- Home
- Sports
- Cricket
- ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 17,000 ರನ್ ಬಾರಿಸಿದ ರೋಹಿತ್ ಶರ್ಮಾ; ಟೀಂ ಇಂಡಿಯಾ ದಿಗ್ಗಜರ ಸಾಲಿಗೆ ಸೇರ್ಪಡೆ..!
ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 17,000 ರನ್ ಬಾರಿಸಿದ ರೋಹಿತ್ ಶರ್ಮಾ; ಟೀಂ ಇಂಡಿಯಾ ದಿಗ್ಗಜರ ಸಾಲಿಗೆ ಸೇರ್ಪಡೆ..!
ಅಹಮದಾಬಾದ್(ಮಾ.11): ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ, ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಕೊನೆಯ ಪಂದ್ಯದಲ್ಲಿ ತಮ್ಮ ಅಂತಾರಾಷ್ಟ್ರೀಯ ಕ್ರಿಕೆಟ್ ಬದುಕಿನಲ್ಲಿ ಭಾರತ ಪರ 17 ಸಾವಿರ ರನ್ ಪೂರೈಸಿದ ಸಾಧನೆ ಮಾಡಿದ್ದಾರೆ. ಈ ಮೂಲಕ ಈ ಸಾಧನೆ ಮಾಡಿದ ಭಾರತದ 7ನೇ ಬ್ಯಾಟರ್ ಎನ್ನುವ ಹಿರಿಮೆಗೆ ಹಿಟ್‌ಮ್ಯಾನ್ ಖ್ಯಾತಿಯ ರೋಹಿತ್ ಶರ್ಮಾ ಪಾತ್ರರಾಗಿದ್ದಾರೆ.ರೋಹಿತ್ ಶರ್ಮಾ ಮೂರನೇ ದಿನದಾಟದ ಆರಂಭದಲ್ಲೇ 21 ರನ್ ಬಾರಿಸುತ್ತಿದ್ದಂತೆಯೇ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 17 ಸಾವಿರ ರನ್ ಪೂರೈಸಿದ ಸಾಧನೆ ಮಾಡಿದರು. ಇದಾದ ಬಳಿಕ ರೋಹಿತ್ ಶರ್ಮಾ 35 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು. ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಭಾರತ ಪರ 17,000+ ರನ್ ಬಾರಿಸಿದ ಭಾರತದ ಬ್ಯಾಟರ್‌ಗಳ ಕಂಪ್ಲೀಟ್ ಡೀಟೈಲ್ಸ್ ಇಲ್ಲಿದೆ ನೋಡಿ

1. ಸಚಿನ್ ತೆಂಡುಲ್ಕರ್: 34,357 ರನ್
ಕ್ರಿಕೆಟ್ ದಂತಕಥೆ ಸಚಿನ್ ತೆಂಡುಲ್ಕರ್ ಭಾರತ ಪರ 664 ಅಂತಾರಾಷ್ಟ್ರೀಯ ಪಂದ್ಯಗಳನ್ನಾಡುವ ಮೂಲಕ 34,357 ರನ್ ಬಾರಿಸಿದ್ದಾರೆ. ಈ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಗರಿಷ್ಠ ರನ್ ಬಾರಿಸಿದ ಬ್ಯಾಟರ್‌ಗಳ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿ ಭದ್ರವಾಗಿದ್ದಾರೆ.
2. ವಿರಾಟ್ ಕೊಹ್ಲಿ: 25,047
ಟೀಂ ಇಂಡಿಯಾ ರನ್ ಮಷೀನ್ ವಿರಾಟ್ ಕೊಹ್ಲಿ, ಸದ್ಯ ಭಾರತ ಪರ 494 ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಿ 25,047 ರನ್ ಬಾರಿಸುವ ಮೂಲಕ ಭಾರತ ಪರ ಗರಿಷ್ಠ ಅಂತಾರಾಷ್ಟ್ರೀಯ ರನ್ ಬಾರಿಸಿದವರ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ.
3. ರಾಹುಲ್ ದ್ರಾವಿಡ್: 24,064
ದ ವಾಲ್ ಖ್ಯಾತಿಯ ರಾಹುಲ್ ದ್ರಾವಿಡ್, ಭಾರತ ಪರ 504 ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಿ 24,064 ರನ್ ಬಾರಿಸುವ ಮೂಲಕ ಗರಿಷ್ಠ ರನ್ ಬಾರಿಸಿದ ಭಾರತದ ಬ್ಯಾಟರ್‌ಗಳ ಪೈಕಿ ಮೂರನೇ ಸ್ಥಾನದಲ್ಲಿದ್ದಾರೆ.
4. ಸೌರವ್ ಗಂಗೂಲಿ: 18,433
ಟೀಂ ಇಂಡಿಯಾ ಮಾಜಿ ನಾಯಕ ಸೌರವ್ ಗಂಗೂಲಿ ಭಾರತ ಪರ 421 ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಿ 18,433 ರನ್ ಬಾರಿಸುವ ಮೂಲಕ ಈ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದ್ದಾರೆ.
5. ಮಹೇಂದ್ರ ಸಿಂಗ್ ಧೋನಿ:
ಕ್ಯಾಪ್ಟನ್ ಕೂಲ್ ಖ್ಯಾತಿಯ ಮಹೇಂದ್ರ ಸಿಂಗ್ ಧೋನಿ, 535 ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಿ 17,092 ರನ್ ಬಾರಿಸುವ ಮೂಲಕ ಈ ಪಟ್ಟಿಯಲ್ಲಿ 5ನೇ ಸ್ಥಾನದಲ್ಲಿದ್ದಾರೆ.
6. ರೋಹಿತ್ ಶರ್ಮಾ:
ಹಿಟ್‌ಮ್ಯಾನ್ ಖ್ಯಾತಿಯ ರೋಹಿತ್ ಶರ್ಮಾ ಸದ್ಯ 438ನೇ ಅಂತಾರಾಷ್ಟ್ರೀಯ ಪಂದ್ಯವನ್ನಾಡುತ್ತಿದ್ದು, 17,014 ರನ್ ಬಾರಿಸಿದ್ದಾರೆ. ಈ ಮೂಲಕ ಈ ಪಟ್ಟಿಯಲ್ಲಿ ಆರನೇ ಸ್ಥಾನದಲ್ಲಿದ್ದಾರೆ.
* ವಿರೇಂದ್ರ ಸೆಹ್ವಾಗ್:
ಸ್ಪೋಟಕ ಬ್ಯಾಟರ್ ವಿರೇಂದ್ರ ಸೆಹ್ವಾಗ್ ಕೂಡಾ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 17,253 ರನ್ ಬಾರಿಸಿದ್ದಾರೆ. ಆದರೆ ಈ ಪೈಕಿ ಭಾರತಯ ಪರ 16,892 ರನ್ ಬಾರಿಸಿದ್ದು, ಇನ್ನುಳಿದ ರನ್‌ಗಳನ್ನು ಏಷ್ಯಾ ಇಲೆವನ್ ಹಾಗೂ ಐಸಿಸಿ ಇಲೆವನ್ ಪರ ಸೆಹ್ವಾಗ್ ರನ್ ಗಳಿಸಿದ್ದಾರೆ.