- Home
- Sports
- Cricket
- T20 ವಿಶ್ವಕಪ್ ತಂಡದಲ್ಲಿ ಸ್ಥಾನ ಬೇಕಾ..? ಪಾಂಡ್ಯಗೆ ಹೊಸ ಟಾರ್ಗೆಟ್ ಕೊಟ್ಟ ದ್ರಾವಿಡ್, ರೋಹಿತ್, ಅಗರ್‌ಕರ್..!
T20 ವಿಶ್ವಕಪ್ ತಂಡದಲ್ಲಿ ಸ್ಥಾನ ಬೇಕಾ..? ಪಾಂಡ್ಯಗೆ ಹೊಸ ಟಾರ್ಗೆಟ್ ಕೊಟ್ಟ ದ್ರಾವಿಡ್, ರೋಹಿತ್, ಅಗರ್‌ಕರ್..!
ಮುಂಬೈ: ಸದ್ಯ 17ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯು ಭರ್ಜರಿಯಾಗಿಯೇ ಸಾಗುತ್ತಿದೆ. ಹೀಗಿರುವಾಗಲೇ ಮುಂಬರುವ ಐಸಿಸಿ ಟಿ20 ವಿಶ್ವಕಪ್‌ಗೂ ಸಿದ್ದತೆ ನಡೆಯುತ್ತಿದೆ. ಇದೆಲ್ಲದರ ನಡುವೆ ಆಲ್ರೌಂಡರ್ ಹಾರ್ದಿಕ್ ಪಾಂಡ್ಯಗೆ ಮುಂಬರುವ ಐಸಿಸಿ ಟಿ20 ವಿಶ್ವಕಪ್ ಟೂರ್ನಿಗೆ ಭಾರತ ತಂಡದಲ್ಲಿ ಸ್ಥಾನ ಸಿಗಬೇಕಿದ್ದರೇ, ಹೊಸ ಟಾಸ್ಕ್ ಮಾಡಲು ಬಿಸಿಸಿಐ ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್‌ಕರ್, ಕೋಚ್ ರಾಹುಲ್ ದ್ರಾವಿಡ್ ಹಾಗೂ ನಾಯಕ ರೋಹಿತ್ ಶರ್ಮಾ ನೀಡಿದ್ದಾರೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ.

17ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಮೊದಲ 30 ಪಂದ್ಯಗಳು ಮುಕ್ತಾಯವಾಗಿದ್ದು, ಮುಂಬರುವ ಟಿ20 ವಿಶ್ವಕಪ್ ಟೂರ್ನಿಗೆ ಭಾರತ ತಂಡದಲ್ಲಿ ಸ್ಥಾನ ಪಡೆಯಲು ಹಲವು ಕ್ರಿಕೆಟಿಗರು ಶಕ್ತಿಮೀರಿ ಪ್ರಯತ್ನ ಪಡುತ್ತಿದ್ದಾರೆ.
ಹೀಗಿರುವಾಗಲೇ ಮುಂಬರುವ ಜೂನ್ 04ರಿಂದ ಅಮೆರಿಕ ಹಾಗೂ ವೆಸ್ಟ್ ಇಂಡೀಸ್‌ನಲ್ಲಿ ನಡೆಯಲಿರುವ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯನ್ನು ಗೆಲ್ಲಲು ಬಿಸಿಸಿಐ ಮಾಸ್ಟರ್ ಪ್ಲಾನ್ ಹೆಣೆಯುತ್ತಿದೆ.
ಈ ಕಾರಣಕ್ಕಾಗಿಯೇ ಕೆಲದಿನಗಳ ಹಿಂದಷ್ಟೇ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ, ತಂಡದ ಹೆಡ್‌ಕೋಚ್ ರಾಹುಲ್ ದ್ರಾವಿಡ್ ಹಾಗೂ ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್‌ಕರ್, ಮುಂಬೈನಲ್ಲಿ ಭೇಟಿಯಾಗಿ, ಮುಂಬರುವ ಟಿ20 ವಿಶ್ವಕಪ್ ಗೆಲ್ಲಲು ಬೇಕಾದ ತಂತ್ರಗಾರಿಕೆ ಮಾಡಿದ್ದಾರೆ ಎನ್ನಲಾಗಿದೆ.
ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿಯ ಪ್ರಕಾರ, ಮುಂಬೈ ವಾಂಖೇಡೆ ಮೈದಾನದಲ್ಲಿರುವ ಬಿಸಿಸಿಐ ಕೇಂದ್ರ ಕಚೇರಿಯಲ್ಲಿ ಈ ಮೂವರು ಭೇಟಿಯಾಗಿ, ಮುಂಬರುವ ಟಿ20 ವಿಶ್ವಕಪ್ ಕುರಿತಾಗಿ ಪ್ರಮುಖ ವಿಚಾರಗಳನ್ನು ಚರ್ಚೆ ನಡೆಸಿದ್ದಾರೆ. ಇದೇ ವೇಳೆ ಆಲ್ರೌಂಡರ್ ಹಾರ್ದಿಕ್ ಪಾಂಡ್ಯಗೆ ಹೊಸ ಟಾಸ್ಕ್ ನೀಡಿದ್ದಾರೆ ಎನ್ನಲಾಗಿದೆ.
ಹೌದು, ಮುಂಬರುವ ಐಸಿಸಿ ಟಿ20 ವಿಶ್ವಕಪ್ ಟೂರ್ನಿಗೆ ಹಾರ್ದಿಕ್ ಪಾಂಡ್ಯ ಭಾರತ ತಂಡದಲ್ಲಿ ಸ್ಥಾನ ಪಡೆಯಬೇಕಿದ್ದರೇ, ಮುಂಬೈ ಇಂಡಿಯನ್ಸ್ ನಾಯಕ ಪಾಂಡ್ಯ ಈಗಿನಿಂದಲೇ ಐಪಿಎಲ್ ಟೂರ್ನಿಯಲ್ಲಿ ನಿರಂತರವಾಗಿ ಬೌಲಿಂಗ್ ಮಾಡಬೇಕು ಎನ್ನುವ ಸ್ಪಷ್ಟ ಸಂದೇಶವನ್ನು ಬಿಸಿಸಿಐ ಮೂಲಕ ರವಾನಿಸಿದ್ದಾರೆ ಎಂದು ವರದಿಯಾಗಿದೆ.
ಪ್ರಸಕ್ತ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ, 6 ಪಂದ್ಯಗಳನ್ನಾಡಿ ಕೇವಲ 11 ಓವರ್‌ಗಳನ್ನು ಬೌಲಿಂಗ್ ಮಾಡಿ 3 ವಿಕೆಟ್ ಕಬಳಿಸಲಷ್ಟೇ ಶಕ್ತರಾಗಿದ್ದಾರೆ. ಪಾಂಡ್ಯ 12ರ ಎಕಾನಮಿಯಲ್ಲಿ ರನ್ ಬಿಟ್ಟುಕೊಡುತ್ತಿರುವುದು ಬಿಸಿಸಿಐ ತಲೆನೋವು ಹೆಚ್ಚಿಸಿದೆ.
ಮೇ ಮೊದಲ ವಾರದಲ್ಲಿ ಬಿಸಿಸಿಐ ಆಯ್ಕೆ ಸಮಿತಿಯು ಮುಂಬರುವ ಐಸಿಸಿ ಟಿ20 ವಿಶ್ವಕಪ್ ಟೂರ್ನಿಗೆ ಭಾರತ ತಂಡವನ್ನು ಪ್ರಕಟಿಸುವ ಸಾಧ್ಯತೆಯಿದ್ದು, ಹಾರ್ದಿಕ್ ಪಾಂಡ್ಯ, ಭಾರತ ತಂಡದಲ್ಲಿ ಸ್ಥಾನ ಪಡೆಯುತ್ತಾರೆಯೇ ಅಥವಾ ಇಲ್ಲವೇ ಎನ್ನುವುದನ್ನು ಕಾದು ನೋಡಬೇಕಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.