ಅರಣ್ಯ ಪ್ರದೇಶ ಶೇ.33ಕ್ಕೆ ಹೆಚ್ಚಳ ಗುರಿ: ಸಿಎಂ ಯಡಿಯೂರಪ್ಪ
ಬೆಂಗಳೂರು(ಫೆ.25): ರಾಜ್ಯದಲ್ಲಿ ಶೇ.22.8ರಷ್ಟಿರುವ ಅರಣ್ಯ ಪ್ರದೇಶವನ್ನು ಶೇ.33ಕ್ಕೆ ಹೆಚ್ಚಳಗೊಳಿಸುವುದು ನಮ್ಮ ಗುರಿ. ಇದಕ್ಕಾಗಿ ಅಗತ್ಯ ನೆರವನ್ನು ನೀಡಲು ಸರ್ಕಾರ ಸಿದ್ಧವಿದೆ. ಹೀಗಾಗಿ ಇಲಾಖೆಯ ಅಧಿಕಾರಿಗಳು ಗುರಿ ಸಾಧನೆಗಾಗಿ ಶ್ರಮಿಸಬೇಕು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕರೆ ನೀಡಿದ್ದಾರೆ.
ನಗರದ ಅರಣ್ಯ ಭವನದಲ್ಲಿ ಬುಧವಾರ ನಡೆದ ರಾಜ್ಯದ ಎಲ್ಲಾ ವೃತ್ತಗಳ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ, ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಪ್ರಾದೇಶಿಕ ವನ್ಯಜೀವಿ ವಿಭಾಗದ ಅರಣ್ಯ ಸಂರಕ್ಷಣಾಧಿಕಾರಿಗಳ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಸಿಎಂ
ರಾಜ್ಯದಲ್ಲಿದ್ದ ಶೇ.18ರಷ್ಟಿದ್ದ ಹಸಿರು ವಲಯವನ್ನು ಶೇ.22.8ಕ್ಕೆ ಹೆಚ್ಚಳ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಈ ಪ್ರಮಾಣವನ್ನು ಶೇ.33ಕ್ಕೆ ವಿಸ್ತರಿಸಬೇಕಾಗಿದೆ. ಇದಕ್ಕೆ ಅಧಿಕಾರಿಗಳ ಪ್ರಯತ್ನದ ಜತೆಗೆ ಅರಣ್ಯ ವಾಸಿಗಳು ಮತ್ತು ಕಾಡಂಚಿನ ಗ್ರಾಮಸ್ಥರ ಸಹಕಾರ ಅತ್ಯಂತ ಮುಖ್ಯ. ಈ ನಿಟ್ಟಿನಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳೀಯ ಗ್ರಾಮಸ್ಥರೊಂದಿಗೆ ಅತ್ಯಂತ ಸೌಹಾರ್ದಯುತವಾಗಿ ವ್ಯವಹರಿಸಬೇಕು. ಅವರ ಹಿತರಕ್ಷಣೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸೂಚಿಸಿದ ಯಡಿಯೂರಪ್ಪ
ಬೇಸಿಗೆ ಪ್ರಾರಂಭವಾಗುತ್ತಿದ್ದು, ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು ಹಬ್ಬಬಹುದಾಗಿದೆ. ಇದಕ್ಕೆ ಆಸ್ಪದ ನೀಡಬಾರದು. ಜೊತೆಗೆ, ಕಾಡ್ಗಿಚ್ಚು ಕಾಣಿಸಿಕೊಳ್ಳದಂತೆ ಎಚ್ಚರಿಕೆ ವಹಿಸಬೇಕು ಎಂದ ಸಿಎಂ ಬಿಎಸ್‌ವೈ
ಅರಣ್ಯ ಪ್ರದೇಶದಲ್ಲಿನ ಪ್ರಾಣಿ, ಪಕ್ಷಿಗಳಿಗೆ ಆಹಾರ ಒದಗಿಸಬೇಕಾಗಿದೆ. ಅರಣ್ಯ ಉಳಿಯಬೇಕಾದಲ್ಲಿ ಅಲ್ಲಿಯ ಪ್ರಾಣಿ ಮತ್ತು ಪಕ್ಷಿ ಸಂಕುಲ ಮುಖ್ಯ ಪಾತ್ರ ವಹಿಸಲಿದೆ. ಅವುಗಳಿಗೆ ನೆರವಾಗುವುದಕ್ಕಾಗಿ ಅರಣ್ಯ ಪ್ರದೇಶದಲ್ಲಿ ಹಣ್ಣಿನ ಜಾತಿಯ ಮರಗಳನ್ನು ಬೆಳೆಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸಿಎಂ ಸಲಹೆ ನೀಡಿದರು.
ಜಗತ್ತಿನ ಜೀವ ವೈವಿಧ್ಯ ತಾಣಗಳಲ್ಲಿ ಒಂದಾದ ಪಶ್ಚಿಮ ಘಟ್ಟಗಳ ಮಧ್ಯಭಾಗ ಕರ್ನಾಟಕ ರಾಜ್ಯದಲ್ಲಿದೆ. ರಾಜ್ಯದ ಎಲ್ಲ ಜೀವ ನದಿಗಳು ಇಲ್ಲಿ ಹುಟ್ಟುತ್ತವೆ. ದೇಶದ ಶೇ.25 ಆನೆ, ಶೇ.15 ಹುಲಿ ಸಂತತಿಯನ್ನು ರಾಜ್ಯ ಪಡೆದಿದ್ದು, ಅದರ ರಕ್ಷಣೆಗೆ ಅರಣ್ಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಜೀವ ಪಣಕ್ಕಿಟ್ಟು ಶ್ರಮಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿಗಳು ಮೆಚ್ಚುಗೆ ವ್ಯಕ್ತಪಡಿಸಿದರು.
ಅರಣ್ಯ ಸಚಿವ ಅರವಿಂದ ಲಿಂಬಾವಳಿ, ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳಾದ ಸಂಜಯ್ ಮೋಹನ್ (ಅರಣ್ಯ ಪಡೆ ಮುಖ್ಯಸ್ಥರು), ವಿಜಯ್‌ಕುಮಾರ್ ಗೋಗಿ(ವನ್ಯಜೀವಿ ಪರಿಪಾಲಕರು), ರಾಜ್ಯ ಜೀವ ವೈವಿಧ್ಯ ಮಂಡಳಿ ಅಧ್ಯಕ್ಷ ಅನಂತ ಹೆಗಡೆ ಆಶಿಸರ ಸೇರಿದಂತೆ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.
ವನ್ಯಜೀವಿ-ಮಾನವ ಸಂಘರ್ಷದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ತಕ್ಷಣ ಪರಿಹಾರ ಒದಗಿಸಲು ಮುಂಗಡವಾಗಿ ಅನುದಾನ ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಅರಣ್ಯ ಸಚಿವ ಅರವಿಂದ ಲಿಂಬಾವಳಿ ಮನವಿ ಮಾಡಿದರು.
ರಾಜ್ಯದಲ್ಲಿ ವನ್ಯಜೀವಿ-ಮಾನವ ಸಂಘರ್ಷಗಳು ನಡೆದ ಸಂದರ್ಭದಲ್ಲಿ ಪರಿಹಾರ ನೀಡಲು ಅರಣ್ಯ ಇಲಾಖೆಯಲ್ಲಿ ಅನುದಾನದ ಕೊರತೆಯಿದೆ. ಇದರಿಂದ ತಕ್ಷಣ ಪರಿಹಾರ ನೀಡಲು ಸಾಧ್ಯವಾಗುತ್ತಿಲ್ಲ. ಪರಿಣಾಮ ಮೃತರ ಕುಟುಂಬಸ್ಥರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ನಡುವೆ ಸಂಘರ್ಷಕ್ಕೆ ಕಾರಣವಾಗುತ್ತಿದೆ. ಆದ್ದರಿಂದ ಮುಂಗಡವಾಗಿ ಹಣ ಬಿಡುಗಡೆ ಮಾಡಬೇಕು ಎಂದರು.
ಅರಣ್ಯ ಪ್ರದೇಶದಲ್ಲಿ ನಡೆಯುತ್ತಿರುವ ಗಣಿಗಾರಿಕೆಗಳಿಂದ ವನ್ಯಜೀವಿಗಳು ತೀವ್ರ ತೊಂದರೆ ಅನುಭವಿಸುತ್ತಿವೆ. ಆದ್ದರಿಂದ ಯಾವುದೇ ಕಾರಣಕ್ಕೂ ಅರಣ್ಯ ಪ್ರದೇಶದಲ್ಲಿ ಗಣಿಗಾರಿಕೆಗೆ ಅನುಮತಿ ನೀಡಬಾರದು. ನೀಡಿದರೂ ವನ್ಯಜೀವಿಗಳಿಗೆ ತೊಂದರೆಯಾಗದಂತೆ ಕಟ್ಟುನಿಟ್ಟಿನ ಷರತ್ತುಗಳನ್ನು ವಿಧಿಸಬೇಕು ಎಂದು ಅರಣ್ಯ ಇಲಾಖೆ ಸಚಿವ ಅರವಿಂದ ನಿಂಬಾವಳಿ ತಿಳಿಸಿದ್ದಾರೆ.