ಇಂಗ್ಲೆಂಡ್ ಎದುರು ಎರಡನೇ ಟೆಸ್ಟ್ ಗೆಲ್ಲಬೇಕಿದ್ದರೆ ಟೀಂ ಇಂಡಿಯಾದಿಂದ 3 ಬದಲಾವಣೆ ಅನಿವಾರ್ಯ..!
ಬೆಂಗಳೂರು: ಭಾರತ-ಇಂಗ್ಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ ಆಘಾತಕಾರಿ ಸೋಲು ಅನುಭವಿಸಿದೆ. ಇದರೊಂದಿಗೆ ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾರತ ತಂಡವು 1-0 ಹಿನ್ನಡೆ ಅನುಭವಿಸಿದೆ.
ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಗಮನದಲ್ಲಿಟ್ಟುಕೊಂಡು ಟೀಂ ಇಂಡಿಯಾ ಇನ್ನುಳಿದ 3 ಪಂದ್ಯಗಳ ಪೈಕಿ ಕನಿಷ್ಟ ಎರಡು ಪಂದ್ಯಗಳನ್ನಾದರೂ ಗೆಲ್ಲಲೇಬೇಕಾದ ಒತ್ತಡಕ್ಕೆ ಸಿಲುಕಿದೆ. ಇದರ ಬೆನ್ನಲ್ಲೇ ಫೆಬ್ರವರಿ 13ರಿಂದ ಆರಂಭವಾಗಲಿರುವ ಎರಡನೇ ಟೆಸ್ಟ್ ಪಂದ್ಯವನ್ನು ಗೆಲ್ಲಬೇಕಿದ್ದರೆ ಟೀಂ ಇಂಡಿಯಾ ಈ ಮೂರು ಬದಲಾವಣೆಗಳನ್ನು ಮಾಡಿಕೊಳ್ಳುವುದು ಅನಿವಾರ್ಯ
1. ಶಹಬಾಜ್ ನದೀಂ ಬದಲಿಗೆ ಅಕ್ಷರ್ ಪಟೇಲ್‌ಗೆ ಅವಕಾಶ ನೀಡುವುದು ಒಳಿತು
ಮೊದಲ ಟೆಸ್ಟ್ ಪಂದ್ಯ ಆರಂಭಕ್ಕೆ ಕೆಲವೇ ಗಂಟೆಗಳು ಬಾಕಿ ಇದ್ದಾಗ ಅಕ್ಷರ್ ಪಟೇಲ್ ಗಾಯಗೊಂಡಿದ್ದರಿಂದ, ನದೀಂಗೆ ಮೊದಲ ಟೆಸ್ಟ್‌ನಲ್ಲಿ ಅವಕಾಶ ನೀಡಲಾಗಿತ್ತು.
ಆದರೆ ನದೀಂ ನಾಯಕ ವಿರಾಟ್ ಕೊಹ್ಲಿ ನಂಬಿಕೆ ಉಳಿಸಿಕೊಳ್ಳುವಂತಹ ಪ್ರದರ್ಶನ ನೀಡಲಿಲ್ಲ, ಹೀಗಾಗಿ ಎರಡನೇ ಟೆಸ್ಟ್ ಪಂದ್ಯದಲ್ಲಿ ನದೀಮ್ ಬದಲಿಗೆ ಅಕ್ಷರ್ ಪಟೇಲ್‌ಗೆ ತಂಡದಲ್ಲಿ ಸ್ಥಾನ ನೀಡುವುದು ಒಳಿತು.
2.ವಾಷಿಂಗ್ಟನ್ ಸುಂದರ್ ಬದಲಿಗೆ ಹಾರ್ದಿಕ್ ಪಾಂಡ್ಯಗೆ ಅವಕಾಶ
ವಾಷಿಂಗ್ಟನ್ ಸುಂದರ್ ಮೊದಲ ಟೆಸ್ಟ್ ಪಂದ್ಯದಲ್ಲಿ ಬ್ಯಾಟಿಂಗ್‌ನಲ್ಲಿ ತಂಡಕ್ಕೆ ಆಸರೆಯಾಗಿದ್ದರು, ಆದರೆ ತಂಡಕ್ಕೆ ಅಗತ್ಯವಾಗಿ ಬೇಕಾಕಿದ್ದ ಬೌಲಿಂಗ್ ವಿಭಾಗದಲ್ಲಿ ನಿರೀಕ್ಷಿತ ಪ್ರದರ್ಶನ ಮೂಡಿಬಂದಿರಲಿಲ್ಲ.
ಹೀಗಾಗಿ ಎರಡನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾದ ಮತ್ತೋರ್ವ ಸ್ಟಾರ್ ಆಲ್ರೌಂಡರ್, ಮಧ್ಯಮ ವೇಗಿ ಹಾರ್ದಿಕ್ ಪಾಂಡ್ಯಗೆ ಆಡುವ ಹನ್ನೊಂದರ ಬಳಗದಲ್ಲಿ ತಂಡದಲ್ಲಿ ಸ್ಥಾನ ಸಿಗುವ ಸಾಧ್ಯತೆಯಿದೆ.
3. ಜಸ್ಪ್ರೀತ್ ಬುಮ್ರಾ ಬದಲಿಗೆ ಮೊಹಮ್ಮದ್ ಸಿರಾಜ್‌ಗೆ ಸ್ಥಾನ
ಬುಮ್ರಾ ತಮ್ಮ ಮೊನಚಿನ ದಾಳಿಯ ಮೂಲಕ ಇಂಗ್ಲೆಂಡ್ ಬ್ಯಾಟ್ಸ್‌ಮನ್‌ಗಳನ್ನು ಕಂಗೆಡಿಸಿದ್ದಾರೆ. ಹೀಗಿದ್ದೂ ಅಹಮದಾಬಾದ್‌ನ ಸರ್ದಾರ್ ಪಟೇಲ್ ಮೈದಾನದಲ್ಲಿ ನಡೆಯಲಿರುವ ಪಿಂಕ್ ಬಾಲ್ ಟೆಸ್ಟ್ ಪಂದ್ಯವನ್ನು ಗಮನದಲ್ಲಿಟ್ಟುಕೊಂಡು ಬುಮ್ರಾಗೆ ವಿಶ್ರಾಂತಿ ನೀಡುವ ಸಾಧ್ಯತೆಯಿದೆ.
ಹೀಗಾದಲ್ಲಿ ಅಸ್ಟ್ರೇಲಿಯಾ ವಿರುದ್ದದ ಟೆಸ್ಟ್ ಸರಣಿಯಲ್ಲಿ ಮಾರಕ ದಾಳಿ ನಡೆಸಿದ್ದ ಮೊಹಮ್ಮದ್ ಸಿರಾಜ್‌ಗೆ ಎರಡನೇ ಟೆಸ್ಟ್ ಪಂದ್ಯದಲ್ಲಿ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಸಿಗುವ ಸಾಧ್ಯತೆಯಿದೆ.