- Home
- Karnataka Districts
- ಶಿಕ್ಷಣ ಸಚಿವರ ತವರಿನಲ್ಲೇ ಸರ್ಕಾರಿ ಶಾಲೆಗೆ ಬೆಂಕಿ ಇಡಲು ಯತ್ನ: ತುಮರಿಯಲ್ಲಿ ಭುಗಿಲೆದ್ದ ಆಕ್ರೋಶ
ಶಿಕ್ಷಣ ಸಚಿವರ ತವರಿನಲ್ಲೇ ಸರ್ಕಾರಿ ಶಾಲೆಗೆ ಬೆಂಕಿ ಇಡಲು ಯತ್ನ: ತುಮರಿಯಲ್ಲಿ ಭುಗಿಲೆದ್ದ ಆಕ್ರೋಶ
ಶಿಕ್ಷಣ ಸಚಿವರ ತವರು ಜಿಲ್ಲೆ ಶಿವಮೊಗ್ಗದಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಗೆ ದುಷ್ಕರ್ಮಿಗಳು ಬೆಂಕಿ ಇಡಲು ಯತ್ನಿಸಿದ್ದಾರೆ. ಕಳೆದ ಎರಡು ತಿಂಗಳಿಂದ ಈ ಭಾಗದಲ್ಲಿ ಸಾರ್ವಜನಿಕ ಆಸ್ತಿಗಳ ಮೇಲೆ ನಿರಂತರ ದಾಳಿ ನಡೆಯುತ್ತಿದ್ದು, ಪೊಲೀಸರ ನಿರ್ಲಕ್ಯಕ್ಕೆ ಗ್ರಾಮಸ್ಥರು ರಸ್ತೆ ತಡೆದು ಪ್ರತಿಭಟನೆ ನಡೆಸಿದರು.

ಸರ್ಕಾರಿ ಶಾಲೆಗೆ ಬೆಂಕಿ
ಶಿವಮೊಗ್ಗ (ನ.13): ರಾಜ್ಯದ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ತವರು ಜಿಲ್ಲೆಯಲ್ಲೇ ಸರ್ಕಾರಿ ಶಾಲೆಯೊಂದಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಲು ಯತ್ನಿಸಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ತುಮರಿ ಸಮೀಪದ ಕೆರೆಕೈ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ತಡರಾತ್ರಿ ದುಷ್ಕರ್ಮಿಗಳು ಬೆಂಕಿ ಇಡಲು ಯತ್ನಿಸಿದ್ದು, ಸಾರ್ವಜನಿಕರಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಶಿಕ್ಷಣ ಸಚಿವರ ಜಿಲ್ಲೆಯಲ್ಲೇ ಶಾಲೆಗಳಿಗೆ ರಕ್ಷಣೆ ಇಲ್ಲದಿದ್ದರೆ ಉಳಿದ ಜಿಲ್ಲೆಗಳ ಕಥೆಯೇನು ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಳಿಗ್ಗೆ ಬೆಳಕಿಗೆ ಬಂದ ಕೃತ್ಯ:
ಶುಕ್ರವಾರ ಬೆಳಿಗ್ಗೆ ಶಿಕ್ಷಕರು ಎಂದಿನಂತೆ ಶಾಲೆ ಬಾಗಿಲು ತೆರೆಯಲು ಬಂದಾಗ ಕಿಡಿಗೇಡಿಗಳ ಈ ಕೃತ್ಯ ಬೆಳಕಿಗೆ ಬಂದಿದೆ. ಶಾಲೆಯ ಆವರಣ ಹಾಗೂ ಕಟ್ಟಡಕ್ಕೆ ಬೆಂಕಿ ಹಚ್ಚಲು ಯತ್ನಿಸಿದ ಕುರುಹುಗಳು ಕಂಡುಬಂದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ. ವಿಷಯ ತಿಳಿಯುತ್ತಿದ್ದಂತೆ ನೂರಾರು ಗ್ರಾಮಸ್ಥರು ಸ್ಥಳದಲ್ಲಿ ಜಮಾಯಿಸಿ ಆಕ್ರೋಶ ವ್ಯಕ್ತಪಡಿಸಿದರು.
ಎರಡು ತಿಂಗಳಿಂದ ನಿರಂತರ ವಿಧ್ವಂಸಕ ಕೃತ್ಯ:
ಸಾಗರ ತಾಲೂಕಿನ ತುಮರಿ ಹಾಗೂ ಸುತ್ತಮುತ್ತಲ ಭಾಗಗಳಲ್ಲಿ ಕಳೆದ ಎರಡು ತಿಂಗಳಿಂದ ಇಂತಹ ಸರಣಿ ಕಿಡಿಗೇಡಿತನಗಳು ನಿರಂತರವಾಗಿ ನಡೆಯುತ್ತಿವೆ. ಕಳೆದ ತಿಂಗಳಷ್ಟೇ ನವೀಕರಣಗೊಂಡಿದ್ದ ಶಾಂತವೇರಿ ಗೋಪಾಲಗೌಡ ರಂಗಮಂದಿರಕ್ಕೆ ದುಷ್ಕರ್ಮಿಗಳು ಬೆಂಕಿ ಹಚ್ಚಿ ಹಾನಿ ಮಾಡಿದ್ದರು.
ಇದರ ಬೆನ್ನಲ್ಲೇ ದೇವಸ್ಥಾನಗಳು ಹಾಗೂ ಸಾರ್ವಜನಿಕ ಆಸ್ತಿಪಾಸ್ತಿಗಳ ಮೇಲೆ ನಿರಂತರ ದಾಳಿಗಳು ನಡೆಯುತ್ತಿವೆ. ಇಷ್ಟೆಲ್ಲಾ ನಡೆಯುತ್ತಿದ್ದರೂ ಪೊಲೀಸರು ಆರೋಪಿಗಳನ್ನು ಪತ್ತೆಹಚ್ಚುವಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ ಎಂದು ಗ್ರಾಮಸ್ಥರು ಗಂಭೀರ ಆರೋಪ ಮಾಡಿದ್ದಾರೆ.
ರಾಷ್ಟ್ರೀಯ ಹೆದ್ದಾರಿ ತಡೆದು ಟೈರ್ಗೆ ಬೆಂಕಿ
ಪೊಲೀಸರ ನಿಷ್ಕ್ರಿಯತೆಯನ್ನು ಖಂಡಿಸಿ ಒಳಗೆರೆ ಹಾಗೂ ತುಮರಿ ಗ್ರಾಮಸ್ಥರು ರಸ್ತೆಗಿಳಿದು ಉಗ್ರ ಪ್ರತಿಭಟನೆ ಆರಂಭಿಸಿದ್ದಾರೆ. ಸಾಗರ–ಸಿಗಂದೂರು–ಮರಕುಟಕ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ (NH-369E) ತಡೆದು, ರಸ್ತೆಯಲ್ಲೇ ಟೈರ್ಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು. ಹೆದ್ದಾರಿ ದಿಗ್ಬಂಧನದಿಂದಾಗಿ ಸಿಗಂದೂರು ಚೌಡೇಶ್ವರಿ ಕ್ಷೇತ್ರಕ್ಕೆ ತೆರಳುವ ಭಕ್ತರ ವಾಹನಗಳು ಸೇರಿದಂತೆ ನೂರಾರು ವಾಹನಗಳ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡು ಬಿಗುವಿನ ವಾತಾವರಣ ನಿರ್ಮಾಣವಾಯಿತು.
ಪೊಲೀಸ್ ಸಂಧಾನ ವಿಫಲ:
ಸ್ಥಳಕ್ಕೆ ಧಾವಿಸಿದ ಕಾರ್ಗಲ್ ಠಾಣಾ ಪೊಲೀಸರು ಗ್ರಾಮಸ್ಥರ ಮನವೊಲಿಸಲು ಯತ್ನಿಸಿದರಾದರೂ, ಪ್ರತಿಭಟನಾಕಾರರು ಅದಕ್ಕೆ ಸೊಪ್ಪು ಹಾಕಲಿಲ್ಲ. 'ಸಾಗರ ತಾಲೂಕಿನಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದಿದೆ. ಕಳೆದ ಎರಡು ತಿಂಗಳಿಂದ ಸಾರ್ವಜನಿಕ ಆಸ್ತಿಗಳಿಗೆ ಬೆಂಕಿ ಇಡುತ್ತಿದ್ದರೂ ಪೊಲೀಸರು ಕಣ್ಮುಚ್ಚಿ ಕುಳಿತಿದ್ದಾರೆ. ಕೂಡಲೇ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP), ಸ್ಥಳೀಯ ಶಾಸಕರು ಹಾಗೂ ತಹಶೀಲ್ದಾರ್ ಸ್ಥಳಕ್ಕೆ ಬರಬೇಕು' ಎಂದು ಪ್ರತಿಭಟನಾಕಾರರು ಪಟ್ಟು ಹಿಡಿದಿದ್ದಾರೆ. ದುಷ್ಕರ್ಮಿಗಳನ್ನು ಹೆಡೆಮುರಿ ಕಟ್ಟುವವರೆಗೂ ಹೋರಾಟ ಹಿಂಪಡೆಯುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.













