ರೋಹ್ಟಕ್(ಮೇ.10): 1984ರ ಸಿಖ್ ನರಮೇಧದ ಕುರಿತು ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ ನೀಡಿರುವ ಹೇಳಿಕೆಯನ್ನು ಪ್ರಧಾನಿ ಮೋದಿ ತೀವ್ರವಾಗಿ ಖಂಡಿಸಿದ್ದಾರೆ.

ರೋಹ್ಟಕ್'ನಲ್ಲಿ ಚುನಾವಣಾ ಪ್ರಚಾರದ ಮಧ್ಯೆ ANI ಸುದ್ದಿಸಂಸ್ಥೆಯೊಂದಿಗೆ ಮಾತನಾಡಿದ ಪ್ರಧಾನಿ, ಪಿತ್ರೋಡಾ ಹೇಳಿಕೆ ಕಾಂಗ್ರೆಸ್ ಮನಸ್ಥಿತಿಯನ್ನು ಬಿಂಬಿಸುತ್ತದೆ ಎಂದು ಹರಿಹಾಯ್ದಿದ್ದಾರೆ. ಕಳೆದ ಚುನಾವಣೆಯಲ್ಲಿ ಕೇವಲ 44 ಸೀಟುಗಳನ್ನು ಗೆದ್ದು ಇಷ್ಟೊಂದು ಗರ್ವ ತೋರಿಸುತ್ತಿರುವ ಕಾಂಗ್ರೆಸ್‌ಗೆ ಈ ಬಾರಿಯ ಚುನಾವಣೆಯಲ್ಲಿ ಮತದಾರ ತಕ್ಕ ಪಾಠ ಕಲಿಸಲಿದ್ದಾನೆ ಎಂದು ಮೋದಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಸಿಖ್ ನರಮೇಧದ ವೇಳೆಯೂ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಇಂತದ್ದೇ ಹೇಳಿಕೆ ನೀಡಿದ್ದರು. ಮುಮದೆ ಕಮಲನಾಥ್ ಸೇರಿದಂತೆ ಅನೇಕ ಕಾಂಗ್ರೆಸ್ ನಾಯಕರು ಆ ಭಯಾನಕ ಘಟನೆಯ ಕುರಿತು ಉಡಾಫೆಯ ಮಾತುಗಳನ್ನಾಡಿದ್ದಾರೆ ಎಂದು ಮೋದಿ ಹೇಳಿದ್ದಾರೆ.

ತಾವು ಚುನಾವಣಾ ಪ್ರಚಾರಗಳಲ್ಲಿ ಕೇಂದ್ರ ಸರ್ಕಾರದ 5 ವರ್ಷಗಳ ಸಾಧನೆ ಮತ್ತು ಬಡವರ ಕಲ್ಯಾಣಕ್ಕಾಗಿ ಕೈಗೊಂಡ ಕ್ರಮಗಳ ಕುರಿತು ಮಾತನಾಡುತ್ತಿದ್ದು, ಕಾಂಗ್ರೆಸ್ ತಮ್ಮ ಮೇಲೆ ವೈಯಕ್ತಿಕ ನಿಂದನೆ ಮಾಡುವುದನ್ನೇ ಕಾಯಕ ಮಾಡಿಕೊಂಡಿದೆ ಎಂದು ಪ್ರಧಾನಿ ಆರೋಪಿಸಿದರು.

ಇದೇ ವೇಳೆ ಜೆಇಎಂ ನಾಯಕ ಮಸೂದ್ ಅಜರ್ ಮತ್ತು ಪಾಕಿಸ್ತಾನದಲ್ಲಿರುವ ದಾವೂದ್ ಇಬ್ರಾಹಿಂ ವಿರುದ್ಧ ಕ್ರಮ ಕೈಗೊಳ್ಳುವ ಕುರಿತು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಮೋದಿ, ದೇಶದ ಭದ್ರತೆಗೆ ಅಪಾಯ ತಂದೊಡ್ಡುವ ಯಾರೇ ಆದರೂ ಅವರನ್ನು ಸುಮ್ಮನೆ ಬಿಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಲೋಕಸಭೆ ಚುನಾವಣೆಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ