ನವದೆಹಲಿ[ಏ.15]: ಲೋಕಸಭಾ ಚುನಾವಣೆಯಲ್ಲಿ ಗೆಲೊಉವು ತಮ್ಮದಾಗಿಸಿಕೊಳ್ಳಲು ಎಲ್ಲಾ ಪಕ್ಷಗಳು ತಮ್ಮೆಲ್ಲಾ ಶಕ್ತಿ ಪ್ರದರ್ಶನ ಮಾಡುತ್ತಿವೆ. ಆದರೆ ಇಂತಹುದೇ ಪ್ರಯತ್ನದಲ್ಲಿದ್ದ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಹಾಗೂ ಮಾಯಾವತಿಗೆ ಚುನಾವಣಾ ಆಯೋಗ ಶಾಕ್ ನೀಡಿದೆ. ಆಯೋಗವು ಸಿಎಂ ಯೋಗಿಗೆ ಮುಂದಿನ 72 ಗಂಟೆ ಹಾಗೂ ಮಾಯಾವತಿಗೆ 48 ಗಂಟೆಗಳವರೆಗೆ ಸಮಾವೇಶ ಹಾಗೂ ರೋಡ್ ಶೋ ನಡೆಸದಂತೆ ನಿಷೇಧ ಹೇರಿದೆ.

ಸಿಎಂ ಯೋಗಿ ಹಾಗೂ ಮಾಯಾವತಿ ತಮ್ಮ ಭಾಷಣಗಳಲ್ಲಿ ಆಕ್ರಮಣಕಾರಿ ಹೇಳಿಕೆಗಳನ್ನು ನೀಡುವ ಮೂಲಕ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿರುವುದೇ ಈ ನಿಷೇಧಕ್ಕೆ ಕಾರಣ ಎನ್ನಲಾಗಿದೆ. ಸುಪ್ರೀಂ ಕೋರ್ಟ್ ಆಕ್ರಮಣಕಾರಿ ಹೇಳಿಕೆಗಳನ್ನು ನೀಡುವವರ ವಿರುದ್ಧ ಯಾವ ಕ್ರಮ ಕೈಗೊಂಡಿದ್ದೀರೆಂದು ಚುನಾವಣಾ ಆಯೋಗಕ್ಕೆ ಪ್ರಶ್ನಿಸಿದ ಮರುದಿನವೇ ಯೋಗಿ ಹಾಗೂ ಮಾಯಾವತಿ ಭಾಷಣಗಳನ್ನು ನಿಷೇಧಿಸುವ ಮಹತ್ವದ ನಿರ್ಧಾರ ಕೈಗೊಂಡಿರುವುದು ಗಮನಾರ್ಹ. 

ಇದಕ್ಕೂ ಮೊದಲು ಸುಪ್ರೀಂ ಕೋರ್ಟ್ ಚುನಾವಣಾ ಪ್ರಚಾರದ ವೇಳೆ BSP ನಾಯಕಿ ಮಾಯಾವತಿ ಹಾಗೂ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಆಕ್ರಮಣಕಾರಿ ಹೇಳಿಕೆ ನೀಡುತ್ತಿರುವ ಬಗ್ಗೆ ವಿಚಾರಣೆ ನಡೆಸಿತ್ತು. ಈ ಸಂದರ್ಭದಲ್ಲಿ ಇವರಿಬ್ಬರ ವಿರುದ್ಧ ತನಿಖೆ ನಡೆಸಿದ್ದೀರಾ? ಯಾವ ಕ್ರಮ ಕೈಗೊಂಡಿದ್ದೀರೆಂದು ಚುನಾವಣಾ ಆಯೋಗವನ್ನು ಪ್ರಶ್ನಿಸಿತ್ತು. ಮುಖ್ಯ ನ್ಯಾಯಾಧೀಶ ರಂಜನ್ ಗೊಗೋಯ್ ನೇತೃತ್ವದ ನ್ಯಾಯಪೀಠವು ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಜಾತಿ ಹಾಗೂ ಧರ್ಮದ ಆಧಾರದಲ್ಲಿ ದ್ವೇಷ ಹರಡಿಸುವ ಹೇಳಿಕೆಗಳ ವಿರುದ್ಧ ಕ್ರಮ ಕೈಗೊಳ್ಳಲು ಆಯೋಗಕ್ಕೆ ಹಕ್ಕು ಇದೆ. ಅಂತಹವರ ವಿರುದ್ಧ ನೋಟಿಸ್ ಜಾರಿಗೊಳಿಸಿ ತನಿಖೆ ನಡೆಸಿ ನಾಯಕರ ವಿರುದ್ಧಪ್ರಕರಣ ದಾಖಲಿಸಬಹುದು ಎಂಬುವುದನ್ನು ಉಲ್ಲೇಖಿಸಿ ಓರ್ವ ಅಧಿಕಾರಿಯನ್ನು ನ್ಯಾಯಾಲಯಕ್ಕೆ ಹಾಜರಾಗುವಂತೆ ಸೂಚಿಸಿತ್ತು.

ದೇಶದಲ್ಲಿ ಏ.11ರಿಂದ ಮೇ.19ರವೆರೆಗೆ ಏಳು ಹಂತಗಳಲ್ಲಿ ಮತದಾನ. ಕರ್ನಾಟಕದಲ್ಲಿ ಏ.18 ಹಾಗೂ ಏ.23ರಂದು ಎರಡು ಹಂತಗಳಲ್ಲಿ ಮತದಾನ. ಭಾರತದಲ್ಲಿ 543 ಲೋಕಸಭಾ ಕ್ಷೇತ್ರ, ಕರ್ನಾಟಕದಲ್ಲಿ 28