ರಾಯ್‌ಬರೇಲಿ[ಮೇ.03]: ಬಿಜೆಪಿಯನ್ನು ಸೋಲಿಸುವ ಸಲುವಾಗಿ ಕೆಲವು ಕಡೆ ದುರ್ಬಲ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದೇವೆ ಎಂಬ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ವಾದ್ರಾ ಹೇಳಿಕೆ ರಾಜಕೀಯ ಬಿರುಗಾಳಿಯನ್ನೇ ಎಬ್ಬಿಸಿದೆ.

ಪ್ರಿಯಾಂಕಾ ಹೇಳಿಕೆಗೆ ತಿರುಗೇಟು ನೀಡಿರುವ ಬಿಎಸ್‌ಪಿ ನಾಯಕಿ ಮಾಯಾವತಿ ಮತ್ತು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್‌ ಯಾದವ್‌, ‘ಮಹಾಗಠಬಂಧನ’ ಅಭ್ಯರ್ಥಿಗಳನ್ನು ಮಣಿಸುವ ಸಲುವಾಗಿ ಕಾಂಗ್ರೆಸ್‌ ಮತ್ತು ಬಿಜೆಪಿ ಒಂದಾಗಿವೆ ಎಂದು ಆರೋಪಿಸಿದ್ದಾರೆ. ಇದಕ್ಕೆ ತಿರುಗೇಟು ನೀಡಿರುವ ಪ್ರಿಯಾಂಕಾ ಗಾಂಧಿ, ಬೇಕಿದ್ದರೆ ಸಾಯುತ್ತೇನೆ. ಆದರೆ ಬಿಜೆಪಿಗೆ ಮಾತ್ರ ಸಹಾಯ ಮಾಡುವುದಿಲ್ಲ ಎಂದು ಕಿಡಿಕಾರಿದ್ದಾರೆ.

ಕಾಂಗ್ರೆಸ್‌ ತನ್ನ ಸ್ವಂತ ಬಲದ ಮೇಲೆ ಚುನಾವಣೆ ಎದುರಿಸುತ್ತಿದೆ. ಹಲವು ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಗಳು ಬಲಿಷ್ಠ ಪೈಪೋಟಿ ಒಡ್ಡುತ್ತಿದ್ದಾರೆ. ಬಿಜೆಪಿಗೆ ಅನುಕೂಲ ಮಾಡಿಕೊಡುವ ಬದಲು ಸಾಯುತ್ತೇನೆ. ನಮ್ಮ ಅಭ್ಯರ್ಥಿಗಳು ಒಂದೋ ಬಿಜೆಪಿಗೆ ಪೈಪೋಟಿ ನೀಡುತ್ತಿದ್ದಾರೆ ಅಥವಾ ಬಿಜೆಪಿಯ ಮತಗಳನ್ನು ಒಡೆಯುತ್ತಿದ್ದಾರೆ. ಬಿಜೆಪಿಯೇ ಕಾಂಗ್ರೆಸ್ಸಿನ ಪ್ರಮುಖ ಎದುರಾಳಿ. ಎರಡೂ ಪಕ್ಷಗಳ ಸಿದ್ಧಾಂತವೇ ಬೇರೆ ಬೇರೆ ಎಂದು ಸುದ್ದಿಗಾರರಿಗೆ ತಿಳಿಸಿದರು.