ಬೆಂಗಳೂರು: ಚಾಮರಾಜನಗರ ಮೀಸಲು ಲೋಕಸಭಾ ಕ್ಷೇತ್ರದಿಂದ ಮಾಜಿ ಸಚಿವ ವಿ.ಶ್ರೀನಿವಾಸ್ ಪ್ರಸಾದ್ ಸ್ಪರ್ಧಿಸುವುದು ನಿಶ್ಚಿತವಾಗಿದೆ. ಶ್ರೀನಿವಾಸ್ ಪ್ರಸಾದ್ ಅವರು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ ನಂತರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಸಮ್ಮತಿಸಿದರು. 

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಬಲಿಗರು, ಹಿತೈಷಿಗಳು  ಹಾಗೂ ಪಕ್ಷದ ನಾಯಕರ ಒತ್ತಡಕ್ಕೆ ಮಣಿದು ಚುನಾವಣೆ ಸ್ಪರ್ಧಿಸಲು ಒಪ್ಪಿಕೊಂಡಿದ್ದೇನೆ ಎಂದು ಪ್ರಕಟಿಸಿದರು. ನಾನು ಸಕ್ರಿಯ ರಾಜಕಾರಣ ದಿಂದ ದೂರ ಉಳಿದಿದ್ದೆ. ಈ ಕಾರಣಕ್ಕಾಗಿಯೇ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿರಲಿಲ್ಲ. 

ಆದರೆ, ಇದೀಗ ಬೆಂಬಲಿಗರು, ಹಿತೈಷಿಗಳು ಮತ್ತು ಪಕ್ಷದ ನಾಯಕರು ನಾನು ಸ್ಪರ್ಧಿಸುವಂತೆ ಒತ್ತಾಯಿಸುತ್ತಿದ್ದಾರೆ. ಅವರ ಆಗ್ರಹಕ್ಕೆ ಮಣಿದಿದ್ದೇನೆ. ಚಾಮರಾಜನಗರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತೇನೆ. ನೂರಕ್ಕೆ ನೂರರಷ್ಟು ಜಯ ಸಾಧಿಸುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.