ಬೆಂಗಳೂರು: ಲೋಕಸಭೆ ಚುನಾವಣೆಗೆ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಸ್ಪರ್ಧಿಸಬೇಕೋ ಬೇಡವೋ ಎಂಬ ಅನುಮಾನದಲ್ಲಿದ್ದಾರೆ ಎಂದು ಮುಖ್ಯಮಂತ್ರಿ  ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

ಪದ್ಮನಾಭನಗರದ ನಿವಾಸದಲ್ಲಿ ದೇವೇಗೌಡರ ಭೇಟಿ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ಬೆಂಗಳೂರು ಉತ್ತರ ಮತ್ತು ತುಮಕೂರು ಕ್ಷೇತ್ರದಿಂದ ಸ್ಪರ್ಧಿಸುವ ಬಗ್ಗೆ ತೀವ್ರ ಒತ್ತಡ ಇದೆ. ಯಾವ ಕ್ಷೇತ್ರದಲ್ಲಿ ಸ್ಪರ್ಧಿಸಬೇಕು ಎಂಬುದು ಇನ್ನೂ ಅಂತಿಮಗೊಂಡಿಲ್ಲ. 

ಎರಡು ಕ್ಷೇತ್ರದಿಂದ ಒತ್ತಡ ಹೆಚ್ಚಿರುವ ಕಾರಣ ಸ್ಪರ್ಧಿಸಬೇಕೋ ಬೇಡವೋ ಎಂಬ ಅನುಮಾನದಲ್ಲಿಯೂ ಇದ್ದಾರೆ ಎಂದು ಮಾರ್ಮಿಕವಾಗಿ ಹೇಳಿದರು. ದೇವೇಗೌಡ ಅವರಿಗೆ ಹಾಸನದಿಂದಲೇ ಸ್ಪರ್ಧಿಸಬೇಕು ಎಂಬ ಆಸೆ ಇದೆ. ಆದರೆ, ಮೊದಲೇ ಪ್ರಜ್ವಲ್‌ಗೆ ಅವಕಾಶ ಬಿಟ್ಟುಕೊಟ್ಟಿದ್ದಾರೆ. ಹೀಗಾಗಿ ಎಲ್ಲಿ ಸ್ಪರ್ಧಿಸಬೇಕು ಎಂಬುದರ ಬಗ್ಗೆ ಚರ್ಚೆ ನಡೆಯುತ್ತಿದೆ.

ಚುನಾವಣೆ ಕಣಕ್ಕೆ ಇಳಿಯುವುದಾದರೆ ಒಂದು ಕ್ಷೇತ್ರ ಆಯ್ಕೆ ಮಾಡಿಕೊಳ್ಳುತ್ತಾರೆ ಎಂದರು.