Breaking: ಟೀಂ ಇಂಡಿಯಾಗೆ ಅತಿದೊಡ್ಡ ಶಾಕ್: ಸ್ಟಾರ್ ಕ್ರಿಕೆಟಿಗ ವಿಶ್ವಕಪ್‌ನಿಂದಲೇ ಔಟ್..!
ಬೆಂಗಳೂರು(ನ.04): 2023ರ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಅದ್ಭುತ ಪ್ರದರ್ಶನದ ಮೂಲಕ ಸೆಮೀಸ್ ಪ್ರವೇಶಿಸಿರುವ ಟೀಂ ಇಂಡಿಯಾಗೆ ಬಿಗ್ ಶಾಕ್ ಎದುರಾಗಿದೆ. ತಂಡದ ಸ್ಟಾರ್ ಕ್ರಿಕೆಟಿಗ ವಿಶ್ವಕಪ್ ಟೂರ್ನಿಯಿಂದಲೇ ಹೊರಬಿದ್ದಿದ್ದಾರೆ. ಇದು ತಂಡದ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯಿದ್ದು, ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ
2023ರ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ರೋಹಿತ್ ಶರ್ಮಾ ನೇತೃತ್ವದ ಆತಿಥೇಯ ಟೀಂ ಇಂಡಿಯಾ ಸತತ 7 ಪಂದ್ಯಗಳನ್ನು ಜಯಿಸುವ ಮೂಲಕ ಮೊದಲ ತಂಡವಾಗಿ ಸೆಮಿಫೈನಲ್ ಪ್ರವೇಶಿಸುವಲ್ಲಿ ಯಶಸ್ವಿಯಾಗಿದೆ.
ಟೀಂ ಇಂಡಿಯಾದ ಬ್ಯಾಟಿಂಗ್, ಬೌಲಿಂಗ್ ಹಾಗೂ ಫೀಲ್ಡಿಂಗ್ ಸಾಕಷ್ಟು ಸದೃಢವಾಗಿದ್ದು, ಹಾಲಿ ಚಾಂಪಿಯನ್ ಇಂಗ್ಲೆಂಡ್, ಆಸ್ಟ್ರೇಲಿಯಾ, ನ್ಯೂಜಿಲೆಂಡ್‌ನಂತಹ ಬಲಾಢ್ಯ ತಂಡಗಳನ್ನು ಬಗ್ಗುಬಡಿಯುವಲ್ಲಿ ಯಶಸ್ವಿಯಾಗಿದೆ.
ಇದೀಗ ನವೆಂಬರ್ 05ರಂದು ಟೀಂ ಇಂಡಿಯಾ, ಕೋಲ್ಕತಾದ ಈಡನ್ ಗಾರ್ಡನ್ಸ್‌ನಲ್ಲಿ ಬಲಿಷ್ಠ ದಕ್ಷಿಣ ಆಫ್ರಿಕಾ ತಂಡವನ್ನು ಎದುರಿಸಲು ಸಜ್ಜಾಗಿದೆ. ಹೀಗಿರುವಾಗಲೇ ಟೀಂ ಇಂಡಿಯಾಗೆ ಬಿಗ್ ಶಾಕ್ ಎದುರಾಗಿದ್ದು, ಸ್ಟಾರ್ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಗಾಯದ ಸಮಸ್ಯೆಯಿಂದ 2023ರ ಏಕದಿನ ವಿಶ್ವಕಪ್ ಟೂರ್ನಿಯಿಂದಲೇ ಹೊರಬಿದ್ದಿದ್ದಾರೆ.
ಬಾಂಗ್ಲಾದೇಶ ಎದುರಿನ ಪಂದ್ಯದ ವೇಳೆ ಬೌಲಿಂಗ್ ಮಾಡುವ ಸಂದರ್ಭದಲ್ಲಿ ಮೊಣಕಾಲಿನ ಗಾಯಕ್ಕೆ ಒಳಗಾಗಿ ಅರ್ಧದಲ್ಲೇ ಮೈದಾನ ತೊರೆದಿದ್ದ ಹಾರ್ದಿಕ್ ಪಾಂಡ್ಯ, ನ್ಯೂಜಿಲೆಂಡ್ ಎದುರಿನ ಪಂದ್ಯಕ್ಕೂ ಅಲಭ್ಯರಾಗಿದ್ದರು. ಇದಾದ ಬಳಿಕ ಬೆಂಗಳೂರಿನ ಎನ್‌ಸಿಎನಲ್ಲಿ ಪುನಶ್ಚೇತನ ಶಿಬಿರದಲ್ಲಿ ಪಾಲ್ಗೊಂಡಿದ್ದರು.
ಹಾರ್ದಿಕ್ ಪಾಂಡ್ಯ, ಸೆಮಿಫೈನಲ್ ವೇಳೆಗೆ ಚೇತರಿಸಿಕೊಂಡು ತಂಡ ಕೂಡಿಕೊಳ್ಳಬಹುದು ಎನ್ನುವ ನಿರೀಕ್ಷೆ ಹುಸಿಯಾಗಿದ್ದು, ಗಾಯದಿಂದ ಸಂಪೂರ್ಣ ಗುಣಮುಖರಾಗದ ಹಿನ್ನೆಲೆಯಲ್ಲಿ ವಿಶ್ವಕಪ್ ಟೂರ್ನಿಯಿಂದಲೇ ಹೊರಬಿದ್ದಿದ್ದಾರೆ.
ಬ್ಯಾಟಿಂಗ್ ಹಾಗೂ ಬೌಲಿಂಗ್‌ನಲ್ಲಿ ಏಕಾಂಗಿಯಾಗಿ ಪಂದ್ಯದ ದಿಕ್ಕನ್ನೇ ಬದಲಿಸುವ ಸಾಮರ್ಥ್ಯ ಹೊಂದಿದ್ದ ಹಾರ್ದಿಕ್ ಪಾಂಡ್ಯ ಅನುಪಸ್ಥಿತಿ ಮುಂಬರುವ ಮಹತ್ವದ ಪಂದ್ಯದಲ್ಲಿ ಭಾರತ ತಂಡವನ್ನು ಕಾಡುವ ಸಾಧ್ಯತೆಯಿದೆ.
ಇನ್ನು ಶಮಿ ಅನುಪಸ್ಥಿತಿಯಲ್ಲಿ ಆಡುವ ಹನ್ನೊಂದರ ಬಳಗ ಕೂಡಿಕೊಂಡ ಅನುಭವಿ ವೇಗಿ ಮೊಹಮ್ಮದ್ ಶಮಿ ಸಿಕ್ಕ ಅವಕಾಶವನ್ನು ಭರ್ಜರಿಯಾಗಿಯೇ ಸದುಪಯೋಗ ಪಡಿಸಿಕೊಂಡಿದ್ದಾರೆ. ಕಳೆದ ಮೂರು ಪಂದ್ಯಗಳಿಂದ ಶಮಿ 14 ಬಲಿ ಪಡೆದಿದ್ದಾರೆ.
ಇದೀಗ ಹಾರ್ದಿಕ್ ಪಾಂಡ್ಯ, ಏಕದಿನ ವಿಶ್ವಕಪ್ ಟೂರ್ನಿಯಿಂದ ಹೊರಬಿದ್ದ ಬೆನ್ನಲ್ಲೇ ಕನ್ನಡಿಗ ಪ್ರಸಿದ್ದ್ ಕೃಷ್ಣಗೆ ಅದೃಷ್ಟ ಖುಲಾಯಿಸಿದ್ದು, ಭಾರತ ಕ್ರಿಕೆಟ್ ತಂಡ ಕೂಡಿಕೊಂಡಿದ್ದಾರೆ. ನೀಳಕಾಯದ ಕನ್ನಡದ ವೇಗಿ ಪ್ರಸಿದ್ಧ್ ಕೃಷ್ಣಗೆ ಆಲ್ ದಿ ಬೆಸ್ಟ್.