Lok Sabha Election 2024: ಬೆಳಗಾವಿ ಜೊತೆಗೆ 30 ವರ್ಷಗಳಿಂದ ಸಂಬಂಧ ಹೊಂದಿದ್ದೇನೆ: ಜಗದೀಶ್ ಶೆಟ್ಟರ್
ಈ ಬಾರಿ ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಮಂತ್ರಿಯನ್ನಾಗಿಸಲು ಎಲ್ಲರೂ ಕೈಜೋಡಿಸಿ, ಆರ್ಶೀವದಿಸಬೇಕು ಎಂದು ಬೆಳಗಾವಿ ಬಿಜೆಪಿ ಅಭ್ಯರ್ಥಿ, ಮಾಜಿ ಸಿಎಂ ಜಗದೀಶ್ ಶೆಟ್ಟರ್ ವಿಶ್ವಾಸ ವ್ಯಕ್ತಪಡಿಸಿದರು.
ಬೆಳಗಾವಿ (ಏ.13): ಬೆಳಗಾವಿಯಲ್ಲಿ ಈ ಬಾರಿಯೂ ಬಿಜೆಪಿ ನೂರಕ್ಕೆ ನೂರರಷ್ಟು ಗೆದ್ದೆ ಗೆಲ್ಲುತ್ತದೆ ಎಂದು ಬೆಳಗಾವಿ ಬಿಜೆಪಿ ಅಭ್ಯರ್ಥಿ, ಮಾಜಿ ಸಿಎಂ ಜಗದೀಶ್ ಶೆಟ್ಟರ್ ವಿಶ್ವಾಸ ವ್ಯಕ್ತಪಡಿಸಿದರು. ಇಲ್ಲಿನ ಸದಾಶಿವ ನಗರದ ಲಕ್ಷ್ಮೀ ಕಾಂಪ್ಲೆಕ್ಸ್‌ನಲ್ಲಿ ಬಿಜೆಪಿ ಮಾಧ್ಯಮ ವಿಭಾಗದ ಕಚೇರಿ ಉದ್ಘಾಟಿಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಕ್ಷೇತ್ರದಾದ್ಯಂತ ಹೆಚ್ಚಿನ ಪರಿಣಾಮಕಾರಿ ಪ್ರಚಾರ ನಡೆಯುತ್ತಿದ್ದು, ಎಲ್ಲೆಡೆ ಬಿಜೆಪಿಗೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ.
ಚಾ ಪೇ ಚರ್ಚೆ ಮಾಡಿ ಮತದಾರರ ಸಮಸ್ಯೆ ಆಲಿಸಲಾಗುತ್ತಿದೆ. ಅಲ್ಲದೇ, ಪ್ರತಿಯೊಂದು ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಕಾರ್ಯಕರ್ತರ ಸಮಾವೇಶಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಈ ಬಾರಿ ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಮಂತ್ರಿಯನ್ನಾಗಿಸಲು ಎಲ್ಲರೂ ಕೈಜೋಡಿಸಿ, ಆರ್ಶೀವದಿಸಬೇಕು ಎಂದು ಮನವಿ ಮಾಡಿದರು.
ಬೆಳಗಾವಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ನೂರಕ್ಕೆ ನೂರರಷ್ಟು ಗೆಲುವು ಶತಸಿದ್ಧವಾಗಿದೆ. ಬೆಳಗಾವಿ ಅಭಿವೃದ್ಧಿಗೆ ನಾನು ಸಾಕಷ್ಟು ಶ್ರಮಿಸಿದ್ದೇನೆ. ಬೆಳಗಾವಿ ಜೊತೆಗೆ 30 ವರ್ಷಗಳಿಂದ ಸಂಬಂಧ ಹೊಂದಿದ್ದೇನೆ. ಆದರೆ, ಕಾಂಗ್ರೆಸ್ ನನ್ನ ವಿರುದ್ಧ ಮಾಡುತ್ತಿರುವ ಆರೋಪಿಗಳಲ್ಲಿ ಯಾವುದೇ ಸತ್ಯಾಂಶ ಇಲ್ಲ. ಬೆಳಗಾವಿ ಜನಪ್ರತಿನಿಧಿಯಾಗಿ ದಿನದ 24 ಗಂಟೆ ಕಾಲ ಕೆಲಸ ಮಾಡುತ್ತೇನೆ ಎಂದು ಭರವಸೆ ನೀಡಿದರು.
ಏ. 17 ರಂದು ನಾಮಪತ್ರ ಸಲ್ಲಿಕೆ: ಏ.17 ರಂದು ಅಪಾರ ಬಿಜೆಪಿ ಕಾರ್ಯಕರ್ತರು, ಬೆಂಬಲಿಗರೊಂದಿಗೆ ಬೃಹತ್ ಮೆರವಣಿಗೆ ಮೂಲಕ ತೆರಳಿ, ಜಿಲ್ಲಾ ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಸಲಾಗುವುದು. ನಾಮಪತ್ರ ಸಲ್ಲಿಸುವ ವೇಳೆ ಮಾಜಿ ಸಿಎಂ ಯಡಿಯೂರಪ್ಪ ಸೇರಿದಂತೆ ಮತ್ತಿತರ ನಾಯಕರು ಪಾಲ್ಗೊಳ್ಳುವರು. ಎಲ್ಲಿಂದ ಮೆರವಣಿಗೆ ಆರಂಭಿಸಬೇಕು ಎನ್ನುವುದರ ಕುರಿತು ಇನ್ನು ತೀರ್ಮಾನ ಮಾಡಿಲ್ಲ. ಅಂದಿನ ಮೆರವಣಿಗೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಬಿಜೆಪಿ ಕಾರ್ಯಕರ್ತರು ಪಾಲ್ಗೊಳ್ಳಬೇಕು ಎಂದು ಶೆಟ್ಟರ್ ಮನವಿ ಮಾಡಿದರು.
ಲೋಕಸಭಾ ಚುನಾವಣೆ ರಾಷ್ಟ್ರೀಯತೆ , ನಾಯಕತ್ವದ ಆಧಾರದ ಮೇಲೆಯೇ ನಡೆಯುತ್ತದೆ. ಈ ಚುನಾವಣೆಯಲ್ಲಿ ಸ್ಥಳೀಯ ವಿಚಾರ ನಡೆಯಲ್ಲ. ಜಾತಿ ಪ್ರಭಾವ ಬೀರಲ್ಲ. ಜಾತಿಯನ್ನು ಮೀರಿ ದೇಶದ ಭದ್ರತೆಯ ವಿಚಾರದ ಮೇಲೆ ಈ ಚುನಾವಣೆ ನಡೆಯುತ್ತದೆ. ಜಾತಿ ರಾಜಕಾರಣದ ಬಗ್ಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಹೇಳಿದರು.
ಬೆಳಗಾವಿ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ, ಕೇಂದ್ರ ಸಚಿವ ನಿತಿನ ಗಡ್ಕರಿ, ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಸೇರಿದಂತೆ ರಾಷ್ಟ್ರೀಯ ನಾಯಕರಿಗೆ ಆಗಮಿಸುವಂತೆ ಕೋರಲಾಗಿದೆ. ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರಿಗೂ ಕೂಡ ಪ್ರಚಾರಕ್ಕೆ ಆಗಮಿಸುವಂತೆ ಕೋರಲಾಗಿದ್ದು, ಅವರು ಕೂಡ ಕ್ಷೇತ್ರಕ್ಕೆ ಆಗಮಿಸಿ, ಬಿಜೆಪಿ ಪರವಾಗಿ ಪ್ರಚಾರ ಕಾರ್ಯ ಕೈಗೊಳ್ಳಲಿದ್ದಾರೆ ಎಂದು ಹೇಳಿದರು.