IPL 2023: 'ದೊಡ್ಡದಾಗಿ ಸಿಗ್ನಲ್' ಕೊಟ್ಟ ಮುಂಬೈ ಇಂಡಿಯನ್ಸ್ ದೈತ್ಯ ಪ್ರತಿಭೆ..!
ಬೆಂಗಳೂರು(ಮಾ.26): ಮಿಲಿಯನ್ ಡಾಲರ್ ಕ್ರಿಕೆಟ್ ಟೂರ್ನಿ ಎನಿಸಿಕೊಂಡಿರುವ 16ನೇ ಆವೃತ್ತಿಯ ಐಪಿಎಲ್ ಟೂರ್ನಿ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗಲೇ, ಮುಂಬೈ ಇಂಡಿಯನ್ಸ್ ತಂಡದ ಮಾರಕ ವೇಗಿ, ಉಳಿದ ತಂಡಗಳ ಪಾಲಿಗೆ ದೊಡ್ಡ ಸಿಗ್ನಲ್ ನೀಡಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
कोण आला रे? 🤫#OneFamily #MumbaiMeriJaan #MumbaiIndians #IPL2023 #TATAIPL pic.twitter.com/gZoobxiZtw
— Mumbai Indians (@mipaltan) March 26, 2023
ಬಹುನಿರೀಕ್ಷಿತ 16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯು ಮಾರ್ಚ್ 31ರಂದು ಆರಂಭವಾಗಲಿದ್ದು, ಅಹಮದಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಹೈವೋಲ್ಟೇಜ್ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಗುಜರಾತ್ ಟೈಟಾನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಸೆಣಸಾಡಲಿವೆ.
ಇನ್ನು ಐದು ಬಾರಿಯ ಐಪಿಎಲ್ ಚಾಂಪಿಯನ್ ರೋಹಿತ್ ಶರ್ಮಾ ನೇತೃತ್ವದ ಮುಂಬೈ ಇಂಡಿಯನ್ಸ್ ತಂಡವು ಏಪ್ರಿಲ್ 02ರಂದು ಬೆಂಗಳೂರಿನ ಎಂ ಚಿನ್ನಸ್ವಾಮಿ ಮೈದಾನದಲ್ಲಿ ನಡೆಯಲಿರುವ ಪಂದ್ಯದಲ್ಲಿ ಆರ್‌ಸಿಬಿ ವಿರುದ್ದ ಕಣಕ್ಕಿಳಿಯುವ ಮೂಲಕ ತನ್ನ ಅಭಿಯಾನವನ್ನು ಆರಂಭಿಸಲಿದೆ.
ಕಳೆದ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಮುಂಬೈ ಇಂಡಿಯನ್ಸ್ ತಂಡವು ನೀರಸ ಪ್ರದರ್ಶನ ತೋರುವ ಮೂಲಕ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನ ಪಡೆದು ಮುಖಭಂಗ ಅನುಭವಿಸಿತ್ತು.
ಇನ್ನು 16ನೇ ಆವೃತ್ತಿಯ ಐಪಿಎಲ್ ಟೂರ್ನಿ ಆರಂಭಕ್ಕೂ ಮುನ್ನವೇ ತಂಡದ ಪ್ರಮುಖ ವೇಗಿ ಜಸ್ಪ್ರೀತ್ ಬುಮ್ರಾ ಹಾಗೂ ಜೇ ರಿಚರ್ಡ್‌ಸನ್ ಫಿಟ್ನೆಸ್ ಸಮಸ್ಯೆಯಿಂದ ಐಪಿಎಲ್ ಟೂರ್ನಿಯಿಂದ ಹೊರಬಿದ್ದಿದ್ದು, ತಂಡದ ಪಾಲಿಗೆ ದೊಡ್ಡ ಹಿನ್ನಡೆಯಾಗಿ ಪರಿಣಮಿಸಿತ್ತು.
ಇದೆಲ್ಲದರ ನಡುವೆ ಮುಂಬೈ ಇಂಡಿಯನ್ಸ್ ಪಾಲಿಗೆ ಸಿಹಿ ಸುದ್ದಿಯೊಂದು ಹೊರಬಿದ್ದಿದ್ದು, ಇಂಗ್ಲೆಂಡ್ ಮೂಲದ ಮಾರಕ ವೇಗಿ ಜೋಫ್ರಾ ಆರ್ಚರ್ ಇದೀಗ, ಮುಂಬೈ ಪಾಳಯ ಕೂಡಿಕೊಂಡಿದ್ದು, ದೊಡ್ಡದಾಗಿಯೇ ಸಿಗ್ನಲ್ ಕೊಟ್ಟಿದ್ದಾರೆ
ಹೌದು, ಜೋಫ್ರಾ ಆರ್ಚರ್, ಇದೀಗ ಮುಂಬೈ ಇಂಡಿಯನ್ಸ್ ಜೆರ್ಸಿ ತೊಟ್ಟ ಫೋಟೋವನ್ನು ಫ್ರಾಂಚೈಸಿ ತಮ್ಮ ಅಧಿಕೃತ ಸೋಷಿಯಲ್ ಮೀಡಿಯಾ ಪೇಜ್‌ಗಳಲ್ಲಿ ಪೋಸ್ಟ್ ಮಾಡಿದ್ದು, ಯಾರು ಬಂದಿದ್ದಾರೆ ನೋಡಿ ಎಂದು ಟ್ವೀಟ್ ಮಾಡಿದೆ.
ಈ ಮೊದಲು ಐಪಿಎಲ್‌ನಲ್ಲಿ ರಾಜಸ್ಥಾನ ರಾಯಲ್ಸ್ ತಂಡವನ್ನು ಪ್ರತಿನಿಧಿಸಿದ್ದ ಜೋಫ್ರಾ ಆರ್ಚರ್ ಇದೀಗ, ಇದೇ ಮೊದಲ ಬಾರಿಗೆ ಮುಂಬೈ ಇಂಡಿಯನ್ಸ್ ಪರ ಕಣಕ್ಕಿಳಿಯಲು ಸಜ್ಜಾಗಿದ್ದಾರೆ.
2022ರ ಐಪಿಎಲ್ ಹರಾಜಿನಲ್ಲಿ ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯು ಬರೋಬ್ಬರಿ 8 ಕೋಟಿ ರುಪಾಯಿ ನೀಡಿ ಜೋಫ್ರಾ ಆರ್ಚರ್ ಅವರನ್ನು ಖರೀದಿಸುವಲ್ಲಿ ಯಶಸ್ವಿಯಾಗಿತ್ತು. ಫಿಟ್ನೆಸ್ ಸಮಸ್ಯೆಯಿಂದಾಗಿ ಕಳೆದ ವರ್ಷದ ಐಪಿಎಲ್‌ನಲ್ಲಿ ಆರ್ಚರ್ ಪಾಲ್ಗೊಂಡಿರಲಿಲ್ಲ.
ಇದೀಗ ಜಸ್ಪ್ರೀತ್ ಬುಮ್ರಾ ಹಾಗೂ ಜೇ ರಿಚರ್ಡ್‌ಸನ್ ಅನುಪಸ್ಥಿತಿಯಲ್ಲಿ ಜೋಫ್ರಾ ಆರ್ಚರ್, ಮುಂಬೈ ಇಂಡಿಯನ್ಸ್ ತಂಡದ ವೇಗದ ಬೌಲಿಂಗ್ ಪಡೆಯ ಮುಂಚೂಣಿ ವಹಿಸಲಿದ್ದು, ತಂಡಕ್ಕೆ ಯಾವ ರೀತಿ ನೆರವಾಗಲಿದ್ದಾರೆ ಎನ್ನುವುದನ್ನು ಕಾದು ನೋಡಬೇಕಿದೆ.