Virat Kohli 100th Test: 8 ಸಾವಿರ ರನ್ ಬಾರಿಸಿ ರಿಕಿ ಪಾಂಟಿಂಗ್ ದಾಖಲೆ ಸರಿಗಟ್ಟಿದ ವಿರಾಟ್ ಕೊಹ್ಲಿ..!
ಮೊಹಾಲಿ: ಭಾರತ ಹಾಗೂ ಶ್ರೀಲಂಕಾ (India vs Sri Lanka) ನಡುವಿನ ಮೊದಲ ಟೆಸ್ಟ್ ಪಂದ್ಯವು ಟೀಂ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿ (Virat Kohli) ಪಾಲಿನ ಅತ್ಯಂತ ಸ್ಮರಣೀಯ ಟೆಸ್ಟ್ ಪಂದ್ಯವಾಗಿದೆ. ಇದು ವಿರಾಟ್ ಕೊಹ್ಲಿಯಾಡುತ್ತಿರುವ ನೂರನೇ ಟೆಸ್ಟ್ ಪಂದ್ಯವಾಗಿದ್ದು, ಇದೇ ಪಂದ್ಯದಲ್ಲಿ ವಿರಾಟ್ ಕೊಹ್ಲಿ 8,000 ರನ್ ಬಾರಿಸುವ ಮೂಲಕ ಅಪರೂಪದ ದಾಖಲೆ ಬರೆದಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
ಕ್ರಿಕೆಟ್ ವೃತ್ತಿಜೀವನದ 100ನೇ ಟೆಸ್ಟ್ ಪಂದ್ಯವನ್ನಾಡುತ್ತಿರುವ ಟೀಂ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿ, ಟೆಸ್ಟ್ ಕ್ರಿಕೆಟ್‌ನಲ್ಲಿ 8,000 ಪೂರೈಸಿದ ಸಾಧನೆ ಮಾಡಿದ್ದಾರೆ. ಈ ಮೂಲಕ ಟೆಸ್ಟ್ ಕ್ರಿಕೆಟ್‌ನಲ್ಲಿ 8 ಸಾವಿರ ರನ್ ಬಾರಿಸಿದ ಆರನೇ ಹಾಗೂ ಒಟ್ಟಾರೆ 33ನೇ ಬ್ಯಾಟರ್ ಎನ್ನುವ ಕೀರ್ತಿ ವಿರಾಟ್ ಕೊಹ್ಲಿ ಪಾಲಾಗಿದೆ.
ಈ ಮೊದಲು ಭಾರತ ಪರ ಸಚಿನ್ ತೆಂಡುಲ್ಕರ್(15,921), ರಾಹುಲ್ ದ್ರಾವಿಡ್(13,288), ಸುನಿಲ್ ಗವಾಸ್ಕರ್(10,122), ವಿವಿಎಸ್ ಲಕ್ಷ್ಮಣ್ (8,781) ಹಾಗೂ ವಿರೇಂದ್ರ ಸೆಹ್ವಾಗ್(8,586) ಭಾರತ ಪರ ಟೆಸ್ಟ್ ಕ್ರಿಕೆಟ್‌ನಲ್ಲಿ 8 ಸಾವಿರಕ್ಕೂ ಅಧಿಕ ರನ್ ಬಾರಿಸಿದ ಸಾಧನೆ ಮಾಡಿದ್ದಾರೆ.
ಇನ್ನು ಲಂಕಾ ಎದುರಿನ ಮೊದಲ ಟೆಸ್ಟ್ ಪಂದ್ಯದಲ್ಲಿ 38 ರನ್ ಬಾರಿಸುತ್ತಿದ್ದಂತೆಯೇ ಟೆಸ್ಟ್ ಕ್ರಿಕೆಟ್‌ನಲ್ಲಿ 8 ಸಾವಿರ ರನ್ ಪೂರೈಸಿದ ವಿರಾಟ್ ಕೊಹ್ಲಿ, ಆಸ್ಟ್ರೇಲಿಯಾದ ಕ್ರಿಕೆಟ್ ದಿಗ್ಗಜ ರಿಕಿ ಪಾಂಟಿಂಗ್ ದಾಖಲೆಯನ್ನು ಕಿಂಗ್ ಕೊಹ್ಲಿ ಸರಿಗಟ್ಟಿದ್ದಾರೆ.
ಆಸ್ಟ್ರೇಲಿಯಾದ ಮಾಜಿ ನಾಯಕ ರಿಕಿ ಪಾಂಟಿಂಗ್ ಕೂಡಾ ತಾವಾಡಿದ 100ನೇ ಟೆಸ್ಟ್ ಪಂದ್ಯದಲ್ಲಿ 8 ಸಾವಿರ ರನ್ ಪೂರೈಸಿದ್ದರು. ಇದೀಗ ಟೀಂ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿ ಕೂಡಾ ತಮ್ಮ ಟೆಸ್ಟ್ ವೃತ್ತಿಜೀವನದ ನೂರನೇ ಟೆಸ್ಟ್ ಪಂದ್ಯದಲ್ಲಿ ಈ ಸಾಧನೆ ಮಾಡಿದ್ದಾರೆ.
2011ರಲ್ಲಿ ವೆಸ್ಟ್ ಇಂಡೀಸ್ ವಿರುದ್ದ ಟೆಸ್ಟ್ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ್ದ ವಿರಾಟ್ ಕೊಹ್ಲಿ, ಇದೀಗ ಲಂಕಾ ಎದುರು ಕಣಕ್ಕಿಳಿಯುವ ಮೂಲಕ ಟೆಸ್ಟ್ ಕ್ರಿಕೆಟ್‌ನಲ್ಲಿ 100 ಪಂದ್ಯಗಳನ್ನಾಡಿದ ಭಾರತದ 12ನೇ ಕ್ರಿಕೆಟಿಗ ಎನ್ನುವ ಹಿರಿಮೆಗೆ ಪಾತ್ರರಾಗಿದ್ದಾರೆ.
ವಿರಾಟ್ ಕೊಹ್ಲಿ 2019ರಲ್ಲಿ ಕೋಲ್ಕತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ಬಾಂಗ್ಲಾದೇಶ ವಿರುದ್ದ ಕೊನೆಯ ಬಾರಿಗೆ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಶತಕ ಬಾರಿಸಿದ್ದರು. ಇದಾದ ಬಳಿಕ ಕೊಹ್ಲಿ ಮೂರಂಕಿ ಮೊತ್ತ ದಾಖಲಿಸಲು ವಿಫಲವಾಗಿದ್ದರು. ಇದೀಗ ಮೊದಲ ಇನಿಂಗ್ಸ್‌ನಲ್ಲಿ ಕೊಹ್ಲಿ 45 ರನ್ ಬಾರಿಸಿ ವಿಕೆಟ್ ಒಪ್ಪಿಸುವ ಮೂಲಕ ನಿರಾಸೆ ಅನುಭವಿಸಿದ್ದಾರೆ.