- Home
- Sports
- Cricket
- ಐಸಿಸಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಈ ಎರಡು ತಂಡಗಳು ಫೈನಲ್ ಆಡಲಿವೆ: ಭವಿಷ್ಯ ನುಡಿದ ನಾಸಿರ್ ಹುಸೇನ್
ಐಸಿಸಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಈ ಎರಡು ತಂಡಗಳು ಫೈನಲ್ ಆಡಲಿವೆ: ಭವಿಷ್ಯ ನುಡಿದ ನಾಸಿರ್ ಹುಸೇನ್
ಲಂಡನ್: 2025ರ ಐಸಿಸಿ ಚಾಂಪಿಯನ್ಸ್ ಟ್ರೋಫಿ ಆರಂಭಕ್ಕೆ ಕ್ಷಣಗಣನೆ ಶುರುವಾಗಿದೆ. ಹೀಗಿರುವಾಗಲೇ ಯಾವ ತಂಡಗಳು ಫೈನಲ್‌ಗೇರಲಿವೆ ಎನ್ನುವ ಬಿಸಿಬಿಸಿ ಚರ್ಚೆ ಕೂಡಾ ಜೋರಾಗಿದೆ. ಈ ಕುರಿತಂತೆ ಭಾರತೀಯ ಮೂಲದ ಇಂಗ್ಲೆಂಡ್ ಕ್ಯಾಪ್ಟನ್ ನಾಸಿರ್ ಹುಸೇನ್ ಭವಿಷ್ಯ ನುಡಿದಿದ್ದಾರೆ.

2025ರ ಐಸಿಸಿ ಚಾಂಪಿಯನ್ಸ್ ಟ್ರೋಫಿ ಟೂರ್ನಿಯು ಮುಂಬರುವ ಫೆಬ್ರವರಿ 19ರಿಂದ ಆರಂಭವಾಗಲಿದೆ. ಟೂರ್ನಿಗೆ ಪಾಕಿಸ್ತಾನ ಆತಿಥ್ಯ ವಹಿಸಿದ್ದರೂ, ಟೂರ್ನಿಯು ಹೈಬ್ರಿಡ್ ಮಾದರಿಯಲ್ಲಿ ಆಯೋಜನೆಯಾಗುತ್ತಿದೆ. ಹೀಗಾಗಿ ಪಾಕಿಸ್ತಾನ ಹಾಗೂ ದುಬೈನಲ್ಲಿ ಈ ಟೂರ್ನಿ ಜರುಗಲಿದೆ.
ಅಂದರೆ ಟೂರ್ನಿಯ ಆತಿಥ್ಯ ಹಾಗೂ ಬಹುತೇಕ ಪಂದ್ಯಗಳು ಪಾಕಿಸ್ತಾನದಲ್ಲಿ ನಡೆಯಲಿವೆ. ಆದರೆ ಭಾರತ ಆಡಲಿರುವ ಎಲ್ಲಾ ಪಂದ್ಯಗಳು ಪಾಕಿಸ್ತಾನದ ಆಚೆಗೆ ಅಂದರೆ ದುಬೈನಲ್ಲಿ ಪಂದ್ಯಗಳು ನಡೆಯಲಿವೆ.
2025ರ ಐಸಿಸಿ ಚಾಂಪಿಯನ್ಸ್ ಟ್ರೋಫಿ ಉದ್ಘಾಟನಾ ಪಂದ್ಯದಲ್ಲಿ ಆತಿಥೇಯ ಪಾಕಿಸ್ತಾನ ಹಾಗೂ ನ್ಯೂಜಿಲೆಂಡ್ ತಂಡಗಳು ಕಣಕ್ಕಿಳಿಯುವ ಮೂಲಕ ಟೂರ್ನಿಗೆ ಚಾಲನೆ ಸಿಗಲಿದೆ. ಇದಾದ ಮರುದಿನ ಅಂದರೆ ಫೆಬ್ರವರಿ 20ರಂದು ಭಾರತ ತಂಡವು ತನ್ನ ಪಾಲಿನ ಮೊದಲ ಪಂದ್ಯದಲ್ಲಿ ಬಾಂಗ್ಲಾದೇಶ ತಂಡವನ್ನು ಎದುರಿಸಲಿದೆ.
ಈ ಬಾರಿಯ ಐಸಿಸಿ ಚಾಂಪಿಯನ್ಸ್ ಟ್ರೋಫಿ ಗೆಲ್ಲುವ ನೆಚ್ಚಿನ ತಂಡಗಳ ಪೈಕಿ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಮುಂಚೂಣಿಯಲ್ಲಿವೆ. ಹಾಗಂತ ಇನ್ನುಳಿದ ಆರು ತಂಡಗಳು ಕಮ್ಮಿಯೇನಲ್ಲ.
ಹಲವು ಕ್ರಿಕೆಟ್ ಪಂಡಿತರು ಹಾಗೂ ಕ್ರಿಕೆಟ್ ವಿಶ್ಲೇಷಕರು ಈಗಾಗಲೇ ತಮ್ಮ ಈ ಬಾರಿ ಫೈನಲ್ ಆಡುವ ತಂಡಗಳ ಕುರಿತಂತೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇದೀಗ ಭಾರತ ಮೂಲದ ಇಂಗ್ಲೆಂಡ್ ಮಾಜಿ ನಾಯಕ ನಾಸಿರ್ ಹುಸೇನ್ ಕೂಡಾ ಈ ಬಾರಿಯ ಚಾಂಪಿಯನ್ಸ್ ಟ್ರೋಫಿ ಫೈನಲಿಸ್ಟ್‌ಗಳ ಬಗ್ಗೆ ಅಚ್ಚರಿಯ ಹೇಳಿಕೆ ನೀಡಿದ್ದಾರೆ.
2025ರ ಐಸಿಸಿ ಚಾಂಪಿಯನ್ಸ್ ಟ್ರೋಫಿ ಫೈನಲ್‌ನಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಕಾದಾಡುವ ಸಾಧ್ಯತೆಯಿದೆ ಎಂದು ನಾಸಿರ್ ಹುಸೇನ್ ಹೇಳಿದ್ದಾರೆ. ಅಂದಹಾಗೆ 2023ರ ಐಸಿಸಿ ಏಕದಿನ ವಿಶ್ವಕಪ್ ಫೈನಲ್‌ನಲ್ಲೂ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಮುಖಾಮುಖಿಯಾಗಿದ್ದವು. ಆಗ ಆಸ್ಟ್ರೇಲಿಯಾ ಚಾಂಪಿಯನ್ಸ್ ಪಟ್ಟ ಅಲಂಕರಿಸಿತ್ತು.
ಮುಂದುವರೆದು, ' ನನ್ನ ಪ್ರಕಾರ ಆಸ್ಟ್ರೇಲಿಯಾ ತಂಡವು ನಂ.1 ಸ್ಥಾನದಲ್ಲಿದೆ. ಹೀಗಾಗಿ ಈ ಬಾರಿ ಕೂಡಾ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳ ನಡುವೆಯೇ ಐಸಿಸಿ ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯ ನಡೆಯುವ ಸಾಧ್ಯತೆಯಿದೆ' ಎಂದು ನಾಸಿರ್ ಹುಸೇನ್ ಹೇಳಿದ್ದಾರೆ.
2025ರ ಐಸಿಸಿ ಚಾಂಪಿಯನ್ಸ್ ಟ್ರೋಫಿ ಟೂರ್ನಿಗೆ ಇದುವರೆಗೂ ಭಾರತ ತಂಡವನ್ನು ಪ್ರಕಟಿಸಿಲ್ಲ. ಬುಮ್ರಾ, ಕುಲ್ದೀಪ್ ಯಾದವ್ ತಂಡ ಕೂಡಿಕೊಳ್ಳುತ್ತಾರಾ ಎನ್ನುವ ಬಗ್ಗೆ ಕುತೂಹಲವಿದೆ. ಜನವರಿ 19ರೊಳಗಾಗಿ ಚಾಂಪಿಯನ್ಸ್ ಟ್ರೋಫಿ ಟೂರ್ನಿಗೆ ಭಾರತ ತಂಡ ಪ್ರಕಟಿಸುವ ಸಾಧ್ಯತೆಯಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.