- Home
- News
- State
- Puneeth Rajkumar ಸಮಾಧಿಗೆ ನಮಿಸಿದ 'ಕಾಕ್ರೋಚ್ ಜನತಾ ಪಾರ್ಟಿ'! ಪ್ರತಿಭಟನೆಯಲ್ಲಿ ಪ್ರಕಾಶ್ ರಾಜ್ ಸಾಥ್!
Puneeth Rajkumar ಸಮಾಧಿಗೆ ನಮಿಸಿದ 'ಕಾಕ್ರೋಚ್ ಜನತಾ ಪಾರ್ಟಿ'! ಪ್ರತಿಭಟನೆಯಲ್ಲಿ ಪ್ರಕಾಶ್ ರಾಜ್ ಸಾಥ್!
'ಕಾಕ್ರೋಚ್ ಜನತಾ ಪಾರ್ಟಿ' ಬೆಂಗಳೂರಿನಲ್ಲಿ ರಾಜಕೀಯ ಸಂಚಲನ ಮೂಡಿಸಿದೆ. ಪುನೀತ್ ರಾಜ್‌ಕುಮಾರ್ ಸಮಾಧಿಗೆ ನಮನ ಸಲ್ಲಿಸಿದ ನಂತರ, ಫ್ರೀಡಂ ಪಾರ್ಕ್‌ನಲ್ಲಿ ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ ನಡೆಸಿತು. ಈ ಹೋರಾಟಕ್ಕೆ ನಟ ಪ್ರಕಾಶ್ ರಾಜ್ ಸೇರಿದಂತೆ ಹಲವರು ಬೆಂಬಲಿಸಿದರು.

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ಸಂಚಲನ ಮೂಡಿಸಿದೆ. ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಇಂದು ಬೆಳಿಗ್ಗೆ ಕಂಠೀರವ ಸ್ಟುಡಿಯೋದಲ್ಲಿರುವ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಸಮಾಧಿಗೆ ಭೇಟಿ ನೀಡಿ ಪುಷ್ಪ ನಮನ ಸಲ್ಲಿಸಿದರು. ಬಳಿಕ ಸಂಜೆ ಫ್ರೀಡಂ ಪಾರ್ಕ್‌ನಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ ನಡೆಸುವ ಮೂಲಕ ರಾಜಕೀಯ ರಣಕಹಳೆ ಮೊಳಗಿಸಿದರು.
ಅಪ್ಪು ಸಮಾಧಿಗೆ ಭೇಟಿ:
ಕಾಕ್ರೋಚ್ ಜನತಾ ಪಾರ್ಟಿಯ ವಕ್ತಾರ ಸೌರವ್ ದಾಸ್ ನೇತೃತ್ವದಲ್ಲಿ ಪಕ್ಷದ ಸದಸ್ಯರು ಪುನೀತ್ ರಾಜ್ ಕುಮಾರ್ ಅವರ ಸಮಾಧಿಗೆ ಭೇಟಿ ನೀಡಿದರು. ಸಮಾಧಿಗೆ ಹೂಗುಚ್ಛ ಅರ್ಪಿಸಿ ಗೌರವ ಸಲ್ಲಿಸಿದ ಸೌರವ್ ದಾಸ್, ಪುನೀತ್ ಅವರ ಸಾಮಾಜಿಕ ಕಾರ್ಯಗಳು ನಮಗೆ ಸದಾ ಸ್ಫೂರ್ತಿ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಪಕ್ಷದ ನೂರಾರು ಬೆಂಬಲಿಗರು ಉಪಸ್ಥಿತರಿದ್ದರು.
ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆಯ ಕಿಚ್ಚು:
ಸಮಾಧಿ ಭೇಟಿಯ ನಂತರ ಕಾಕ್ರೋಚ್ ಜನತಾ ಚಳವಳಿ ವತಿಯಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ ಆಯೋಜಿಸಲಾಗಿತ್ತು. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಈ ಪ್ರತಿಭಟನೆ ನಡೆಸಲಾಯಿತು. ದೇಶದಲ್ಲಿ ಇತ್ತೀಚೆಗೆ ನಡೆದ ಶೈಕ್ಷಣಿಕ ಅಕ್ರಮಗಳು ಮತ್ತು ಪರೀಕ್ಷಾ ಹಗರಣಗಳನ್ನು ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಲಾಯಿತು.
ಚಿತ್ರರಂಗದ ಗಣ್ಯರ ಬೆಂಬಲ:
ಈ ಪ್ರತಿಭಟನೆಯಲ್ಲಿ ಬಹುಭಾಷಾ ನಟ ಪ್ರಕಾಶ್ ರಾಜ್ ಭಾಗವಹಿಸಿ ಕೇಂದ್ರ ಸರ್ಕಾರದ ವೈಫಲ್ಯಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ನಟ ಕಿರಣ್ ಶ್ರೀನಿವಾಸ್ ಕೂಡ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ತಮ್ಮ ಬೆಂಬಲ ಸೂಚಿಸಿದರು. ಪ್ರತಿಭಟನೆಯಲ್ಲಿ ASIA ವಿದ್ಯಾರ್ಥಿ ಸಂಘಟನೆ ಸೇರಿದಂತೆ ವಿವಿಧ ವಿದ್ಯಾರ್ಥಿ ಸಂಘಟನೆಗಳ ನೂರಾರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
‘ಶಿಕ್ಷಣ ಕ್ಷೇತ್ರದಲ್ಲಿ ನಡೆಯುತ್ತಿರುವ ಅನ್ಯಾಯಗಳನ್ನು ಸಹಿಸಲು ಸಾಧ್ಯವಿಲ್ಲ. ಜವಾಬ್ದಾರಿ ಹೊತ್ತು ಸಚಿವ ಧರ್ಮೇಂದ್ರ ಪ್ರಧಾನ್ ಅವರು ತಕ್ಷಣ ರಾಜೀನಾಮೆ ನೀಡಬೇಕು’ ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು. ಕಾಕ್ರೋಚ್ ಜನತಾ ಪಾರ್ಟಿಯ ಕಾರ್ಯಕರ್ತರ ಈ ಪ್ರತಿಭಟನೆಯಿಂದಾಗಿ ಫ್ರೀಡಂ ಪಾರ್ಕ್ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

