IPL ಹತ್ತಿರವಾಗುತ್ತಿದ್ದಂತೆ ಮತ್ತೆ ಗುಡುಗಿದ ಗ್ಲೆನ್ ಮ್ಯಾಕ್ಸ್‌ವೆಲ್..! ರೋಹಿತ್ ಶರ್ಮಾ ದಾಖಲೆ ಧೂಳೀಪಟ
ಬೆಂಗಳೂರು: 2024ನೇ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಗೆ ದಿನಗಣನೆ ಆರಂಭವಾಗಿದೆ. ಹೀಗಿರುವಾಗಲೇ ಆರ್‌ಸಿಬಿ ಅಭಿಮಾನಿಗಳಿಗೆ ಗ್ಲೆನ್ ಮ್ಯಾಕ್ಸ್‌ವೆಲ್ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
ವೆಸ್ಟ್ ಇಂಡೀಸ್ ಎದುರಿನ ಎರಡನೇ ಟಿ20 ಪಂದ್ಯದಲ್ಲಿ ಆಸ್ಟ್ರೇಲಿಯಾದ ಸ್ಪೋಟಕ ಬ್ಯಾಟರ್ ಗ್ಲೆನ್ ಮ್ಯಾಕ್ಸ್‌ವೆಲ್ ಸಿಡಿಲಬ್ಬರದ ಬ್ಯಾಟಿಂಗ್ ನಡೆಸುವ ಮೂಲಕ ಮತ್ತೊಮ್ಮೆ ಗಮನ ಸೆಳೆದಿದ್ದಾರೆ.
ಗ್ಲೆನ್ ಮ್ಯಾಕ್ಸ್‌ವೆಲ್ ಐಪಿಎಲ್ ಹತ್ತಿರವಾಗುತ್ತಿದ್ದಂತೆಯೇ ಮತ್ತೆ ಭರ್ಜರಿ ಫಾರ್ಮ್‌ಗೆ ಮರಳಿದ್ದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪಾಳಯದಲ್ಲಿ ಸಂಭ್ರಮ ಮನೆ ಮಾಡುವಂತೆ ಮಾಡಿದೆ.
ವೆಸ್ಟ್ ಇಂಡೀಸ್ ಎದುರಿನ ಎರಡನೇ ಟಿ20 ಪಂದ್ಯದಲ್ಲಿ ಮ್ಯಾಕ್ಸ್‌ವೆಲ್ ಕೇವಲ 55 ಎಸೆತಗಳನ್ನು ಎದುರಿಸಿ ಬರೋಬ್ಬರಿ 120 ರನ್ ಸಿಡಿಸಿದ್ದಾರೆ. ಅವರ ಈ ಸೊಗಸಾದ ಇನಿಂಗ್ಸ್‌ನಲ್ಲಿ 12 ಬೌಂಡರಿ ಹಾಗೂ 8 ಸಿಕ್ಸರ್‌ಗಳು ಸೇರಿದ್ದವು.
ಮ್ಯಾಕ್ಸ್‌ವೆಲ್ ಅವರ ಈ ಸ್ಪೋಟಕ ಶತಕವು, ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಅವರ ಹೆಸರಿನಲ್ಲಿದ್ದ ದಾಖಲೆಯನ್ನು ನುಚ್ಚುನೂರಾಗುವಂತೆ ಮಾಡಿದೆ. ಇದೀಗ ಮ್ಯಾಕ್ಸ್‌ವೆಲ್ ಅತಿಕಡಿಮೆ ಅಂತಾರಾಷ್ಟ್ರೀಯ ಟಿ20 ಪಂದ್ಯಗಳನ್ನಾಡಿ 5 ಶತಕ ಸಿಡಿಸಿದ ಬ್ಯಾಟರ್ ಎನಿಸಿಕೊಂಡಿದ್ದಾರೆ.
Glenn Maxwell
ಹಿಟ್‌ಮ್ಯಾನ್ ಖ್ಯಾತಿಯ ರೋಹಿತ್ ಶರ್ಮಾ 143 ಅಂತಾರಾಷ್ಟ್ರೀಯ ಟಿ20 ಪಂದ್ಯಗಳನ್ನಾಡಿ 5 ಶತಕ ಸಿಡಿಸಿದ್ದರು. ಇದೀಗ ಮ್ಯಾಕ್ಸ್‌ವೆಲ್ ಕೇವಲ 94ನೇ ಪಂದ್ಯದಲ್ಲೇ 5 ಶತಕ ಸಿಡಿಸಿ ರೋಹಿತ್ ಶರ್ಮಾ ದಾಖಲೆ ಮುರಿದಿದ್ದಾರೆ.
ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಗ್ಲೆನ್ ಮ್ಯಾಕ್ಸ್‌ವೆಲ್ ಅವರ ಪಾಲಿಗಿದು 5ನೇ ಶತಕವಾಗಿದೆ. ಈ ಮೂಲಕ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಅತಿಹೆಚ್ಚು ಶತಕ ಸಿಡಿಸಿದ ಬ್ಯಾಟರ್‌ಗಳ ಪಟ್ಟಿಯಲ್ಲಿ ಮ್ಯಾಕ್ಸ್‌ವೆಲ್ ರೋಹಿತ್ ಶರ್ಮಾ ಜತೆ ಜಂಟಿ ಅಗ್ರಸ್ಥಾನಕ್ಕೇರಿದ್ದಾರೆ.
Image credit: PTI
ಇನ್ನು ಚೊಚ್ಚಲ ಐಪಿಎಲ್ ಟ್ರೋಫಿ ಗೆಲ್ಲುವ ಕನವರಿಕೆಯಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪಾಲಿಗೆ ಮ್ಯಾಕ್ಸ್‌ವೆಲ್ ಫಾರ್ಮ್ ಹೊಸ ಉತ್ಸಾಹ ಬರುವಂತೆ ಮಾಡಿದೆ. 17ನೇ ಆವೃತ್ತಿಯ ಐಪಿಎಲ್ ಟೂರ್ನಿಯು ಮುಂಬರುವ ಮಾರ್ಚ್ 22ರಿಂದ ಆರಂಭವಾಗುವ ಸಾಧ್ಯತೆಯಿದೆ.