ಇಂದಿಗೆ ಡೆಡ್‌ಲೈನ್ ಅಂತ್ಯ: ಸಿಎಂ ಬೊಮ್ಮಾಯಿ ಭೇಟಿಯಾದ ಜಯಮೃತ್ಯುಂಜಯ ಸ್ವಾಮೀಜಿ
ಬೆಂಗಳೂರು(ಅ.01): ಲಿಂಗಾಯತ ಪಂಚಮಸಾಲಿಗೆ 2ಎ ಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನ ಕೂಡಲ ಸಂಗಮದ ಪಂಚಮಸಾಲಿ ಪೀಠದ ಜಯಮೃತ್ಯುಂಜಯ ಸ್ವಾಮೀಜಿ ಹಾಗೂ ಸಚಿವ ಸಿ.ಸಿ. ಪಾಟೀಲ್ ಅವರು ಇಂದು(ಶುಕ್ರವಾರ) ಭೇಟಿಯಾಗಿದ್ದಾರೆ.
ಬೆಂಗಳೂರಿನ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನ ಭೇಟಿಯಾಗಿ ಜಯಮೃತ್ಯುಂಜಯ ಸ್ವಾಮೀಜಿ ಅವರು ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ನೀಡುವ ಕುರಿತು ಚರ್ಚೆ ನಡೆಸಿದ್ದಾರೆ.
ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ನೀಡುವ ಕುರಿತು ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಜಯಮೃತ್ಯುಂಜಯ ಸ್ವಾಮೀಜಿ ಅವರು ಅ.01 ರಂದು ಗಡುವು ನೀಡಿದ್ದರು. ಅ.1 ರೊಳಗೆ ಮೀಸಲಾತಿ ನೀಡುವ ಕುರಿತು ಅಂತಿಮ ತೀರ್ಮಾನಕ್ಕೆ ಬರದಿದ್ದರೆ ಮತ್ತೆ ಹೋರಾಟ ಆರಂಭಿಸುವುದಾಗಿ ಶ್ರೀಗಳು ಹೇಳಿದ್ದರು.
ಈ ಸಂಬಂಧ ಜಯಮೃತ್ಯುಂಜಯ ಸ್ವಾಮೀಜಿ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನ ಭೇಟಿಯಾದ ಶಾಲು ಹೊದಿಸಿ ಸನ್ಮಾನಿಸಿದ್ದಾರೆ. ಆದರೆ, ಸಿಎಂ ಬೊಮ್ಮಾಯಿ ಇಂದು ಮೀಸಲಾತಿ ನೀಡುವ ಕುರಿತು ಯಾವ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂಬುದನ್ನ ಕಾದುನೋಡಬೇಕಿದೆ.
ಈ ಸಂದರ್ಭದಲ್ಲಿ ಸಚಿವ ಸಿ.ಸಿ. ಪಾಟೀಲ್ ಅವರು ಉಪಸ್ಥಿತರಿದ್ದರು. ಇತ್ತೀಚೆಗೆ ನಾನು ಮುಖ್ಯಮಂತ್ರಿ ಆದರೂ ಕೂಡ ಕೇವಲ 15 ದಿನದಲ್ಲಿ ಮೀಸಲಾತಿ ನೀಡಲು ಆಗೋದಿಲ್ಲ ಅಂತ ಹೇಳಿಕೆ ಕೊಟ್ಟಿದ್ದನ್ನು ಇಲ್ಲಿ ಸ್ಮರಿಸಬಹುದು.