ವೈಜಾಗ್‌ನಲ್ಲಿ ಇಂಗ್ಲೆಂಡ್ ಎದುರು ಟೀಂ ಇಂಡಿಯಾ 3 ಬದಲಾವಣೆಗಳೊಂದಿಗೆ ಕಣಕ್ಕಿಳಿಯೋದು ಪಕ್ಕಾ..!
ವೈಜಾಗ್: ಭಾರತ ಹಾಗೂ ಇಂಗ್ಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯದಲ್ಲಿ ಸೋಲಿನ ಆಘಾತ ಅನುಭವಿಸಿದೆ. ಇದೀಗ ಎರಡನೇ ಟೆಸ್ಟ್ ಪಂದ್ಯಕ್ಕೆ ಸಜ್ಜಾಗಿದೆ. ಟೀಂ ಇಂಡಿಯಾ ಗೆಲುವಿನ ಟ್ರ್ಯಾಕ್‌ಗೆ ಬರಬೇಕಿದ್ದರೇ ಭಾರತ ಮೂರು ಬದಲಾವಣೆಗಳೊಂದಿಗೆ ಕಣಕ್ಕಿಳಿಯುವ ಸಾಧ್ಯತೆಯಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

ಭಾರತ ಹಾಗೂ ಇಂಗ್ಲೆಂಡ್ ನಡುವೆ ಹೈದರಾಬಾದ್‌ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ 28 ರನ್‌ಗಳ ರೋಚಕ ಸೋಲು ಅನುಭವಿಸಿದೆ. ಈ ಮೂಲಕ 5 ಪಂದ್ಯಗಳ ಸರಣಿಯಲ್ಲಿ 0-1ರ ಹಿನ್ನಡೆ ಅನುಭವಿಸಿದೆ
ವಿರಾಟ್ ಕೊಹ್ಲಿ ಅನುಪಸ್ಥಿತಿಯಲ್ಲಿ ಕಣಕ್ಕಿಳಿದಿರುವ ಟೀಂ ಇಂಡಿಯಾ, ಎರಡನೇ ಇನಿಂಗ್ಸ್‌ನಲ್ಲಿ ದಯಾನೀಯ ಬ್ಯಾಟಿಂಗ್ ವೈಫಲ್ಯ ಅನುಭವಿಸಿದೆ. ಮೊದಲ ಟೆಸ್ಟ್‌ನಲ್ಲಿ ಕೊಹ್ಲಿ ಅನುಪಸ್ಥಿತಿ ಭಾರತ ತಂಡವನ್ನು ಇನ್ನಿಲ್ಲದಂತೆ ಕಾಡಿತು.
ಈಗಾಗಲೇ ಮೊದಲ ಪಂದ್ಯದಲ್ಲಿ ಸೋತು ಕಂಗಾಲಾಗಿರುವ ರೋಹಿತ್ ಶರ್ಮಾ ಪಡೆಗೆ ಫೆಬ್ರವರಿ 02ರಿಂದ ಆರಂಭವಾಗಲಿರುವ ಎರಡನೇ ಟೆಸ್ಟ್ ಪಂದ್ಯಕ್ಕೂ ಮುನ್ನ ಬಿಗ್ ಶಾಕ್ ಎದುರಾಗಿದ್ದು ಗಾಯದ ಸಮಸ್ಯೆಯಿಂದಾಗಿ ಕೆ ಎಲ್ ರಾಹುಲ್ ಹಾಗೂ ರವೀಂದ್ರ ಜಡೇಜಾ ಎರಡನೇ ಟೆಸ್ಟ್ ಪಂದ್ಯದಿಂದ ಹೊರಬಿದ್ದಿದ್ದಾರೆ.
ಹೀಗಾಗಿ ಎರಡನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಗೆಲುವಿನ ಹಳಿಗೆ ಮರಳಬೇಕಿದ್ದರೇ, ಈ ಕೆಳಕಂಡ ಮೂರು ಬದಲಾವಣೆಗಳೊಂದಿಗೆ ಕಣಕ್ಕಿಳಿಯುವುದು ತೀರಾ ಅನಿವಾರ್ಯ ಎನಿಸಿಕೊಂಡಿದೆ.
1. ಕೆ ಎಲ್ ರಾಹುಲ್ ಬದಲಿಗೆ ಸರ್ಫರಾಜ್ ಖಾನ್
ಇಂಗ್ಲೆಂಡ್ ಎದುರಿನ ಮೊದಲ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್‌ನಲ್ಲಿ ಆಕರ್ಷಕ ಅರ್ಧಶತಕ ಸಿಡಿಸಿದ್ದ ರಾಹುಲ್, ಪಕ್ಕೆಲುಬಿನ ನೋವಿನ ಸಮಸ್ಯೆಯಿಂದಾಗಿ ಎರಡನೇ ಟೆಸ್ಟ್ ಪಂದ್ಯದಿಂದ ಹೊರಬಿದ್ದಿದ್ದಾರೆ.
ಇದೀಗ ರಾಹುಲ್ ಬದಲಿಗೆ ದೇಶಿ ಕ್ರಿಕೆಟ್‌ನಲ್ಲಿ ರನ್ ರಾಶಿಯನ್ನೇ ಗುಡ್ಡೆಹಾಕಿರುವ ಸರ್ಫರಾಜ್ ಖಾನ್, ಟೀಂ ಇಂಡಿಯಾ ಪರ ಪಾದಾರ್ಪಣೆ ಮಾಡುವ ಸಾಧ್ಯತೆಯಿದೆ. 26 ವರ್ಷದ ಸರ್ಫರಾಜ್ ಎರಡನೇ ಟೆಸ್ಟ್‌ನ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಪಡೆದರೆ ಅಚ್ಚರಿ ಪಡಬೇಕಿಲ್ಲ.
2. ಮೊಹಮ್ಮದ್ ಸಿರಾಜ್ ಬದಲಿಗೆ ಕುಲ್ದೀಪ್ ಯಾದವ್:
ಹೈದರಾಬಾದ್ ಟೆಸ್ಟ್ ಪಂದ್ಯದಲ್ಲಿ ಲೋಕಲ್ ಬಾಯ್ ಸಿರಾಜ್ ಕಮಾಲ್ ಮಾಡಲು ವಿಫಲವಾಗಿದ್ದರು. ಹೀಗಾಗಿ ವೈಜಾಗ್ ಟೆಸ್ಟ್ ಪಂದ್ಯದಲ್ಲಿ ಸಿರಾಜ್‌ಗೆ ವಿಶ್ರಾಂತಿ ನೀಡಿ ಮಣಿಕಟ್ಟು ಸ್ಪಿನ್ನರ್ ಕುಲ್ದೀಪ್ ಯಾದವ್‌ಗೆ ತಂಡದಲ್ಲಿ ಸ್ಥಾನ ಸಿಗುವ ಸಾಧ್ಯತೆಯಿದೆ.
ವೈಜಾಗ್ ಸ್ಪಿನ್ ಸ್ನೇಹಿ ಪಿಚ್ ಆಗಿರುವುದರಿಂದಾಗಿ ಸ್ಪಿನ್ನರ್ ಕುಲ್ದೀಪ್ ಯಾದವ್ ಅವರನ್ನು ಎದುರಿಸುವುದ ಇಂಗ್ಲೆಂಡ್ ಬ್ಯಾಟರ್‌ಗಳಿಗೆ ಕಷ್ಟವಾಗಬಹುದು. ಈ ಕಾರಣಕ್ಕಾಗಿ ಕುಲ್ದೀಪ್ ಯಾದವ್ ಮತ್ತೆ ಟೆಸ್ಟ್‌ಗೆ ಕಮ್‌ಬ್ಯಾಕ್ ಮಾಡುವ ಸಾಧ್ಯತೆ ಹೆಚ್ಚು.
3. ರವೀಂದ್ರ ಜಡೇಜಾ ಬದಲಿಗೆ ವಾಷಿಂಗ್ಟನ್ ಸುಂದರ್
ರವೀಂದ್ರ ಜಡೇಜಾ ಸ್ನಾಯು ಸೆಳೆತದಿಂದ ಬಳಲುತ್ತಿದ್ದು, ಎರಡನೇ ಟೆಸ್ಟ್‌ಗೆ ಅಲಭ್ಯರಾಗಿದ್ದಾರೆ. ಬ್ಯಾಟಿಂಗ್ ಹಾಗೂ ಬೌಲಿಂಗ್‌ನಲ್ಲಿ ಮಹತ್ವದ ಕಾಣಿಕೆ ನೀಡುತ್ತಾ ಬಂದಿರುವ ಜಡ್ಡು ಅನುಪಸ್ಥಿತಿ ತಂಡವನ್ನು ಕಾಡುವ ಸಾಧ್ಯತೆಯಿದೆ.
ಇದೀಗ ಜಡೇಜಾ ಅನುಪಸ್ಥಿತಿಯಲ್ಲಿ ಟೀಂ ಇಂಡಿಯಾ ಮತ್ತೋರ್ವ ಬೌಲಿಂಗ್ ಆಲ್ರೌಂಡರ್ ವಾಷಿಂಗ್ಟರ್ ಸುಂದರ್‌ಗೆ ವೈಜಾಗ್ ಟೆಸ್ಟ್ ಪಂದ್ಯದಲ್ಲಿ ಭಾರತ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಪಡೆಯುವ ಸಾಧ್ಯತೆ ಹೆಚ್ಚಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.