- Home
- Karnataka Districts
- ಭೀಕರ ಅಪಘಾತದಲ್ಲಿ ಮೃತಪಟ್ಟ ಮೂವರು ಇನ್ಸ್‌ಪೆಕ್ಟರ್‌ಗಳ ಫೋಟೋ ಬಿಡುಗಡೆ ಮಾಡಿದ ಪೊಲೀಸ್ ಇಲಾಖೆ!
ಭೀಕರ ಅಪಘಾತದಲ್ಲಿ ಮೃತಪಟ್ಟ ಮೂವರು ಇನ್ಸ್‌ಪೆಕ್ಟರ್‌ಗಳ ಫೋಟೋ ಬಿಡುಗಡೆ ಮಾಡಿದ ಪೊಲೀಸ್ ಇಲಾಖೆ!
ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ, ಸ್ನೇಹಿತರ ಮದುವೆಗೆ ತೆರಳುತ್ತಿದ್ದ ಮೂವರು ರಿಸರ್ವ್ ಸಬ್ ಇನ್‌ಸ್ಪೆಕ್ಟರ್‌ಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಲಾರಿ ಮತ್ತು ಕಾರಿನ ನಡುವೆ ಸಂಭವಿಸಿದ ಈ ಮುಖಾಮುಖಿ ಡಿಕ್ಕಿಯಲ್ಲಿ ಮೃತಪಟ್ಟವರ ಫೋಟೋ ರಿಲೀಸ್ ಮಾಡಲಾಗಿದೆ.

ಮದುವೆ ಹೊರಟ ಇನ್ಸ್‌ಪೆಕ್ಟರ್‌ಗಳು ಮಸಣ ಸೇರಿದರು
ಚಿತ್ರದುರ್ಗ ಜಿಲ್ಲೆಯಲ್ಲಿ ಇಂದು ಬೆಳ್ಳಂಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತವು ಇಡೀ ಪೊಲೀಸ್ ಇಲಾಖೆಯನ್ನು ಶೋಕಸಾಗರದಲ್ಲಿ ಮುಳುಗಿಸಿದೆ. ಚಳ್ಳಕೆರೆ ತಾಲೂಕಿನ ಹೆಗ್ಗೆರೆ ಬಳಿ ಲಾರಿ ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಡಿಕ್ಕಿಯಲ್ಲಿ ಮೂವರು ರಿಸರ್ವ್ ಸಬ್ ಇನ್‌ಸ್ಪೆಕ್ಟರ್‌ಗಳು (RSI) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಪೊಲೀಸ್ ಇಲಾಖೆಯಿಂದ ಮೃತ ಇನ್ಸ್‌ಪೆಕ್ಟರ್‌ಗಳ ಫೋಟೋ ರಿವೀಲ್ ಮಾಡಲಾಗಿದೆ. ಈ ದುರಂತದಲ್ಲಿ ಮತ್ತಿಬ್ಬರು ಅಧಿಕಾರಿಗಳು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ.
ಇನ್ಸ್‌ಪೆಕ್ಟರ್ ಸಚಿನ್ 32 ವರ್ಷ
ಮೃತರನ್ನು ಮಂಜುನಾಥ್, ಅಂಬರೀಷ್ ಮತ್ತು ಸಚಿನ್ ಎಂದು ಗುರುತಿಸಲಾಗಿದೆ. ಇವರು ರಿಸರ್ವ್ ಸಬ್ ಇನ್‌ಸ್ಪೆಕ್ಟರ್‌ಗಳಾಗಿ ಸೇವೆ ಸಲ್ಲಿಸುತ್ತಿದ್ದರು. ಮೂಲಗಳ ಪ್ರಕಾರ, ಈ ಐವರು ಪೊಲೀಸ್ ಅಧಿಕಾರಿಗಳು ಬೆಂಗಳೂರಿನಿಂದ ಬಳ್ಳಾರಿಯಲ್ಲಿ ನಡೆಯಲಿದ್ದ ಸ್ನೇಹಿತರೊಬ್ಬರ ಮದುವೆ ಸಮಾರಂಭದಲ್ಲಿ ಪಾಲ್ಗೊಳ್ಳಲು ಒಂದೇ ಕಾರಿನಲ್ಲಿ ತೆರಳುತ್ತಿದ್ದರು. ಕಾರು ಹೆಗ್ಗೆರೆ ಬಳಿ ಚಲಿಸುತ್ತಿದ್ದಾಗ ವಿರುದ್ಧ ದಿಕ್ಕಿನಿಂದ ಬಂದ ಲಾರಿಯ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ.
ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಮಂಜುನಾಥ್, ಅಂಬರೀಷ್ ಹಾಗೂ ಸಚಿನ್ ಅವರು ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ. ಅಪಘಾತದ ಭೀಕರತೆ ಎಷ್ಟಿತ್ತೆಂದರೆ, ಮೃತದೇಹಗಳನ್ನು ಕಾರಿನಿಂದ ಹೊರತೆಗೆಯಲು ಪೊಲೀಸರು ಮತ್ತು ಸ್ಥಳೀಯರು ಹರಸಾಹಸ ಪಡಬೇಕಾಯಿತು.
ಅಮರೇಶ್ 25 ವರ್ಷದ ಯುವಕ
ಈ ಅಪಘಾತದಲ್ಲಿ ಪಿಎಸ್ಐ (PSI) ಈಶ್ವರ್ ಮತ್ತು ಆರ್‌ಎಸ್‌ಐ (RSI) ಮಹಾಂತೇಶ್ ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ. ತಕ್ಷಣವೇ ಇವರನ್ನು ಚಿತ್ರದುರ್ಗ ನಗರದ ಹೊರವಲಯದಲ್ಲಿರುವ ಖಾಸಗಿ ಆಸ್ಪತ್ರೆ ಬಸವೇಶ್ವರ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಗಾಯಾಳುಗಳಿಗೆ ತೀವ್ರ ನಿಗಾ ಘಟಕದಲ್ಲಿ (ICU) ಚಿಕಿತ್ಸೆ ನೀಡಲಾಗುತ್ತಿದ್ದು, ಇವರ ಸ್ಥಿತಿ ಕೂಡ ಚಿಂತಾಜನಕವಾಗಿದೆ ಎಂದು ವೈದ್ಯಕೀಯ ಮೂಲಗಳು ತಿಳಿಸಿವೆ.
ಮಂಜುನಾಥ್ 31 ವರ್ಷ
ಘಟನೆ ನಡೆದ ವಿಷಯ ತಿಳಿಯುತ್ತಿದ್ದಂತೆಯೇ ಚಿತ್ರದುರ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ರಂಜಿತ್ ಬಂಡಾರು ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ‘ಮದುವೆ ಕಾರ್ಯಕ್ರಮಕ್ಕೆಂದು ಐವರು ಅಧಿಕಾರಿಗಳು ಬೆಂಗಳೂರಿನಿಂದ ಬಳ್ಳಾರಿಗೆ ತೆರಳುತ್ತಿದ್ದರು. ಈ ವೇಳೆ ಲಾರಿ ಮತ್ತು ಕಾರು ನಡುವೆ ಅಪಘಾತ ಸಂಭವಿಸಿದೆ. ಮೂವರು ಅಧಿಕಾರಿಗಳನ್ನು ನಾವು ಕಳೆದುಕೊಂಡಿದ್ದೇವೆ. ಗಾಯಗೊಂಡವರಿಗೆ ಉತ್ತಮ ಚಿಕಿತ್ಸೆ ನೀಡಲು ವ್ಯವಸ್ಥೆ ಮಾಡಲಾಗಿದೆ’ ಎಂದು ಮಾಹಿತಿ ನೀಡಿದರು.
ಐಮಂಗಲ ಠಾಣೆಯಲ್ಲಿ ಕೇಸ್ ದಾಖಲು
ಈ ಘಟನೆಯು ಐಮಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಕ್ರೈಂ ಸೀನ್ ಮಹಜರು ನಡೆಸಿದ್ದಾರೆ. ಲಾರಿ ಚಾಲಕನ ನಿರ್ಲಕ್ಷ್ಯವೇ ಈ ಅಪಘಾತಕ್ಕೆ ಕಾರಣವೇ ಅಥವಾ ಅತಿವೇಗವೇ ಎಂಬ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಸದ್ಯ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಯುವ ಅಧಿಕಾರಿಗಳ ಅಕಾಲಿಕ ಮರಣವು ಪೊಲೀಸ್ ಇಲಾಖೆಯಲ್ಲಿ ಮೌನ ಆವರಿಸುವಂತೆ ಮಾಡಿದೆ. ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಜಿಲ್ಲೆಯಾದ್ಯಂತ ಘಟನೆಯ ಬಗ್ಗೆ ತೀವ್ರ ಸಂತಾಪ ವ್ಯಕ್ತವಾಗುತ್ತಿದೆ.

