IPL 2021: ಆರ್‌ಸಿಬಿ ಕುರಿತಂತೆ ಮುತ್ತಿನಂಥ ಮಾತನಾಡಿದ ಕಿಂಗ್ ಕೊಹ್ಲಿ..!
ಅಬುಧಾಬಿ: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮುಂಬರುವ ಐಸಿಸಿ ಟಿ20 ವಿಶ್ವಕಪ್ ಮುಕ್ತಾಯದ ಬಳಿಕ ಭಾರತ ಟಿ20 ನಾಯಕತ್ವದಿಂದ ಕೆಳಗಿಳಿಯುವುದಾಗಿ ಕಳೆದ ಮೂರು ದಿನಗಳ ಹಿಂದಷ್ಟೇ ಘೋಷಿಸಿದ್ದರು. ಇದಾಗಿ ಕೆಲವೇ ದಿನಗಳ ಅಂತರದಲ್ಲಿ ಆರ್‌ಸಿಬಿ ತಂಡದ ನಾಯಕತ್ವದಿಂದಲೂ ಕೆಳಗಿಳಿಯುವುದಾಗಿ ಘೋಷಿಸಿದ್ದಾರೆ. 2021ರ ಐಪಿಎಲ್ ಬಳಿಕ ಆರ್‌ಸಿಬಿ ತಂಡದ ನಾಯಕತ್ವದಿಂದಲೂ ಕೆಳಗಿಳಿಯುವುದಾಗಿ ಘೋಷಿಸಿದ್ದಾರೆ. ಈ ಸುದ್ದಿ ಆರ್‌ಸಿಬಿ, ವಿರಾಟ್ ಕೊಹ್ಲಿ ಅಭಿಮಾನಿಗಳ ಪಾಲಿಗೆ ಬರ-ಸಿಡಿಲಿನಂತೆ ಬಂದೆರಗಿದೆ. ಇದೆಲ್ಲದರ ನಡುವೆ ಆರ್‌ಸಿಬಿ ಕುರಿತಂತೆ ವಿರಾಟ್ ಕೊಹ್ಲಿ ಮುತ್ತಿನಂಥ ಮಾತನಾಡಿದ್ದಾರೆ.

ವಿರಾಟ್ ಕೊಹ್ಲಿ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಯುಎಇ ಚರಣದ ಐಪಿಎಲ್‌ಗೆ ಸಜ್ಜಾಗಿದ್ದು, ಇಂದು ಅಬುಧಾಬಿಯಲ್ಲಿ ಕೋಲ್ಕತ ನೈಟ್ ರೈಡರ್ಸ್ ತಂಡವನ್ನು ಎದುರಿಸಲಿದೆ.
ಕೆಕೆಆರ್ ಎದುರಿನ ಪಂದ್ಯಕ್ಕೂ ಮುನ್ನ ವಿರಾಟ್ ಕೊಹ್ಲಿ ಮಹತ್ವದ ತೀರ್ಮಾನವೊಂದನ್ನು ಪ್ರಕಟಿಸಿದ್ದು, 14ನೇ ಆವೃತ್ತಿಯ ಐಪಿಎಲ್ ಮುಕ್ತಾಯದ ಬಳಿಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕತ್ವದಿಂದ ಕೆಳಗಿಳಿಯುವುದಾಗಿ ಘೋಷಿಸಿದ್ದಾರೆ.
ಚೊಚ್ಚಲ ಐಪಿಎಲ್ ಆವೃತ್ತಿಯಿಂದಲೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಅವಿಭಾಜ್ಯ ಅಂಗವಾಗಿ ಗುರುತಿಸಿಕೊಂಡಿರುವ ವಿರಾಟ್ ಕೊಹ್ಲಿ, ಬ್ಯಾಟಿಂಗ್‌ನಲ್ಲಿ ಹಲವಾರು ಪಂದ್ಯಗಳನ್ನು ಏಕಾಂಗಿಯಾಗಿ ಜಯಿಸಿದ್ದಾರೆ.
2008ರಲ್ಲಿ ಆರ್‌ಸಿಬಿ ಸೇರಿಕೊಂಡಿದ್ದ ವಿರಾಟ್ ಕೊಹ್ಲಿ, 2012ರ ಮಧ್ಯಭಾಗದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕರಾಗಿ ಆಯ್ಕೆಯಾಗಿದ್ದರು. ಇದೀಗ ಆರ್‌ಸಿಬಿ ನಾಯಕತ್ವದಿಂದ ಕೆಳಗಿಳಿಯುವ ಮಹತ್ವದ ಘೋಷಣೆ ಮಾಡಿದ್ದಾರೆ.
ಯುಎಇ ಚರಣದ ಟೂರ್ನಿ ಆರಂಭಕ್ಕೂ ಮುನ್ನ ತಂಡದ ಜತೆ ಮಾತುಕತೆ ನಡೆಸಿದ್ದು, ಈ ಐಪಿಎಲ್ ಮುಗಿದ ಬಳಿಕ ಆರ್‌ಸಿಬಿ ನಾಯಕ ಸ್ಥಾನದಿಂದ ಕೆಳಗಿಳಿಯುವುದಾಗಿ ತಿಳಿಸಿದ್ದೇನೆ.
ನನ್ನ ವರ್ಕ್ ಲೋಡ್ ಮ್ಯಾನೇಜ್‌ಮೆಂಟ್ ಗಮನದಲ್ಲಿಟ್ಟುಕೊಂಡು ಈಗಾಗಲೇ ಮುಂಬರುವ ಟಿ20 ವಿಶ್ವಕಪ್ ಬಳಿಕ ಟೀಂ ಇಂಡಿಯಾ ಟಿ20 ನಾಯಕತ್ವದಿಂದ ಕೆಳಗಿಳಿಯಲು ತೀರ್ಮಾನಿಸಿದ್ದೇನೆ. ಅದೇ ರೀತಿ ಈಗ ಆರ್‌ಸಿಬಿ ನಾಯಕತ್ವದಿಂದಲೂ ಕೆಳಗಿಳಿಯಲು ನಿರ್ಧರಿಸಿದ್ದೇನೆ ಎಂದಿದ್ದಾರೆ.
ನಾನು ಮ್ಯಾನೇಜ್‌ಮೆಂಟ್‌ಗೆ ಅತ್ಯಂತ ಸ್ಪಷ್ಟವಾಗಿ ತಿಳಿಸಿದ್ದೇನೆ. ಆರ್‌ಸಿಬಿ ತಂಡವನ್ನು ಬಿಟ್ಟು ಬೇರೆ ತಂಡದ ಪರ ಆಡುವುದನ್ನು ಕಲ್ಪಿಸಿಯೂ ಕೊಂಡಿಲ್ಲ. ಮೊದಲ ದಿನದಿಂದಲೂ ನನ್ನ ಬದ್ಧತೆ ಆರ್‌ಸಿಬಿ ಜತೆಗಿದೆ. ನನ್ನ ಜೀವನದ ಕೊನೆಯ ಐಪಿಎಲ್ ಪಂದ್ಯವನ್ನು ಆರ್‌ಸಿಬಿ ಜತೆಯೇ ಆಡಲು ಬಯಸಿದ್ದೇನೆ ಎಂದು ಕೊಹ್ಲಿ ಹೇಳಿದ್ದಾರೆ.
ಇದರೊಂದಿಗೆ ಆರ್‌ಸಿಬಿ ನಾಯಕತ್ವದಿಂದ ಕೆಳಗಿಳಿದ ಬಳಿಕ ವಿರಾಟ್ ಕೊಹ್ಲಿ ಬೇರೆ ತಂಡವನ್ನು ಕೂಡಿಕೊಳ್ಳಬಹುದು ಎನ್ನುವ ಊಹಾಪೋಹಗಳಿಗೆ ತೆರೆ ಬಿದ್ದಿದ್ದು, ವಿರಾಟ್ ಆರ್‌ಸಿಬಿ ಮೇಲಿನ ತಮ್ಮ ಅಭಿಮಾನವನ್ನು ಮತ್ತೊಮ್ಮೆ ಜಗಜ್ಜಾಹೀರು ಮಾಡಿದ್ದಾರೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 2009, 2011 ಹಾಗೂ 2016ರಲ್ಲಿ ಐಪಿಎಲ್ ಫೈನಲ್ ಪ್ರವೇಶಿಸಿತ್ತಾದರೂ ಕಪ್ ಗೆಲ್ಲಲು ಮಾತ್ರ ಯಶಸ್ವಿಯಾಗಿರಲಿಲ್ಲ. ಇನ್ನು ಕೊಹ್ಲಿ ನೇತೃತ್ವದ ಆರ್‌ಸಿಬಿ ತಂಡವು 2015ರಿಂದ 2019ರವರೆಗೆ ಪ್ಲೇ ಆಫ್ ಹಂತಕ್ಕೇರಲು ವಿಫಲವಾಗಿತ್ತು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.