ಬೆಂಗಳೂರು :  ‘ನಿಮಗೆ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಎರಡಂಕಿ ದಾಟುತ್ತದೆಯೋ ಇಲ್ಲವೋ ಎಂಬ ಚಿಂತೆ ಬೇಡ. ಮೊದಲು ನೀವು ಗೆದ್ದಿರುವ ಎರಡು ಸ್ಥಾನಗಳನ್ನು ಉಳಿಸಿಕೊಳ್ಳಿ ಸಾಕು..!

ಹೀಗೆ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಎರಡಂಕಿ ಸ್ಥಾನ ಗೆಲ್ಲಲು ಬಿಡುವುದಿಲ್ಲ ಎಂಬ ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡರ ಮಾತಿಗೆ ಬಿಜೆಪಿ ನಾಯಕ ಕೆ.ಎಸ್‌.ಈಶ್ವರಪ್ಪ ವ್ಯಂಗ್ಯಭರಿತವಾಗಿ ತಿರುಗೇಟು ನೀಡಿದ್ದಾರೆ.

ರಾಜ್ಯ ಬಿಜೆಪಿ ಕಚೇರಿಯಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇವೇಗೌಡರು ಪ್ರಧಾನಿಗಳಾಗಿದ್ದವರು. ತಮ್ಮ ಸ್ಥಾನಕ್ಕೆ ತಕ್ಕಂತೆ ಅವರು ಮಾತನಾಡಬೇಕು ಎಂದು ತೀಕ್ಷ$್ಣವಾಗಿ ಮಾತಿನಲ್ಲಿ ಚುಚ್ಚಿದರು.

ರಾಜ್ಯದಲ್ಲಿ ತಮ್ಮ ಉಳಿವಿಗೆ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಮೈತ್ರಿ ಮಾಡಿಕೊಂಡಿವೆ. ಕಳೆದ ಬಾರಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗಲೇ ನಾವು 17 ಸ್ಥಾನಗಳು ಗೆದ್ದಿದ್ದೇವೆ. ಆಗ ರಾಜ್ಯದಲ್ಲಿ ಅಧಿಕಾರದಲ್ಲಿದ್ದರೂ ಕಾಂಗ್ರೆಸ್‌ ಎರಡಂಕಿ ಪಡೆಯಲಿಲ್ಲ. ಈ ಸತ್ಯವನ್ನು ಮಿತ್ರ ಪಕ್ಷಗಳ ನಾಯಕರು ಮರೆಯಬಾರದು. ಬಿಜೆಪಿ ಎರಡಂಕಿ ದಾಟಲು ಬಿಡುವುದಿಲ್ಲ ಎಂದು ಹೇಳುವುದು ಸರಿಯಲ್ಲ. ಮೊದಲು ನೀವು ಗೆದ್ದಿರುವ ಎರಡು ಕ್ಷೇತ್ರಗಳನ್ನು ಉಳಿಸಿಕೊಳ್ಳಿ ಎಂದು ಗೌಡರ ವಿರುದ್ಧ ವಾಗ್ದಾಳಿ ನಡೆಸಿದರು.

ಮೈತ್ರಿ ಪಕ್ಷಗಳು ಏನೇ ತಂತ್ರಗಾರಿಕೆ ಹೆಣೆದರೂ ಈ ಬಾರಿ ರಾಜ್ಯದಲ್ಲಿ ನಾವು 20-25 ಸ್ಥಾನ ಗೆಲ್ಲುವುದರಲ್ಲಿ ಯಾವ ಅನುಮಾನವಿಲ್ಲ. ಮೈತ್ರಿ ಮಾಡಿಕೊಂಡ ತಕ್ಷಣ ಜನರು ಒಪ್ಪಿಕೊಳ್ಳುವುದಿಲ್ಲ. ಹಲವು ಕ್ಷೇತ್ರಗಳಲ್ಲಿ ಪರಸ್ಪರ ಹೊಡೆದಾಡಿಕೊಳ್ಳುತ್ತಿದ್ದಾರೆ. ಇಂಥವರಿಗೆ ನಮ್ಮ ಪಕ್ಷದ ಬಗ್ಗೆ ಮಾತನಾಡುವ ನೈತಿಕತೆ ಇದೆಯೇ ಎಂದು ಖಾರವಾಗಿ ಪ್ರಶ್ನಿಸಿದ್ದಾರೆ.

ತೋರಿಕೆಗೆ ಮಾತ್ರ ಒಬ್ಬರಿಗೊಬ್ಬರು ಕೈಕುಲುಕಿದ್ದಾರೆ. ಕಾಂಗ್ರೆಸ್‌ ಪಕ್ಷದಲ್ಲೇ ಗುಂಪುಗಾರಿಕೆ ಹೆಚ್ಚಾಗಿದೆ. ಆ ಪಕ್ಷದ ಕೆಲವರು ಮುಖ್ಯಮಂತ್ರಿ ಕುಮಾರಸ್ವಾಮಿ ಅವರನ್ನು ಹೊಗಳಿದರೆ, ಮತ್ತೆ ಕೆಲವರು ಸಿದ್ದರಾಮಯ್ಯ ಅವರಿಗೆ ಜೈಕಾರ ಕೂಗುತ್ತಾರೆ. ಸದ್ಯಕ್ಕೆ ಒಬ್ಬರಿಗೊಬ್ಬರು ಚೂರಿ ಹಾಕಿಕೊಂಡಿಲ್ಲವಷ್ಟೇ ಎಂದು ಈಶ್ವರಪ್ಪ ಲೇವಡಿ ಮಾಡಿದರು.

ಪದೇ ಪದೇ ಬಿಜೆಪಿಯವರಿಗೆ ಮಾನ ಮರ್ಯಾದೆ ಇಲ್ಲ ಎಂದು ಸಿದ್ದರಾಮಯ್ಯ ಹೇಳುತ್ತಿದ್ದಾರೆ. ಮೊದಲು ಅವರಿಗೆ ಮರ್ಯಾದೆ ಇದೆಯೇ ಎಂಬುದನ್ನು ನೋಡಿಕೊಳ್ಳಲಿ ಎಂದು ತಿರುಗೇಟು ನೀಡಿದರು. ಸುದ್ದಿಗೋಷ್ಠಿಯಲ್ಲಿ ವಿಧಾನಪರಿಷತ್‌ ಸದಸ್ಯ ಲೆಹರ್‌ ಸಿಂಗ್‌, ಬಿಜೆಪಿ ಸಹ ವಕ್ತಾರ ಎ.ಎಚ್‌.ಆನಂದ್‌ ಹಾಗೂ ಹರೀಶ್‌ ಇದ್ದರು.

ಮತದಾನ ನಮ್ಮ ಹಕ್ಕು... ಪ್ರಜಾಪ್ರಭುತ್ವದ ಉತ್ಸವವನ್ನು ಯಶಸ್ವಿಗೊಳಿಸೋಣ...

ದೇಶದಲ್ಲಿ ಏ.11 ರಿಂದ ಮೇ 19ರವರೆಗೆ ಏಳು ಹಂತಗಳಲ್ಲಿ ಮತದಾನ ನಡೆಯಲಿದ್ದು, ಕರ್ನಾಟಕದಲ್ಲಿ ಏ.18 ಹಾಗೂ ಏ.23ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ. 543 ಲೋಕಸಭಾ ಕ್ಷೇತ್ರಗಳಿಗೆ ನಡೆಯುವ ಚುನಾವಣೆಯಲ್ಲಿ ಮತ ಚಲಾಯಿಸಲು 90 ಕೋಟಿ ಮಂದಿ ಅರ್ಹರಾಗಿದ್ದಾರೆ