ಐರ್ಲೆಂಡ್ ಎದುರಿನ ಪಂದ್ಯದಲ್ಲಿ ಅಪರೂಪದ ವಿಶ್ವದಾಖಲೆ ಬರೆದ ರೋಹಿತ್ ಶರ್ಮಾ..!
ನ್ಯೂಯಾರ್ಕ್: 2024ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ, ಐರ್ಲೆಂಡ್ ಎದುರು 8 ವಿಕೆಟ್ ಭರ್ಜರಿ ಗೆಲುವು ಸಾಧಿಸಿ ಶುಭಾರಂಭ ಮಾಡಿದೆ. ಇನ್ನು ಇದೇ ಪಂದ್ಯದಲ್ಲಿ ಹಿಟ್‌ಮ್ಯಾನ್ ಖ್ಯಾತಿಯ ರೋಹಿತ್ ಶರ್ಮಾ ಅಪರೂಪದ ದಾಖಲೆ ಬರೆದಿದ್ದಾರೆ.
ಈ ಬಾರಿಯ ಐಸಿಸಿ ಟಿ20 ವಿಶ್ವಕಪ್ ಟ್ರೋಫಿ ಗೆಲ್ಲಬಲ್ಲ ನೆಚ್ಚಿನ ತಂಡವಾಗಿ ಗುರುತಿಸಿಕೊಂಡಿರುವ ಟೀಂ ಇಂಡಿಯಾ, ಇದೀಗ ಐರ್ಲೆಂಡ್ ಎದುರು ಸುಲಭ ಗೆಲುವು ದಾಖಲಿಸಿ ಶುಭಾರಂಭ ಮಾಡಿದೆ.
ಇನ್ನು ಇದೇ ಪಂದ್ಯದಲ್ಲಿ ಭರ್ಜರಿ ಗೆಲುವು ದಾಖಲಿಸುವುದರೊಂದಿಗೆ ರೋಹಿತ್ ಶರ್ಮಾ ಬ್ಯಾಟರ್ ಆಗಿ ಹಾಗೂ ನಾಯಕನಾಗಿ ಅಪರೂಪದ ದಾಖಲೆಗಳನ್ನು ನಿರ್ಮಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಐರ್ಲೆಂಡ್ ಎದುರಿನ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಕೇವಲ 37 ಎಸೆತಗಳನ್ನು ಎದುರಿಸಿ 4 ಬೌಂಡರಿ ಹಾಗೂ 3 ಸಿಕ್ಸರ್ ಸಹಿತ ಅಜೇಯ 52 ರನ್ ಬಾರಿಸಿ ರಿಟೈರ್ಡ್‌ಹರ್ಟ್ ಆಗಿ ಪೆವಿಲಿಯನ್ ಸೇರಿದರು.
ಇನ್ನು ಇದೇ ಇನಿಂಗ್ಸ್‌ನಲ್ಲಿ ರೋಹಿತ್ ಶರ್ಮಾ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 600 ಸಿಕ್ಸರ್ ಸಿಡಿಸಿದ ಜಗತ್ತಿನ ಮೊದಲ ಬ್ಯಾಟರ್ ಎನ್ನುವ ಅಪರೂಪದ ವಿಶ್ವದಾಖಲೆ ನಿರ್ಮಿಸಿದ್ದಾರೆ.
ಈ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿರುವ ಯೂನಿವರ್ಸಲ್ ಬಾಸ್ ಖ್ಯಾತಿಯ ವೆಸ್ಟ್ ಇಂಡೀಸ್ ಮಾಜಿ ಕ್ರಿಕೆಟಿಗ ಕ್ರಿಸ್ ಗೇಲ್ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 553 ಸಿಕ್ಸರ್ ಸಿಡಿಸಿದ್ದಾರೆ.
ಇನ್ನು ಇದಷ್ಟೇ ಅಲ್ಲದೇ ರೋಹಿತ್ ಶರ್ಮಾ, ಇದೀಗ ಎಂ ಎಸ್ ಧೋನಿ ಹಿಂದಿಕ್ಕಿ ಭಾರತ ಪರ ಅತಿಹೆಚ್ಚು ಟಿ20 ಪಂದ್ಯಗಳನ್ನು ಜಯಿಸಿದ ನಾಯಕ ಎನ್ನುವ ದಾಖಲೆಯನ್ನು ತಮ್ಮ ಹೆಸರಿಗೆ ಬರೆಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ಚೊಚ್ಚಲ ಟಿ20 ವಿಶ್ವಕಪ್ ಗೆದ್ದ ನಾಯಕ ಮಹೇಂದ್ರ ಸಿಂಗ್ ಧೋನಿ, ನಾಯಕನಾಗಿ ಸೂಪರ್ ಓವರ್ ಹೊರತುಪಡಿಸಿ 73 ಪಂದ್ಯಗಳಲ್ಲಿ ಭಾರತ ಟಿ20 ತಂಡವನ್ನು ಮುನ್ನಡೆಸಿ 41 ಪಂದ್ಯಗಳಲ್ಲಿ ಯಶಸ್ವಿಯಾಗಿ ತಂಡವನ್ನು ಗೆಲುವಿನ ದಡ ಸೇರಿಸಿದ್ದಾರೆ.
ಇದೀಗ ರೋಹಿತ್ ಶರ್ಮಾ ಕೇವಲ 55 ಟಿ20 ಪಂದ್ಯಗಳನ್ನಾಡಿ 42 ಬಾರಿ ತಂಡವನ್ನು ಯಶಸ್ವಿಯಾಗಿ ಗೆಲುವಿನ ದಡ ಸೇರಿಸಿದ್ದಾರೆ. ರೋಹಿತ್ ಗೆಲುವಿನ ಸರಾಸರಿ 77.29% ಆಗಿದ್ದರೆ, ಧೋನಿ ಗೆಲುವಿನ ಸರಾಸರಿ 59.28% ಆಗಿದೆ.