ ಸ್ಪರ್ಧಿಸುವಂತೆ ಕೆಪಿಸಿಸಿ ಆಹ್ವಾನ ನೀಡಿದ ಬೆನ್ನಲ್ಲೇ, ಇದೀಗ  ಕೇರಳದ ವೈನಾಡು ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸುವಂತೆ ರಾಹುಲ್ ಗಾಂಧಿಗೆ ಕೇರಳ ಕಾಂಗ್ರೆಸ್ ಆಹ್ವಾನ ನೀಡಿದೆ.

ಈ ಕುರಿತು ಮಾಹಿತಿ ನೀಡಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ಓಮನ್ ಚಾಂಡಿ, ವೈನಾಡು ಕ್ಷೇತ್ರದಿಂದ  ಚುನಾವಣೆಗೆ ಸ್ಪರ್ಧಿಸುವಂತೆ ರಾಹುಲ್ ಗಾಂಧಿ ಅವರನ್ನು ಕೋರಲಾಗಿದೆ ಎಂದು ತಿಳಿಸಿದ್ದಾರೆ. 

ರಾಹುಲ್ ಗಾಂಧಿ ದಕ್ಷಿಣ ಭಾರತದ ಯಾವುದಾದರೊಂದು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವಂತೆ ಕಾಂಗ್ರೆಸ್ ಒತ್ತಡ ಹೇರುತ್ತಿದ್ದು, ರಾಹುಲ್ ಈ ಕುರಿತು ಯಾವುದೇ ಪ್ರತಿಕ್ರಿಯೆ ನೀಡಿಲ್ಲ ಎಂದು ಮೂಲಗಳು ತಿಳಿಸಿವೆ.