ಜಗಳಗಂಟ ಸಮ್ಮಿಶ್ರ ಸರ್ಕಾರಗಳಿಂದ ರಾಜ್ಯಕ್ಕೆ ಒಳ್ಳೆಯದಾಗಿಲ್ಲ: ಡಿಸಿಎಂ ಅಶ್ವತ್ಥನಾರಾಯಣ
ಬೆಂಗಳೂರು(ಅ.28): ರಾಜ್ಯದಲ್ಲಿ ಸ್ಥಿರ ಸರ್ಕಾರ ಹಾಗೂ ಸದೃಢ ನಾಯಕತ್ವ ಕೊಡುವ ಶಕ್ತಿ ಬಿಜೆಪಿಗೆ ಮಾತ್ರ ಇದೆ. ಸ್ವಾರ್ಥ ರಾಜಕಾರಣ ಮಾಡುವ ಜಗಳಗಂಟ ಸಮ್ಮಿಶ್ರ ಸರ್ಕಾರಗಳಿಂದ ರಾಜ್ಯಕ್ಕೆ ಒಳ್ಳೆಯದಾಗಿಲ್ಲ ಎಂದು ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದ್ದಾರೆ.
ಮಂಗಳವಾರ ರಾಜರಾಜೇಶ್ವರಿ ನಗರದ ಉಪಚುನಾವಣೆ ಹಿನ್ನೆಲೆಯಲ್ಲಿ ವಕೀಲರೊಂದಿಗೆ ಸಂವಾದ ನಡೆಸಿದ ಅವರು, ಬೆಂಗಳೂರು ಮತ್ತು ರಾಜ್ಯದ ಸಮಗ್ರ ಅಭಿವೃದ್ಧಿಗೆ ಕಳೆದ ಒಂದು ವರ್ಷದಲ್ಲಿ ಬಹಳಷ್ಟು ವೇಗ ಸಿಕ್ಕಿದೆ ಎಂಬುದನ್ನು ಯಾರೂ ಅಲ್ಲಗಳೆಯುವಂತಿಲ್ಲ. ಸರ್ಕಾರ ಎಲ್ಲ ಕ್ಷೇತ್ರಗಳಲ್ಲೂ ಉತ್ತಮವಾಗಿ ಕೆಲಸ ಮಾಡಿದೆ. ಸರ್ಕಾರಕ್ಕೆ ಮತ್ತಷ್ಟು ಬಲ ತುಂಬಲು ಮುನಿರತ್ನ ಅವರನ್ನು ಗೆಲ್ಲಿಸಿ ಎಂದು ಮನವಿ ಮಾಡಿದರು.
ಸಮ್ಮಿಶ್ರ ಸರ್ಕಾರ ಇದ್ದಾಗ ರಾಜ್ಯದಲ್ಲಿ ರಾಜಕೀಯ ಮತ್ತು ನಾಯಕತ್ವದ ಶೂನ್ಯತೆ ಉಂಟಾಗಿತ್ತು. ಆದರೆ, ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಸುಧಾರಣೆಗಳ ಪರ್ವವೇ ಆರಂಭವಾಯಿತು. ಭೂ ಸುಧಾರಣೆ ತಿದ್ದುಪಡಿ ಕಾಯ್ದೆ, ಎಪಿಎಂಸಿ ತಿದ್ದುಪಡಿ ಕಾಯ್ದೆ, ಕೈಗಾರಿಕಾ ಸ್ಥಾಪನೆಗೆ ಅಡ್ಡಿಗಳನ್ನು ನಿವಾರಿಸಿದ್ದು, ಕೌಶಲ್ಯಾಧಾರಿತ ಉದ್ಯೋಗ ಸೃಷ್ಟಿಗೆ ಒತ್ತು, ಶಿಕ್ಷಣ ಕ್ಷೇತ್ರದಲ್ಲಿ ಆಮೂಲಾಗ್ರ ಸುಧಾರಣೆ, ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ಕ್ರಮ ಹೀಗೆ ಅನೇಕ ಸುಧಾರಣಾ ಹೆಜ್ಜೆಗಳನ್ನು ಇಡಲಾಗಿದೆ. ಈಗ ರಾಜ್ಯವೂ ಸರಿಯಾದ ದಿಕ್ಕಿನಲ್ಲಿ ಮುನ್ನೆಡೆಯುತ್ತಿದ್ದು, ಕೋವಿಡ್ ಸಂಕಷ್ಟದ ನಡುವೆಯೂ ಅಭಿವೃದ್ಧಿ ಪಥದಲ್ಲಿ ಸಾಗುತ್ತಿದೆ ಎಂದು ತಿಳಿಸಿದರು.
ಬೆಂಗಳೂರು ಅಭಿವೃದ್ಧಿ ವಿಚಾರದಲ್ಲಿಯೂ ಬಿಜೆಪಿ ಸರ್ಕಾರ ಸ್ಪಷ್ಟ ದಿಕ್ಕಿನಲ್ಲಿ ಕೆಲಸ ಮಾಡುತ್ತಿದೆ. ಬಿಬಿಎಂಪಿ ಆಡಳಿತ ವ್ಯಾಪ್ತಿಯಲ್ಲಿ ಅನೇಕ ಅಭಿವೃದ್ಧಿ ಕೆಲಸಗಳನ್ನು ಹಮ್ಮಿಕೊಳ್ಳಲಾಗಿದೆ. ರಾಜಕೀಯಕ್ಕೆ ಅತೀತವಾಗಿ ಎಲ್ಲ ಪ್ರದೇಶಗಳನ್ನು ಸಮಾನವಾಗಿ ಅಭಿವೃದ್ಧಿ ಮಾಡಲಾಗುತ್ತಿದೆ. ಹಿಂದಿನ ಸರ್ಕಾರಗಳು ನೂರಾರು ಕೋಟಿ ರು.ಗಳನ್ನು ಖರ್ಚು ಮಾಡಿವೆ. ಆದರೆ ಸಮಸ್ಯೆಗಳು ಹಾಗೆಯೇ ಉಳಿದಿವೆ. ಸುಸ್ಥಿರ ಮಾನದಂಡದೊಂದಿಗೆ ಸಮಸ್ಯೆಗಳನ್ನು ಬಗೆಹರಿಸಬೇಕು. ಬಿಜೆಪಿ ಸರ್ಕಾರ ಕೆಲಸ ಮಾಡುತ್ತಿರುವುದು ಹೀಗೆ ಎಂದು ಅವರು ಹೇಳಿದರು.
ಬಿಜೆಪಿ ಅಭ್ಯರ್ಥಿ ಮುನಿರತ್ನ, ಪಕ್ಷದ ಕಾನೂನು ವಿಭಾಗದ ಸಂಚಾಲಕ ವಿಠ್ಠಲಗೌಡ, ಮುಖಂಡರಾದ ರಾಜಣ್ಣ, ವಿವೇಕ್ ರೆಡ್ಡಿ, ಯೋಗೇಂದ್ರ, ಪ್ರಕಾಶಪ್ಪ, ಮಂಜುಳಾ ಸೇರಿದಂತೆ ಅನೇಕರು ಈ ಸಂದರ್ಭದಲ್ಲಿ ಹಾಜರಿದ್ದರು.