ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸಿಎಂ ಬೊಮ್ಮಾಯಿ, ಬಿಎಸ್‌ವೈ
ತಿರುಪತಿ(ಆ.19): ತಮ್ಮನ್ನು ರಾಷ್ಟ್ರೀಯ ಬಿಜೆಪಿ ಸಂಸದೀಯ ಮಂಡಳಿ ಹಾಗೂ ಚುನಾವಣಾ ಸಮಿತಿ ಸದಸ್ಯರನ್ನಾಗಿ ನೇಮಿಸಿದ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು(ಶುಕ್ರವಾರ) ಸಿಎಂ ಬಸವರಾಜ ಬೊಮ್ಮಾಯಿ ಜತೆ ತಿರುಪತಿ ತಿಮ್ಮಪ್ಪನ ದರ್ಶನ ಪಡೆದಿದ್ದಾರೆ.
ತಿಮ್ಮಪ್ಪನ ದರ್ಶನ ಪಡೆದ ಬಳಿಕ ಸಿಎಂ ಹಾಗೂ ಮಾಜಿ ಸಿಎಂ ಬಿಎಸ್‌ವೈ ತಿರುಮಲದಲ್ಲಿ ನಿರ್ಮಾಣವಾಗುತ್ತಿರುವ ಕರ್ನಾಟಕ ರಾಜ್ಯದ ನೂತನ ವಸತಿ ಗೃಹ ಕಟ್ಟಡ ನಿರ್ಮಾಣ ಕಾಮಗಾರಿಯನ್ನು ವೀಕ್ಷಿಸಿ ಪರಿಶೀಲನೆ ನಡೆಸಿದ್ದಾರೆ.
ತ್ವರಿತಗತಿಯಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸಿ, ಜನರಿಗೆ ಈ ಕಟ್ಟಡ ಬಳಕೆಗೆ ಅನುಕೂಲ ಮಾಡಿಕೊಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ ಅವರು ಸೂಚನೆ ನೀಡಿದ್ದಾರೆ. ಈ ಸಂದರ್ಭದಲ್ಲಿ ಕಂದಾಯ ಸಚಿವ ಆರ್. ಅಶೋಕ್, ಬಿಡಿಎ ಅಧ್ಯಕ್ಷ ಎಸ್. ಆರ್. ವಿಶ್ವನಾಥ್ ಮತ್ತು ಇತರರು ಉಪಸ್ಥಿತರಿದ್ದರು.
ನಿನ್ನೆ ಸಂಜೆ ವಿಶೇಷ ವಿಮಾನದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕಂದಾಯ ಸಚಿವ ಆರ್.ಅಶೋಕ್, ತಿರುಪತಿ ತಿರುಮಲ ದೇವಸ್ಥಾನದ ಸದಸ್ಯರೂ ಆಗಿರುವ ಶಾಸಕ ಎಸ್.ಆರ್.ವಿಶ್ವನಾಥ್ ಅವರೊಂದಿಗೆ ತಿರುಪತಿಗೆ ತೆರಳಿ ವಾಸ್ತವ್ಯ ಹೂಡಿದ್ದರು.
ಈ ವೇಳೆ ಸಿಎಂ ಬೊಮ್ಮಾಯಿ ಹಾಗೂ ಬಿಎಸ್‌ವೈ ಟಿಟಿಡಿ ಅಧ್ಯಕ್ಷ ಸುಬ್ಬಾರೆಡ್ಡಿ ಅವರನ್ನು ಭೇಟಿ ಮಾಡಿ ಸೌಹಾರ್ದಯುತ ಮಾತುಕತೆ ನಡೆಸಿದ್ದರು. ಇಂದು ತಿಮ್ಮಪ್ಪನ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ ಬಳಿಕ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ.