IPL 2021: ಡೆಲ್ಲಿಗೆ ಮತ್ತೊಂದು ಶಾಕ್, ಸ್ಟಾರ್ ಆಟಗಾರಿಗೆ ಕೊರೋನಾ ಸೋಂಕು..!
ನವದೆಹಲಿ: 13ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ರನ್ನರ್ ಅಪ್ ಸ್ಥಾನ ಪಡೆದಿದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಚೊಚ್ಚಲ ಐಪಿಎಲ್ ಟ್ರೋಫಿ ಮೇಲೆ ಕಣ್ಣಿಟ್ಟಿದ್ದು, ಈಗಾಗಲೇ ಸಕಲ ಸಿದ್ದತೆ ನಡೆಸುತ್ತಿದೆ. ಏಪ್ರಿಲ್ 9ರಿಂದ ಆರಂಭವಾಗಲಿರುವ ಐಪಿಎಲ್ ಟೂರ್ನಿಗೂ ಮುನ್ನ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಆರಂಭಿಕ ವಿಘ್ನ ಎದುರಾಗಿದೆ. ಏನದು ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ.
ಬಹುನಿರೀಕ್ಷಿತ 14ನೇ ಆವೃತ್ತಿಯ ಐಪಿಎಲ್ ಟೂರ್ನಿಗೆ ಕ್ಷಣಗಣನೆ ಆರಂಭವಾಗಿದ್ದು, ಏಪ್ರಿಲ್ 09ರಿಂದ ಮಿಲಿಯನ್ ಡಾಲರ್ ಕ್ರಿಕೆಟ್ ಟೂರ್ನಿಗೆ ಚಾಲನೆ ದೊರೆಯಲಿದೆ.
ಭಾರತೀಯ ಚುಟಕು ಕ್ರಿಕೆಟ್ ಹಬ್ಬವನ್ನು ಕಣ್ತುಂಬಿಕೊಳ್ಳಲು ಜಗತ್ತಿನಾದ್ಯಂತ ಕ್ರಿಕೆಟ್ ಅಭಿಮಾನಿಗಳು ತುದಿಗಾಲಿನಲ್ಲಿ ನಿಂತಿದ್ದಾರೆ.
14ನೇ ಆವೃತ್ತಿಯ ಐಪಿಎಲ್ ಟೂರ್ನಿ ಆರಂಭಕ್ಕೂ ಮುನ್ನವೇ ಡೆಲ್ಲಿ ತಂಡದ ನಾಯಕ ಶ್ರೇಯಸ್ ಅಯ್ಯರ್ ಗಾಯಗೊಂಡು ಸಂಪೂರ್ಣ ಐಪಿಎಲ್ ಟೂರ್ನಿಯಿಂದ ಹೊರಬಿದ್ದಿದ್ದಾರೆ.
ಇಂಗ್ಲೆಂಡ್ ವಿರುದ್ದದ ಮೊದಲ ಏಕದಿನ ಪಂದ್ಯದಲ್ಲಿ ಕ್ಷೇತ್ರರಕ್ಷಣೆ ಮಾಡುವ ವೇಳೆ ಭುಜದ ಗಾಯಕ್ಕೆ ತುತ್ತಾಗಿದ್ದು, ಇದೇ ಏಪ್ರಿಲ್ 08ರಂದು ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ.
ಶ್ರೇಯಸ್ ಅನುಪಸ್ಥಿತಿ ಡೆಲ್ಲಿ ತಂಡವನ್ನು ಕಾಡುವ ಸಾಧ್ಯತೆಯಿದ್ದು, ಇದೀಗ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ರಿಷಭ್ ಪಂತ್ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಮುನ್ನಡೆಸಲಿದ್ದಾರೆ.
ಶ್ರೇಯಸ್ ಅಯ್ಯರ್ ಶಾಕ್‌ನಿಂದ ಹೊರಬರುವ ಮುನ್ನವೇ ಡೆಲ್ಲಿ ತಂಡಕ್ಕೆ ಮತ್ತೊಂದು ಆಘಾತ ಎದುರಾಗಿದ್ದು, ತಂಡದ ಸ್ಟಾರ್ ಆಲ್ರೌಂಡರ್ ಅಕ್ಷರ್ ಪಟೇಲ್‌ಗೆ ಕೋವಿಡ್ 19 ಸೋಂಕು ತಗುಲಿರುವುದು ದೃಢಪಟ್ಟಿದೆ.
ಮಾರ್ಚ್ 28ರಂದು ಹೋಟೆಲ್‌ನಲ್ಲಿ ನಡೆಸಿದ ಕೋವಿಡ್ ಟೆಸ್ಟ್‌ನಲ್ಲಿ ಅಕ್ಷರ್ ಪಟೇಲ್ ವರದಿ ನೆಗೆಟಿವ್ ಬಂದಿತ್ತು. ಆದರೆ ಎರಡನೇ ಕೋವಿಡ್ ಟೆಸ್ಟ್‌ನಲ್ಲಿ ಪಾಸಿಟಿವ್ ಬಂದಿದೆ. ಎಂದು ಡೆಲ್ಲಿ ಕ್ಯಾಪಿಟಲ್ಸ್ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.
ಸದ್ಯ ಅಕ್ಷರ್ ಪಟೇಲ್ ಐಸೋಲೇಷನ್‌ನಲ್ಲಿದ್ದು, ವೈದ್ಯರ ಕಣ್ಗಾವಲಿನಲ್ಲಿದ್ದಾರೆ. ಡೆಲ್ಲಿ ಕ್ಯಾಪಿಟಲ್ಸ್‌ನ ವೈದ್ಯಕೀಯ ಸಿಬ್ಬಂದಿ ಅಕ್ಷರ್ ಪಟೇಲ್ ಅವರಿಗೆ ಸೂಕ್ತ ಮಾರ್ಗದರ್ಶನ ನೀಡಲಾಗುತ್ತಿದ್ದು, ಆದಷ್ಟು ಬೇಗ ಗುಣಮುಖರಾಗುವ ವಿಶ್ವಾಸವಿದೆ ಎಂದು ಡೆಲ್ಲಿ ಕ್ಯಾಪಿಟಲ್ಸ್ ತಿಳಿಸಿದೆ.
ಡೆಲ್ಲಿ ಕ್ಯಾಪಿಟಲ್ಸ್ ತಂಡವು ಏಪ್ರಿಲ್ 10ರಂದು 3 ಬಾರಿಯ ಐಪಿಎಲ್ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಎದುರು ಮೊದಲ ಪಂದ್ಯವನ್ನಾಡುವ ಮೂಲಕ ತನ್ನ ಅಭಿಯಾನ ಆರಂಭಿಸಲಿದೆ.