ಹಿಟ್‌ಮ್ಯಾನ್ ರೋಹಿತ್ ಶರ್ಮಾ ಅಪರೂಪದ ದಾಖಲೆ ಧೂಳೀಪಟ ಮಾಡಿದ ರಿಷಭ್ ಪಂತ್!
ಭಾರತ ಹಾಗೂ ಇಂಗ್ಲೆಂಡ್ ನಡುವಿನ ಐದು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಟೀಂ ಇಂಡಿಯಾ ಉತ್ತಮ ಆರಂಭ ಪಡೆದಿದೆ. ಇದೇ ಪಂದ್ಯದಲ್ಲಿ ಟೀಂ ಇಂಡಿಯಾ ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್, ರೋಹಿತ್ ಶರ್ಮಾ ಹೆಸರಿನಲ್ಲಿದ್ದ ಅಪರೂಪದ ದಾಖಲೆಯನ್ನು ತಮ್ಮ ಹೆಸರಿಗೆ ಬರೆಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ಹೆಡಿಂಗ್ಲೆ ಟೆಸ್ಟ್ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಲಿಳಿದ ಟೀಂ ಇಂಡಿಯಾ, ಮೊದಲ ದಿನದಾಟದಂತ್ಯಕ್ಕೆ ಕೇವಲ 3 ವಿಕೆಟ್ ಕಳೆದುಕೊಂಡು 359 ರನ್ ಬಾರಿಸುವ ಮೂಲಕ ಬೃಹತ್ ಮೊತ್ತದತ್ತ ದಾಪುಗಾಲಿಡುತ್ತಿದೆ.
ಆರಂಭಿಕ ಬ್ಯಾಟರ್ ಯಶಸ್ವಿ ಜೈಸ್ವಾಲ್ ಆಕರ್ಷಕ ಶತಕ ಸಿಡಿಸಿದರೆ, ನಾಯಕ ಶುಭ್‌ಮನ್ ಗಿಲ್ ಅಜೇಯ 127 ರನ್ ಬಾರಿಸಿದ್ದಾರೆ. ಇನ್ನು ಮತ್ತೊಂದು ತುದಿಯಲ್ಲಿ ರಿಷಭ್ ಪಂತ್ ಅಜೇಯ ಅರ್ಧಶತಕ ಸಿಡಿಸಿ ಎರಡನೇ ದಿನಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ.
ಇನ್ನು ಇದೇ ಪಂದ್ಯದಲ್ಲಿ ರಿಷಭ್ ಪಂತ್ ಆಕರ್ಷಕ ಎರಡು ಸಿಕ್ಸರ್ ಸಿಡಿಸುವ ಮೂಲಕ ಟೀಂ ಇಂಡಿಯಾ ಮಾಜಿ ನಾಯಕ ರೋಹಿತ್ ಶರ್ಮಾ ಹೆಸರಿನಲ್ಲಿದ್ದ ಅಪರೂಪದ ದಾಖಲೆಯನ್ನು ತಮ್ಮ ಹೆಸರಿಗೆ ಬರೆಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ಹೌದು, ರಿಷಭ್ ಪಂತ್ ಇದೀಗ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ಅತಿಹೆಚ್ಚು ಸಿಕ್ಸರ್ ಸಿಡಿಸಿದ ಟೀಂ ಇಂಡಿಯಾ ಬ್ಯಾಟರ್ ಎನಿಸಿಕೊಂಡಿದ್ದಾರೆ. ಈ ಮೂಲಕ ರೋಹಿತ್ ಶರ್ಮಾ ದಾಖಲೆ ಅಳಿಸಿ ಹಾಕಿದ್ದಾರೆ.
ಈ ಮೊದಲು ಹಿಟ್‌ಮ್ಯಾನ್ ಖ್ಯಾತಿಯ ರೋಹಿತ್ ಶರ್ಮಾ, ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ಒಟ್ಟು 56 ಸಿಕ್ಸರ್ ಸಿಡಿಸಿ ಅಗ್ರಸ್ಥಾನದಲ್ಲಿದ್ದರು. ರೋಹಿತ್ ಶರ್ಮಾ ಈಗಾಗಲೇ ಟೆಸ್ಟ್‌ಗೆ ವಿದಾಯ ಘೋಷಿಸಿದ್ದಾರೆ.
ಇದೀಗ ಇಂಗ್ಲೆಂಡ್ ಎದುರಿನ ಮೊದಲ ಟೆಸ್ಟ್‌ನ ಮೊದಲ ಇನ್ನಿಂಗ್ಸ್‌ನಲ್ಲಿ ಎರಡು ಸಿಕ್ಸರ್ ಸಿಡಿಸುವ ಮೂಲಕ ಪಂತ್, ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ 61 ಇನ್ನಿಂಗ್ಸ್‌ಗಳಿಂದ ತಮ್ಮ ಸಿಕ್ಸರ್‌ಗಳ ಸಂಖ್ಯೆಯನ್ನು 58ಕ್ಕೆ ಏರಿಸಿಕೊಂಡಿದ್ದಾರೆ.
ಇನ್ನು ಒಟ್ಟಾರೆ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ಅತಿಹೆಚ್ಚು ಸಿಕ್ಸರ್ ಬಾರಿಸಿದ ಸಾಧನೆ ಇಂಗ್ಲೆಂಡ್ ಟೆಸ್ಟ್ ತಂಡದ ನಾಯಕ ಬೆನ್ ಸ್ಟೋಕ್ಸ್ ಹೆಸರಿನಲ್ಲಿದೆ. ಸ್ಟೋಕ್ಸ್ 96 ಟೆಸ್ಟ್ ಇನ್ನಿಂಗ್ಸ್‌ಗಳಿಂದ 86 ಸಿಕ್ಸರ್ ಸಿಡಿಸಿದ್ದಾರೆ.