ಬೇಗನೇ ಪ್ರಜ್ವಲ್ ರೇವಣ್ಣ ಬಂಧಿಸಿ: ಎಸ್ಐಟಿಗೆ ಸಿಎಂ ಸಿದ್ದರಾಮಯ್ಯ ತಾಕೀತು
ಸಿಬಿಐ ಬ್ಲೂ ಕಾರ್ನರ್ ನೋಟಿಸ್ ಹೊರಡಿಸುವ ಸಾಧ್ಯತೆಯಿದೆ. ತನಿಖೆಗೆ ವೇಗ ಸಿಗಲಿದ್ದು, ವಿಮಾನ ನಿಲ್ದಾಣಗಳಿಂದ ಮಾಹಿತಿ ಸಿಕ್ಕ ಕೂಡಲೇ ಪ್ರಜ್ವಲ್ ರೇವಣ್ಣ ಅವರನ್ನು ಬಂಧಿಸುವುದಾಗಿ ಎಸ್ಐಟಿ ಅಧಿಕಾರಿಗಳು ಮುಖ್ಯಮಂತ್ರಿಗಳಿಗೆ ಮಾಹಿತಿ ನೀಡಿರುವುದಾಗಿ ತಿಳಿದುಬಂದಿದೆ.
ಬೆಂಗಳೂರು (ಮೇ.05): ಪ್ರಜ್ವಲ್ ರೇವಣ್ಣ ವಿರುದ್ಧ ತನಿಖೆ ನಡೆಸುತ್ತಿರುವ ಎಸ್ಐಟಿ ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಹತ್ವದ ಸಭೆ ನಡೆಸಿದ್ದು, ‘ಪ್ರಜ್ವಲ್ ರೇವಣ್ಣ ಬಂಧನಕ್ಕೆ ಕೂಡಲೇ ಕ್ರಮ ಕೈಗೊಳ್ಳಬೇಕು. ಪ್ರಕರಣದಲ್ಲಿ ಭಾಗಿಯಾದವರ ವಿರುದ್ಧ ನಿರ್ದಾಕ್ಷಿಣ್ಯ ಹಾಗೂ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು’ ಎಂದು ಖಡಕ್ ಸೂಚನೆ ನೀಡಿದ್ದಾರೆ.
ಈ ವೇಳೆ ಸಿಬಿಐ ಬ್ಲೂ ಕಾರ್ನರ್ ನೋಟಿಸ್ ಹೊರಡಿಸುವ ಸಾಧ್ಯತೆಯಿದೆ. ತನಿಖೆಗೆ ವೇಗ ಸಿಗಲಿದ್ದು, ವಿಮಾನ ನಿಲ್ದಾಣಗಳಿಂದ ಮಾಹಿತಿ ಸಿಕ್ಕ ಕೂಡಲೇ ಪ್ರಜ್ವಲ್ ರೇವಣ್ಣ ಅವರನ್ನು ಬಂಧಿಸುವುದಾಗಿ ಎಸ್ಐಟಿ ಅಧಿಕಾರಿಗಳು ಮುಖ್ಯಮಂತ್ರಿಗಳಿಗೆ ಮಾಹಿತಿ ನೀಡಿರುವುದಾಗಿ ತಿಳಿದುಬಂದಿದೆ.
ಎಸ್ಐಟಿ ಮುಖ್ಯಸ್ಥರಾದ ಬಿ.ಕೆ. ಸಿಂಗ್ ನೇತೃತ್ವದ ಅಧಿಕಾರಿಗಳು ಶನಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಪ್ರಕರಣದ ತನಿಖೆ ಬಗ್ಗೆ ಮಾಹಿತಿ ನೀಡಿದರು. ಈ ವೇಳೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಪ್ರಜ್ವಲ್ ನಾಪತ್ತೆಯಾಗಿದ್ದು ಲುಕ್ ಔಟ್ ನೋಟಿಸ್ ಜೊತೆಗೆ ತೀವ್ರ ಶೋಧ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ವಿವರಿಸಿದರು.
ಇದಕ್ಕೆ ಸಿದ್ದರಾಮಯ್ಯ ಅವರು, ಪ್ರಜ್ವಲ್ ಬಂಧನಕ್ಕೆ ಕೂಡಲೇ ಕ್ರಮ ಕೈಗೊಳ್ಳಬೇಕು. ಪ್ರಕರಣದಲ್ಲಿ ಭಾಗಿಯಾದವರ ವಿರುದ್ಧ ನಿರ್ದಾಕ್ಷಿಣ್ಯ ಹಾಗೂ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಈ ವಿಚಾರದಲ್ಲಿ ನಿರ್ಲಕ್ಷ್ಯ ಹಾಗೂ ವಿಳಂಬ ಧೋರಣೆ ಸಹಿಸಲಾಗದು ಎಂದು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು ಎಂದು ಮೂಲಗಳು ತಿಳಿಸಿವೆ.
ಈ ವೇಳೆ ಸೂಕ್ತ ಕ್ರಮಗಳೊಂದಿಗೆ ಪ್ರಜ್ವಲ್ ಬಂಧನಕ್ಕೆ ಮುಂದಾಗುತ್ತೇವೆ. ಸಿಬಿಐ ಬ್ಲೂಕಾರ್ನರ್ ನೋಟಿಸ್ ಹೊರಡಿಸುವ ಸಾಧ್ಯತೆ ಇದೆ. ವಿಮಾನ ನಿಲ್ದಾಣಗಳಿಂದ ಮಾಹಿತಿ ಸಿಕ್ಕ ಕೂಡಲೇ ಬಂಧಿಸಿ ಕರೆ ತರುವುದಾಗಿ ಅಧಿಕಾರಿಗಳು ತಿಳಿಸಿದರು ಎನ್ನಲಾಗಿದೆ.