ರೈಲ್ವೆ ಪರೀಕ್ಷೆಯಲ್ಲಿ ಕನ್ನಡ ಕಡೆಗಣನೆ: ಹೋರಾಟಕ್ಕೆ ಕರೆ ನೀಡಿದ ನಾರಾಯಣಗೌಡರಿಗೆ ಪೊಲೀಸ್ ನೋಟಿಸ್
ರೈಲ್ವೆ ಇಲಾಖೆಯ ಪದೋನ್ನತಿ ಪರೀಕ್ಷೆಗಳನ್ನು ಕೇವಲ ಹಿಂದಿ ಮತ್ತು ಇಂಗ್ಲಿಷ್‌ನಲ್ಲಿ ನಡೆಸುತ್ತಿರುವುದನ್ನು ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆ ಬೃಹತ್ ಹೋರಾಟಕ್ಕೆ ಕರೆ ನೀಡಿದೆ. ಈ ಹಿನ್ನೆಲೆಯಲ್ಲಿ, ಕರವೇ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡರಿಗೆ ಪೊಲೀಸ್ ಇಲಾಖೆ ನೋಟಿಸ್ ಜಾರಿ ಮಾಡಿದೆ.

ಪೊಲೀಸ್ ಇಲಾಖೆ ನೋಟಿಸ್
ಬೆಂಗಳೂರು (ಮಾ.16): ಕೇಂದ್ರ ಸರ್ಕಾರದ ಅಧೀನದಲ್ಲಿರುವ ರೈಲ್ವೆ ಇಲಾಖೆಯಲ್ಲಿ ಕನ್ನಡಿಗರನ್ನು ವ್ಯವಸ್ಥಿತವಾಗಿ ಹೊರಗಿಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ರೈಲ್ವೆ ಇಲಾಖೆಯ ಪದೋನ್ನತಿ (Promotion) ಪರೀಕ್ಷೆಗಳನ್ನು ಕೇವಲ ಹಿಂದಿ ಮತ್ತು ಇಂಗ್ಲಿಷ್‌ನಲ್ಲಿ ನಡೆಸುತ್ತಿರುವುದನ್ನು ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಬೃಹತ್ ಹೋರಾಟಕ್ಕೆ ಕರೆ ನೀಡಿದೆ. ಈ ಬೆನ್ನಲ್ಲೇ ಕರವೇ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡ ಅವರಿಗೆ ಪೊಲೀಸ್ ಇಲಾಖೆ ನೋಟಿಸ್ ನೀಡಿದ್ದು, ಸಂಘರ್ಷದ ವಾತಾವರಣ ನಿರ್ಮಾಣವಾಗಿದೆ.
ಏನಿದು ವಿವಾದ?
ನೈರುತ್ಯ ರೈಲ್ವೆಯ ಗೂಡ್ಸ್ ರೈಲು ಮ್ಯಾನೇಜರ್ ಮತ್ತು ಎಲ್.ಡಿಸಿಇ ಹುದ್ದೆಗಳಿಗೆ ಮಾರ್ಚ್ 17ರಂದು ಪರೀಕ್ಷೆ ನಿಗದಿಯಾಗಿದೆ. ಆದರೆ, ಈ ಪರೀಕ್ಷೆಗಳನ್ನು ಕೇವಲ ಹಿಂದಿ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಮಾತ್ರ ನಡೆಸಲು ರೈಲ್ವೆ ಪರೀಕ್ಷಾ ಮಂಡಳಿ ಮುಂದಾಗಿದೆ. ಸ್ಥಳೀಯ ಭಾಷೆಯಾದ ಕನ್ನಡವನ್ನು ಕಡೆಗಣಿಸಿರುವುದು ಕನ್ನಡಿಗರಿಗೆ ಮಾಡುತ್ತಿರುವ ದ್ರೋಹ ಎಂದು ಕರವೇ ಆಕ್ರೋಶ ವ್ಯಕ್ತಪಡಿಸಿದೆ. ಕನ್ನಡಿಗರು ಉನ್ನತ ಹುದ್ದೆಗಳಿಗೆ ಏರುವುದನ್ನು ತಡೆಯಲು ಈ ರೀತಿ ಭಾಷಾ ತಾರತಮ್ಯ ಮಾಡಲಾಗುತ್ತಿದೆ ಎಂಬುದು ಕರವೇ ಸಂಘಟನೆಯ ನೇರ ಆರೋಪವಾಗಿದೆ.
ಪೊಲೀಸ್ ನೋಟಿಸ್ ಮತ್ತು ಎಚ್ಚರಿಕೆ
ಹೋರಾಟದ ಕರೆ ನೀಡಿದ ಕೆಲವೇ ನಿಮಿಷಗಳಲ್ಲಿ ಬೆಂಗಳೂರಿನ ಕಾಟನ್ ಪೇಟೆ ಪೊಲೀಸ್ ಇಲಾಖೆಯು ಟಿ.ಎ. ನಾರಾಯಣಗೌಡ ಅವರಿಗೆ ನೋಟಿಸ್ ಜಾರಿ ಮಾಡಿದೆ. ಹೈಕೋರ್ಟ್ ಆದೇಶದಂತೆ ಬೆಂಗಳೂರಿನ ಫ್ರೀಡಂ ಪಾರ್ಕ್ ಹೊರತುಪಡಿಸಿ ನಗರದ ಬೇರೆಲ್ಲೂ ಪ್ರತಿಭಟನೆ ನಡೆಸಲು ಅವಕಾಶವಿಲ್ಲ. ಒಂದು ವೇಳೆ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದ ಬಳಿ ಪ್ರತಿಭಟನೆ ನಡೆಸಿದರೆ ಕಾನೂನು ಕ್ರಮ ಜರುಗಿಸುವುದಾಗಿ ಪೊಲೀಸರು ಎಚ್ಚರಿಸಿದ್ದಾರೆ.
ಬಂಧನಕ್ಕೆ ಹೆದರುವುದಿಲ್ಲ - ನಾರಾಯಣಗೌಡ ಪಟ್ಟು
ಪೊಲೀಸ್ ನೋಟಿಸ್‌ಗೆ ಡೋಂಟ್ ಕೇರ್ ಎಂದಿರುವ ಟಿ.ಎ. ನಾರಾಯಣಗೌಡ, 'ಪೊಲೀಸರ ಬೆದರಿಕೆಗೆ ನಾವು ಹೆದರುವುದಿಲ್ಲ. ನಮ್ಮನ್ನು ಬಂಧಿಸಿದರೂ ಸರಿ, ನಾಳೆ ಹೋರಾಟ ಮಾಡಿಯೇ ತೀರುತ್ತೇವೆ' ಎಂದು ಗುಡುಗಿದ್ದಾರೆ. 'ಕನ್ನಡಿಗರಿಗೆ ಅನ್ಯಾಯವಾಗುತ್ತಿರುವಾಗ ಕೈಕಟ್ಟಿ ಕುಳಿತುಕೊಳ್ಳಲು ಸಾಧ್ಯವಿಲ್ಲ. ನಮ್ಮ ಭಾಷೆಯ ಹಕ್ಕಿಗಾಗಿ ಜೈಲಿಗೆ ಹೋಗಲು ಸಿದ್ಧ' ಎಂದು ತಮ್ಮ ಕಾರ್ಯಕರ್ತರಿಗೆ ಸಂದೇಶ ನೀಡಿದ್ದಾರೆ.
ಮೂರು ಜಿಲ್ಲೆಗಳಲ್ಲಿ ಮುತ್ತಿಗೆ
ಮಾರ್ಚ್ 17ರಂದು ಬೆಳಗ್ಗೆ 11 ಗಂಟೆಗೆ ಬೆಂಗಳೂರಿನ ಕೆಎಸ್ಆರ್ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣ ಮಾತ್ರವಲ್ಲದೆ, ಮೈಸೂರು ಮತ್ತು ಹುಬ್ಬಳ್ಳಿಯ ಪರೀಕ್ಷಾ ಕೇಂದ್ರಗಳಿಗೂ ಮುತ್ತಿಗೆ ಹಾಕಲು ನಿರ್ಧರಿಸಲಾಗಿದೆ. ಈಗಾಗಲೇ ರಾಜ್ಯಾದ್ಯಂತ ಸಾವಿರಾರು ಕಾರ್ಯಕರ್ತರು ಬೆಂಗಳೂರಿನತ್ತ ಮುಖ ಮಾಡಿದ್ದು, ರೈಲ್ವೆ ನಿಲ್ದಾಣದ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.
ಭಾಷಾ ಸಂಘರ್ಷಕ್ಕೆ ಹೊಸ ತಿರುವು
ರೈಲ್ವೆ ಇಲಾಖೆಯ ಈ ಭಾಷಾ ನೀತಿ ರಾಜ್ಯದ ಯುವಜನತೆಯಲ್ಲಿ ತೀವ್ರ ಆಕ್ರೋಶ ಮೂಡಿಸಿದ್ದು, ನಾಳಿನ ಹೋರಾಟವು ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರದ ನಡುವಿನ ಭಾಷಾ ಸಂಘರ್ಷಕ್ಕೆ ಹೊಸ ತಿರುವು ನೀಡುವ ಸಾಧ್ಯತೆಯಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

