ಯಾವ ತಂಡವು ಮಾಡದ ಅಪರೂಪದ IPL ರೆಕಾರ್ಡ್‌ನೊಂದಿಗೆ ಆರ್‌ಸಿಬಿ ಪ್ಲೇ ಆಫ್‌ಗೆ ಲಗ್ಗೆ..! ಏನದು?
ಬೆಂಗಳೂರು: 17ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 4ನೇ ತಂಡವಾಗಿ ಪ್ಲೇ ಆಫ್‌ಗೆ ಲಗ್ಗೆಯಿಟ್ಟಿದೆ. ಇನ್ನು ಆರ್‌ಸಿಬಿ ಪಡೆಯು ಐಪಿಎಲ್‌ನಲ್ಲಿ ಯಾವ ತಂಡವೂ ಮಾಡದ ಸಾಧನೆಯೊಂದಿಗೆ ಪ್ಲೇ ಆಫ್ ಪ್ರವೇಶಿಸಿದೆ. ಏನದು ದಾಖಲೆ ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ.
ಬೆಂಗಳೂರಿನ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಹೈವೋಲ್ಟೇಜ್ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಎದುರು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 27 ರನ್‌ಗಳ ಜಯಭೇರಿ ಬಾರಿಸಿ ಪ್ಲೇ ಆಫ್‌ಗೆ ಲಗ್ಗೆಯಿಟ್ಟಿದೆ.
ಮೊದಲು ಬ್ಯಾಟ್ ಮಾಡಿದ ಆರ್‌ಸಿಬಿ ತಂಡವು ನಾಯಕ ಫಾಪ್ ಡು ಪ್ಲೆಸಿಸ್ ಬಾರಿಸಿದ ಆಕರ್ಷಕ ಅರ್ಧಶತಕ(54) ಹಾಗೂ ವಿರಾಟ್ ಕೊಹ್ಲಿ(47) ಸ್ಪೋಟಕ ಬ್ಯಾಟಿಂಗ್ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ 5 ವಿಕೆಟ್ ಕಳೆದುಕೊಂಡು 218 ರನ್ ಬಾರಿಸಿತ್ತು.
ನಾಕೌಟ್ ಪ್ರವೇಶಿಸುವ ನಿಟ್ಟಿನಲ್ಲಿ ಉಭಯ ತಂಡಗಳಿಗೆ ಮಹತ್ವದ್ದೆನಿಸಿದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಕೇವಲ 201 ರನ್ ಬಾರಿಸಿದ್ದರೂ ನೆಟ್ ರನ್‌ರೇಟ್ ಆಧಾರದಲ್ಲಿ ಪ್ಲೇ ಆಫ್ ಪ್ರವೇಶಿಸುತ್ತಿತ್ತು.
ಮೊದಲ ಓವರ್‌ನಿಂದಲೇ ಆರ್‌ಸಿಬಿ ಬೌಲರ್‌ಗಳ ಸಂಘಟಿತ ಪ್ರದರ್ಶನದಿಂದ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು 191 ರನ್‌ಗಳಿಗೆ ಕಟ್ಟಿಹಾಕುವಲ್ಲಿ ಯಶಸ್ವಿಯಾದರು. ಈ ಮೂಲಕ ಆರ್‌ಸಿಬಿ 27 ರನ್ ಅಂತರದ ಗೆಲುವು ಸಾಧಿಸಿತು.
ಇನ್ನು ಈ ಗೆಲುವಿನೊಂದಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 17ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ನಾಲ್ಕನೇ ತಂಡವಾಗಿ ಪ್ಲೇ ಆಫ್‌ಗೆ ಲಗ್ಗೆಯಿಡುವಲ್ಲಿ ಯಶಸ್ವಿಯಾಯಿತು. ಈಗಾಗಲೇ ಕೆಕೆಆರ್, ರಾಜಸ್ಥಾನ ಹಾಗೂ ಸನ್‌ರೈಸರ್ಸ್ ತಂಡಗಳು ಪ್ಲೇ ಆಫ್ ಪ್ರವೇಶಿಸಿವೆ.
17ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಆರ್‌ಸಿಬಿ ತಂಡವು ದಯನೀಯ ಆರಂಭವನ್ನು ಕಂಡಿತ್ತು. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಮೊದಲ 8 ಪಂದ್ಯಗಳಲ್ಲಿ 7 ಸೋಲು ಹಾಗೂ ಕೇವಲ ಒಂದು ಗೆಲುವು ಕಂಡಿತ್ತು.
ಆದರೆ 9ನೇ ಪಂದ್ಯದಿಂದ ಎಚ್ಚೆತ್ತುಕೊಂಡ ಫಾಫ್ ಡು ಪ್ಲೆಸಿಸ್ ನೇತೃತ್ವದ ಆರ್‌ಸಿಬಿ ತಂಡವು ಸತತ 6 ಗೆಲುವುಗಳನ್ನು ದಾಖಲಿಸುವ ಮೂಲಕ ಪವಾಡ ಸದೃಶ ರೂಪದಲ್ಲಿ ಇದೀಗ ಪ್ಲೇ ಆಫ್‌ಗೆ ಎಂಟ್ರಿಕೊಟ್ಟಿದೆ.
ಇದಷ್ಟೇ ಅಲ್ಲದೇ ಐಪಿಎಲ್ ಇತಿಹಾಸದಲ್ಲಿ ಮೊದಲ 7 ಪಂದ್ಯಗಳಲ್ಲಿ ಕೇವಲ ಒಂದು ಪಂದ್ಯ ಗೆದ್ದು ಆ ಬಳಿಕ ಪ್ಲೇ ಆಫ್‌ಗೆ ಎಂಟ್ರಿಕೊಟ್ಟ ಮೊದಲ ತಂಡ ಎನ್ನುವ ಅಪರೂಪದ ದಾಖಲೆಯನ್ನು ಆರ್‌ಸಿಬಿ ತಂಡ ತನ್ನದಾಗಿಸಿಕೊಂಡಿದೆ.