IPL 2026: ರೋಹಿತ್ ಶರ್ಮಾ ಹೆಸರಿನಲ್ಲಿದ್ದ ಅಪರೂಪದ ದಾಖಲೆ ನುಚ್ಚುನೂರು ಮಾಡಿದ ವಿರಾಟ್ ಕೊಹ್ಲಿ!
ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ರನ್ ಮಷೀನ್ ವಿರಾಟ್ ಕೊಹ್ಲಿ, ಸಿಎಸ್‌ಕೆ ಎದುರಿನ ಪಂದ್ಯದಲ್ಲಿ ಅಪರೂಪದ ದಾಖಲೆ ಬರೆದಿದ್ದಾರೆ. ಈ ಮೂಲಕ ರೋಹಿತ್ ಶರ್ಮಾ ಹೆಸರಿನಲ್ಲಿದ್ದ ರೆಕಾರ್ಡ್ ಇದೀಗ ಕೊಹ್ಲಿ ಪಾಲಾಗಿದೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ.

ಒಂದೇ ತಂಡದ ವಿರುದ್ದ ಅತಿಹೆಚ್ಚು ರನ್ ಬಾರಿಸಿದ ಕೊಹ್ಲಿ
ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ (ಐಪಿಎಲ್) ವಿರಾಟ್ ಕೊಹ್ಲಿ ಮತ್ತೊಂದು ದಾಖಲೆ ಬರೆದಿದ್ದಾರೆ. ಐಪಿಎಲ್‌ನಲ್ಲಿ ಒಂದೇ ತಂಡದ ವಿರುದ್ಧ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಎಂಬ ಕೀರ್ತಿಗೆ ಕೊಹ್ಲಿ ಪಾತ್ರರಾಗಿದ್ದಾರೆ.
ರೋಹಿತ್ ಶರ್ಮಾ ಹೆಸರಿನಲ್ಲಿದ್ದ ದಾಖಲೆ ಮುರಿದ ಕೊಹ್ಲಿ
ಬದ್ದ ಎದುರಾಳಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ತಮ್ಮ 36ನೇ ಪಂದ್ಯವನ್ನಾಡಿದ ವಿರಾಟ್ ಕೊಹ್ಲಿ, ಒಟ್ಟು 1174 ರನ್ ಕಲೆಹಾಕಿದ್ದಾರೆ. ಈ ಪಂದ್ಯದಲ್ಲಿ ಅವರು 18 ಎಸೆತಗಳಲ್ಲಿ 28 ರನ್ ಗಳಿಸಿದರು. ಇದರ ಜತೆಗೆ ರೋಹಿತ್ ಶರ್ಮಾ ಹೆಸರಿನಲ್ಲಿದ್ದ ಅಪರೂಪದ ದಾಖಲೆ ಅಳಿಸಿ ಹಾಕುವಲ್ಲಿ ವಿರಾಟ್ ಯಶಸ್ವಿಯಾಗಿದ್ದಾರೆ.
ರೋಹಿತ್‌ರನನ್ನು ಹಿಂದಿಕ್ಕಿದ ಕೊಹ್ಲಿ
ಹೌದು, ಕೋಲ್ಕತಾ ನೈಟ್ ರೈಡರ್ಸ್ ವಿರುದ್ಧ 36 ಪಂದ್ಯಗಳಲ್ಲಿ 1161 ರನ್ ಗಳಿಸಿದ್ದ ಮುಂಬೈ ಇಂಡಿಯನ್ಸ್ ಆಟಗಾರ ರೋಹಿತ್ ಶರ್ಮಾ ಅವರ ದಾಖಲೆಯನ್ನು ಮುರಿದರು. ಚೆನ್ನೈ ವಿರುದ್ಧ 14 ರನ್ ಗಳಿಸುತ್ತಿದ್ದಂತೆ ಕೊಹ್ಲಿ, ರೋಹಿತ್‌ರನ್ನು ಹಿಂದಿಕ್ಕುವಲ್ಲಿ ಯಶಸ್ವಿಯಾದರು.
ಆರ್‌ಸಿಬಿ-ಸಿಎಸ್‌ಕೆ ಮ್ಯಾಚ್ ಹೇಗಿತ್ತು?
ಇನ್ನು ಆರ್‌ಸಿಬಿ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ನಡುವಿನ ಪಂದ್ಯದ ಬಗ್ಗೆ ಹೇಳುವುದಾದರೇ, ತವರಿನ ಅಭಿಮಾನಿಗಳ ಎದುರು ಚಾಂಪಿಯನ್ ಆಟ ಪ್ರದರ್ಶಿಸಿದ ರಜತ್ ಪಾಟೀದಾರ್ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 43 ರನ್ ಅಂತದ ಭರ್ಜರಿ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಗಿದೆ.
ಬೃಹತ್ ಮೊತ್ತ ಕಲೆಹಾಕಿದ ಆರ್‌ಸಿಬಿ
ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಆರ್‌ಸಿಬಿ ದೇವದತ್ ಪಡಿಕ್ಕಲ್ ಹಾಗೂ ಟಿಮ್ ಡೇವಿಡ್ ಸ್ಪೋಟಕ ಅರ್ಧಶತಕ ಹಾಗೂ ಫಿಲ್ ಸಾಲ್ಟ್ ಹಾಗೂ ರಜತ್ ಪಾಟೀದಾರ್ ಮಿಂಚಿನ ಬ್ಯಾಟಿಂಗ್ ನೆರವಿನಿಂದ ಕೇವಲ 3 ವಿಕೆಟ್ ಕಳೆದುಕೊಂಡು 250 ರನ್ ಬಾರಿಸಿತ್ತು.
ಚೆನ್ನೈ ಸೂಪರ್ ಕಿಂಗ್ಸ್‌ಗೆ ಹೀನಾಯ ಸೋಲು
ಇನ್ನು ಗುರಿ ಬೆನ್ನತ್ತಿದ ಚೆನ್ನೈ ಸೂಪರ್ ಕಿಂಗ್ಸ್ 207 ರನ್‌ಗಳಿಗೆ ಸರ್ವಪತನ ಕಂಡಿತು. ಈ ಮೂಲಕ 43 ರನ್ ಅಂತರದ ಹೀನಾಯ ಸೋಲು ಅನುಭವಿಸಿತು. ಈ ಗೆಲುವಿನೊಂದಿಗೆ ಆರ್‌ಸಿಬಿ 4 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದರೆ, ಟೂರ್ನಿಯಲ್ಲಿ ಹ್ಯಾಟ್ರಿಕ್ ಸೋಲು ಅನುಭವಿಸಿದ ಚೆನ್ನೈ ಸೂಪರ್ ಕಿಂಗ್ಸ್ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನಕ್ಕೆ ಜಾರಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

