ಗಾಯದ ಮೇಲೆ ಬರೆ..! ಹಾಲಿ ಚಾಂಪಿಯನ್ ಇಂಗ್ಲೆಂಡ್ ಮಾರಕ ವೇಗಿ ವಿಶ್ವಕಪ್ ಟೂರ್ನಿಯಿಂದಲೇ ಔಟ್..!
ಬೆಂಗಳೂರು: 2023ರ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯು ಭರ್ಜರಿಯಾಗಿ ಸಾಗುತ್ತಿದೆ. ಆದರೆ ಹಾಲಿ ಚಾಂಪಿಯನ್ ಇಂಗ್ಲೆಂಡ್ ತಂಡವು ನಿರೀಕ್ಷೆಗೆ ತಕ್ಕಂತ ಪ್ರದರ್ಶನ ತೋರುತ್ತಿಲ್ಲ. ಹೀಗಿರುವಾಗಲೇ ಆಂಗ್ಲರ ಪಡೆಗೆ ಮತ್ತೊಂದು ಶಾಕ್ ಎದುರಾಗಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
2023ರ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಸೆಮೀಸ್‌ಗೇರಬಲ್ಲ ನೆಚ್ಚಿನ ತಂಡಗಳಲ್ಲಿ ಒಂದು ಎನಿಸಿಕೊಂಡಿದ್ದ ಇಂಗ್ಲೆಂಡ್ ತಂಡವು ಇದೀಗ ತನ್ನ ಸಾಮರ್ಥ್ಯಕ್ಕೆ ತಕ್ಕಂತ ಪ್ರದರ್ಶನ ತೋರಲು ವಿಫಲವಾಗಿದೆ.
ಸದ್ಯ ಜೋಸ್ ಬಟ್ಲರ್ ನೇತೃತ್ವದ ಇಂಗ್ಲೆಂಡ್ ಕ್ರಿಕೆಟ್ ತಂಡವು ಆಡಿದ 4 ಪಂದ್ಯಗಳ ಪೈಕಿ ಕೇವಲ ಒಂದು ಗೆಲುವು ಹಾಗೂ ಮೂರು ಸೋಲುಗಳೊಂದಿಗೆ ಕೇವಲ 2 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ 9ನೇ ಸ್ಥಾನದಲ್ಲಿ ಉಳಿದಿದೆ.
ಈಗಾಗಲೇ ಆಫ್ಘಾನಿಸ್ತಾನ ಹಾಗೂ ದಕ್ಷಿಣ ಆಫ್ರಿಕಾ ಎದುರು ಹೀನಾಯ ಸೋಲು ಅನುಭವಿಸಿರುವ ಇಂಗ್ಲೆಂಡ್, ಇದೀಗ ಸೆಮೀಸ್ ಹಾದಿಯನ್ನು ದುರ್ಗಮಗೊಳಿಸಿಕೊಂಡಿದೆ. ಹೀಗಿರುವಾಗಲೇ ಬಟ್ಲರ್ ಪಡೆಗೆ ಮತ್ತೊಂದು ಶಾಕ್ ಎದುರಾಗಿದೆ.
ಹೌದು, ಇಂಗ್ಲೆಂಡ್ ಕ್ರಿಕೆಟ್ ತಂಡದ ಮಾರಕ ಎಡಗೈ ವೇಗಿ ರೀಸ್ ಟಾಪ್ಲೆ, ಎಡಗೈ ತೋರು ಬೆರಳಿನ ಗಾಯದ ಸಮಸ್ಯೆಯಿಂದಾಗಿ 2023ರ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಿಂದಲೇ ಹೊರಬಿದ್ದಿದ್ದಾರೆ.
ಮುಂಬೈನ ವಾಂಖೇಡೆ ಮೈದಾನದಲ್ಲಿ ದಕ್ಷಿಣ ಆಫ್ರಿಕಾ ವಿರುದ್ದದ ಪಂದ್ಯದ ವೇಳೆ ಕ್ಷೇತ್ರರಕ್ಷಣೆ ಮಾಡುವ ಸಂದರ್ಭದಲ್ಲಿ ಚೆಂಡನ್ನು ಬೌಂಡರಿ ಗೆರೆ ದಾಟದಂತೆ ತಡೆಯುವ ಯತ್ನದಲ್ಲಿ ಈ ಅವಘಡ ಸಂಭವಿಸಿದೆ.
ಇದರ ಹೊರತಾಗಿಯೂ ಬೌಲಿಂಗ್ ಮಾಡಿದ್ದ ರೀಸ್ ಟಾಪ್ಲೆ, ಹರಿಣಗಳ ಪಡೆಯ ಎರಡು ವಿಕೆಟ್ ಕಬಳಿಸುವಲ್ಲಿ ಯಶಸ್ವಿಯಾಗಿದ್ದರು. ಗಾಯದ ತೀವ್ರತೆಯನ್ನು ಗಮನದಲ್ಲಿಟ್ಟುಕೊಂಡು ಟಾಪ್ಲೆ ಟೂರ್ನಿಯಿಂದ ಹೊರಬಿದ್ದಿದ್ದಾರೆ.
ಇದೀಗ ರೀಸ್ ಟಾಪ್ಲೆ ಬದಲಿಗೆ ಬ್ರೈಡನ್ ಕೇರ್ಸ್ ಇಂಗ್ಲೆಂಡ್ ಕ್ರಿಕೆಟ್ ತಂಡ ಕೂಡಿಕೊಂಡಿದ್ದಾರೆ. ಕೇರ್ಸ್ ಇಂಗ್ಲೆಂಡ್ ಕ್ರಿಕೆಟ್ ತಂಡದ ಪರ 12 ಏಕದಿನ ಹಾಗೂ 3 ಟಿ20 ಪಂದ್ಯಗಳನ್ನಾಡಿದ್ದಾರೆ