Uttara Kannada: ಶಾಲೆಯಲ್ಲಿ ಕುಡಿಯುವ ನೀರು ಒದಗಿಸಲು ರಾಜ್ಯ ಹೆದ್ದಾರಿ ತಡೆದು ಪ್ರತಿಭಟಿಸಿದ ವಿದ್ಯಾರ್ಥಿಗಳು
ಕಾರವಾರ (ಫೆ.24): ಉತ್ತರಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನ ಸಿಂಗನಳ್ಳಿ ಗ್ರಾಮದ ಸರಕಾರಿ ಪ್ರಾಥಮಿಕ ಶಾಲೆ ಮಕ್ಕಳು ಸಮರ್ಪಕವಾಗಿ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹಿಸಿ ಕೊಡಪಾನ ಹಿಡಿದುಕೊಂಡು ಶಿರಸಿ- ಹುಬ್ಬಳ್ಳಿ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ್ದಾರೆ.
ಕಳೆದ ನಾಲ್ಕು ದಿನಗಳಿಂದ ಶಾಲೆಗೆ ಸಮರ್ಪಕವಾಗಿ ನೀರು ಪೂರೈಕೆಯಾಗದ ಕಾರಣ ಮಕ್ಕಳಿಗೆ ಕುಡಿಯಲು, ಬಿಸಿಯೂಟ ಹಾಗೂ ಅಗತ್ಯತೆಗಳಿಗೆ ನೀರೇ ಇಲ್ಲದಂತಾಗಿದೆ.
ಪ್ರತೀ 15ದಿನಕ್ಕೊಮ್ಮೆ ಈ ಸಮಸ್ಯೆ ಮರುಕಳಿಸುತ್ತಿದ್ದು, ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದರೂ ಯಾವುದೇ ಪ್ರಯೋಜನವಾಗಿಲ್ಲ.
ಈ ಕಾರಣದಿಂದ ವಿದ್ಯಾರ್ಥಿಗಳು ರಸ್ತೆ ತಡೆ ನಡೆಸಿ ಬೇಕೇ ಬೇಕು ನೀರು ಬೇಕು ಅಂತಾ ಘೋಷಣೆ ಕೂಗುವ ಮೂಲಕ ನೀರಿಗಾಗಿ ಪ್ರತಿಭಟಿಸಿದ್ದಾರೆ.
ಸ್ಥಳಕ್ಕೆ ಬಂದ ಗ್ರಾಮ ಪಂಚಾಯತ್ ಪಿಡಿಒ ಶಾಲಾ ಮಕ್ಕಳಿಗಾಗಿ ಟ್ಯಾಂಕರ್ ಮೂಲಕ ನೀರು ಪೂರೈಸಿದ್ದಾರೆ. ಅಲ್ಲದೇ, ಮುಂದಕ್ಕೆ ನೀರಿನ ಸಮಸ್ಯೆ ಉಂಟಾಗದಂತೆ ಸಮಸ್ಯೆ ಬಗೆಹರಿಸಿಕೊಡುವುದಾಗಿ ಆಶ್ವಾಸನೆ ನೀಡಿದ್ದಾರೆ.