IPL 2023: ಆರ್‌ಸಿಬಿಗೆ ಅತಿದೊಡ್ಡ ಶಾಕ್, ಕಳೆದ ಆವೃತ್ತಿಯ ಹೀರೋ ಟೂರ್ನಿಯಿಂದಲೇ ಔಟ್..!
ಬೆಂಗಳೂರು(ಏ.04): 16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಗೆ ಅಧಿಕೃತ ಚಾಲನೆ ಸಿಕ್ಕಿದೆ. ಮೊದಲ ಪಂದ್ಯದಲ್ಲೇ ಭರ್ಜರಿ ಗೆಲುವು ಸಾಧಿಸಿ ಬೀಗುತ್ತಿದ್ದ ಫಾಫ್ ಡು ಪ್ಲೆಸಿಸ್ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಬಿಗ್ ಶಾಕ್ ಎದುರಾಗಿದ್ದು, ತಂಡದ ಸ್ಟಾರ್ ಆಟಗಾರ ಗಾಯದ ಸಮಸ್ಯೆಯಿಂದ ಸಂಪೂರ್ಣ ಟೂರ್ನಿಯಿಂದಲೇ ಹೊರಬಿದ್ದಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ

ಚೊಚ್ಚಲ ಐಪಿಎಲ್ ಟ್ರೋಫಿ ಕನವರಿಕೆಯಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 16ನೇ ಆವೃತ್ತಿಯ ಐಪಿಎಲ್ ಟೂರ್ನಿಯನ್ನು ಭರ್ಜರಿಯಾಗಿಯೇ ಆರಂಭಿಸಿದ್ದು, ಟೂರ್ನಿಯಲ್ಲಿ ಶುಭಾರಂಭ ಮಾಡಿದೆ.
ತವರಿನ ಎಂ ಚಿನ್ನಸ್ವಾಮಿ ಮೈದಾನದಲ್ಲಿ ಏಪ್ರಿಲ್ 02ರಂದು ನಡೆದ ಹೈವೋಲ್ಟೇಜ್ ಪಂದ್ಯದಲ್ಲಿ 5 ಬಾರಿಯ ಐಪಿಎಲ್ ಚಾಂಪಿಯನ್ ಮುಂಬೈ ಇಂಡಿಯನ್ಸ್ ಎದುರು ಆರ್‌ಸಿಬಿ ತಂಡವು 8 ವಿಕೆಟ್ ಭರ್ಜರಿ ಜಯ ಸಾಧಿಸುವ ಮೂಲಕ ಗೆಲುವಿನ ಕೇಕೆ ಹಾಕಿದೆ.
ಇನ್ನು ಇದೆಲ್ಲದರ ನಡುವೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಗಾಯದ ಸಮಸ್ಯೆ ಇನ್ನಿಲ್ಲದಂತೆ ಕಾಡುತ್ತಿದೆ. ವಿಲ್ ಜ್ಯಾಕ್ಸ್ ಟೂರ್ನಿಯಿಂದಲೇ ಹೊರಬಿದ್ದಿದ್ದರೇ, ಜೋಸ್ ಹೇಜಲ್‌ವುಡ್, ಆರ್‌ಸಿಬಿ ಆರಂಭಿಕ ಪಂದ್ಯಗಳಿಗೆ ಅಲಭ್ಯರಾಗಿದ್ದಾರೆ.
ಇನ್ನು ಇದೀಗ ಆರ್‌ಸಿಬಿ ತಂಡಕ್ಕೆ ಮತ್ತೊಂದು ಶಾಕ್ ಎದುರಾಗಿದ್ದು, ಕಳೆದ ಆವೃತ್ತಿಯ ಐಪಿಎಲ್ ಟೂರ್ನಿಯ ಎಲಿಮಿನೇಟರ್ ಪಂದ್ಯದಲ್ಲಿ ಲಖನೌ ಸೂಪರ್ ಜೈಂಟ್ಸ್ ಎದುರು ಸಿಡಿಲಬ್ಬರದ ಶತಕ ಸಿಡಿಸಿದ್ದ ರಜತ್ ಪಾಟೀದಾರ್, ಇದೀಗ 16ನೇ ಆವೃತ್ತಿಯ ಸಂಪೂರ್ಣ ಐಪಿಎಲ್ ಟೂರ್ನಿಯಿಂದ ಹೊರಬಿದ್ದಿದ್ದಾರೆ.
ಹಿಮ್ಮಡಿ ನೋವಿನಿಂದ ಬಳಲುತ್ತಿದ್ದ ರಜತ್ ಪಾಟೀದಾರ್, ಈ ಮೊದಲು 16ನೇ ಆವೃತ್ತಿಯ ಐಪಿಎಲ್ ಟೂರ್ನಿಯ ಆರಂಭಿಕ ಪಂದ್ಯಗಳಿಗೆ ಅಲಭ್ಯರಾಗಲಿದ್ದಾರೆ ಎಂದು ವರದಿಯಾಗಿತ್ತು. ಆದರೆ ಇದೀಗ ಇಡೀ ಟೂರ್ನಿಯಿಂದಲೇ ಪಾಟೀದಾರ್ ಹೊರಬಿದ್ದಿರುವ ವಿಚಾರವನ್ನು ಆರ್‌ಸಿಬಿ ಫ್ರಾಂಚೈಸಿಯು ಟ್ವೀಟ್ ಮಾಡಿ ಖಚಿತಪಡಿಸಿದೆ.
ಹಿಮ್ಮಡಿ ಗಾಯದ ಸಮಸ್ಯೆಯಿಂದ ಬಳಲುತ್ತಿರುವ ರಜತ್ ಪಾಟೀದಾರ್, ದುರಾದೃಷ್ಟವಶಾತ್ 2023ರ ಐಪಿಎಲ್ ಟೂರ್ನಿಯಿಂದ ಹೊರಬಿದ್ದಿದ್ದಾರೆ. ಪಾಟೀದಾರ್ ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ನಾವು ಹಾರೈಸುತ್ತೇವೆ. ತಂಡದ ಕೋಚ್ ಹಾಗೂ ಮ್ಯಾನೇಜ್‌ಮೆಂಟ್, ಪಾಟೀದಾರ್‌ಗೆ ಬದಲಿ ಆಟಗಾರರನ್ನು ಇನ್ನಷ್ಟೇ ಹೆಸರಿಸಲಿದೆ ಎಂದು ಟ್ವೀಟ್ ಮಾಡಿದೆ.