ಶಿವಮೊಗ್ಗ(ಮಾ.28): ASAT ಕ್ಷಿಪಣಿ ತಂತ್ರಜ್ಞಾನ ಪರೀಕ್ಷಾರ್ಥ ಪ್ರಯೋಗದ ಕುರಿತು ಘೋಷಣೆ ಮಾಡಿದ್ದ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಲಾಗಿದೆ.

ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್‌ನಿಂದ ಪ್ರಧಾನಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ದಾಖಲಾಗಿದೆ. ನೀತಿ ಸಂಹಿತೆ ಜಾರಿಯಲ್ಲಿರುವಾಗ ಅಂತರಿಕ್ಷ ಕ್ಷಿಪಣಿ ಬಗ್ಗೆ ಮಾತನಾಡಿರುವ ಪ್ರಧಾನಿ, ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಯುವ ಕಾಂಗ್ರೆಸ್ ಮುಖಂಡರಾದ ಯೋಗೇಶ್ ಮತ್ತು ರಂಗನಾಥ್ ನೇತೃತ್ವದಲ್ಲಿ ಜಿಲ್ಲಾ ಚುನಾವಣಾಧಿಕಾರಿ ಡಾ. ದಯಾನಂದ ಅವರಿಗೆ ದೂರು ಸಲ್ಲಿಸಲಾಗಿದೆ.

ಆದರೆ ಪ್ರಧಾನಿ ಮೋದಿ ಘೋಷಣೆ ಬಳಿಕ ಈ ಕುರಿತು ಸ್ಪಷ್ಟನೆ ನೀಡಿದ್ದ ಚುನಾವಣಾ ಆಯೋಗ, ದೇಶದ ರಕ್ಷಣೆಗೆ ಸಂಬಂಧಪಟ್ಟ ವಿಷಯವಾಗಿದ್ದರಿಂದ ಇದು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗುವುದಿಲ್ಲ ಎಂದು ಸ್ಪಷ್ಟಪಡಿಸಿದೆ.