ಪ್ರತಿಷ್ಠಿತ ರಣಜಿ ಟ್ರೋಫಿ ಗೆದ್ದ ಮುಂಬೈ ಪಡೆಗೆ ಸಿಕ್ಕ ನಗದು ಬಹುಮಾನ ಎಷ್ಟು?
ಬೆಂಗಳೂರು: ಭಾರತದ ದೇಶಿ ಕ್ರಿಕೆಟ್‌ನ ಪ್ರತಿಷ್ಠಿತ ಟೂರ್ನಿಯಾಗಿರುವ ರಣಜಿ ಟ್ರೋಫಿ ಟೂರ್ನಿಯಲ್ಲಿ 2024ನೇ ಸಾಲಿನಲ್ಲಿ ಮುಂಬೈ ಕ್ರಿಕೆಟ್ ತಂಡವು ಚಾಂಪಿಯನ್ ಆಗಿ ಹೊರಹೊಮ್ಮಿದೆ. ಚಾಂಪಿಯನ್ ಪಟ್ಟ ಅಲಂಕರಿಸಿದ ಮುಂಬೈ ತಂಡಕ್ಕೆ ಎಷ್ಟು ನಗದು ಬಹುಮಾನ ಸಿಕ್ಕಿದೆ ಎನ್ನುವುದನ್ನು ನೋಡೋಣ ಬನ್ನಿ.

2023-24ನೇ ಸಾಲಿನ ರಣಜಿ ಟ್ರೋಫಿ ಟೂರ್ನಿಯ ಫೈನಲ್‌ನಲ್ಲಿ ಅಜಿಂಕ್ಯ ರಹಾನೆ ನೇತೃತ್ವದ ಮುಂಬೈ ತಂಡವು, ವಿದರ್ಭ ಎದುರು 169 ರನ್ ಅಂತರದ ಭರ್ಜರಿ ಗೆಲುವು ಸಾಧಿಸಿ ಚಾಂಪಿಯನ್ ಪಟ್ಟ ಅಲಂಕರಿಸಿದೆ.
ಈ ಮೂಲಕ ಮುಂಬೈ ಕ್ರಿಕೆಟ್ ತಂಡವು ರಣಜಿ ಟ್ರೋಫಿ ಟೂರ್ನಿಯಲ್ಲಿ 42ನೇ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸುವಲ್ಲಿ ಯಶಸ್ವಿಯಾಗಿದೆ. ಜತೆಗೆ ಬರೋಬ್ಬರಿ 8 ವರ್ಷಗಳ ಬಳಿಕ ರಣಜಿ ಟ್ರೋಫಿ ಬರ ನೀಗಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ.
90 ವರ್ಷಗಳ ಸುದೀರ್ಘ ಇತಿಹಾಸವಿರುವ ರಣಜಿ ಟ್ರೋಫಿ ಟೂರ್ನಿಯಲ್ಲಿ ಮುಂಬೈ ಕ್ರಿಕೆಟ್ ತಂಡವು 90ನೇ ಬಾರಿಗೆ ಫೈನಲ್ ಪ್ರವೇಶಿಸಿದ ಸಾಧನೆ ಮಾಡಿತ್ತು. ಇದೀಗ 42ನೇ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿದೆ.
ಇದೀಗ ಅಜಿಂಕ್ಯ ರಹಾನೆ ನೇತೃತ್ವದ ಮುಂಬೈ ತಂಡವು ರಣಜಿ ಟ್ರೋಫಿ ಚಾಂಪಿಯನ್ ಆಗುತ್ತಿದ್ದಂತೆಯೇ 5 ಕೋಟಿ ರುಪಾಯಿ ನಗದು ಬಹುಮಾನ ತಮ್ಮದಾಗಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ.
ಇನ್ನು ದೇಶಿ ಕ್ರಿಕೆಟಿಗರು ಹೆಚ್ಚು ಹೆಚ್ಚು ಪ್ರಥಮ ದರ್ಜೆ ಕ್ರಿಕೆಟ್ ಪಂದ್ಯಗಳನ್ನಾಡಲು ಪ್ರೋತ್ಸಾಹಿಸಲು ಬಿಸಿಸಿಐ ಮುಂದಾಗಿದೆ. ಈ ಕಾರಣಕ್ಕಾಗಿಯೇ ರಣಜಿ ಚಾಂಪಿಯನ್ ತಂಡಕ್ಕೆ 2 ಕೋಟಿ ರುಪಾಯಿ ನಗದು ಬಹುಮಾನವನ್ನು ಕಳೆದ ವರ್ಷದಿಂದ 5 ಕೋಟಿ ರುಪಾಯಿಗೆ ಹೆಚ್ಚಿಸಿದೆ.
ಇನ್ನು ಮುಂಬೈ ತಂಡವು ಚಾಂಪಿಯನ್ ಆದ ಬೆನ್ನಲ್ಲೇ ಮಹಾರಾಷ್ಟ್ರ ಕ್ರಿಕೆಟ್ ಸಂಸ್ಥೆಯು ಅಜಿಂಕ್ಯ ರಹಾನೆ ಪಡೆಗೆ ಬರೋಬ್ಬರಿ 5 ಕೋಟಿ ರುಪಾಯಿ ನಗದು ಬಹುಮಾನವನ್ನು ಘೋಷಿಸಿದೆ.
ಮಹಾರಾಷ್ಟ್ರ ಕ್ರಿಕೆಟ್ ಸಂಸ್ಥೆಯು ಮಾರ್ಚ್ 14, 2024ರಂದು ರಣಜಿ ಟ್ರೋಫಿ ಚಾಂಪಿಯನ್ ತಂಡಕ್ಕೆ ಈ ಮೊದಲು ನಿಗದಿಯಾಗಿದ್ದ ನಗದು ಬಹುಮಾನವನ್ನು ದ್ವಿಗುಣ ಮಾಡಿ ಆದೇಶ ಹೊರಡಿಸಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.