ರಾಜ್ಯಾದ್ಯಂತ ಎರಡು ದಿನ ಯಲ್ಲೋ ಅಲರ್ಟ್: ಭಾರಿ ಮಳೆ ಮುನ್ಸೂಚನೆ ಕೊಟ್ಟ ಹವಾಮಾನ ಇಲಾಖೆ
ಬೆಂಗಳೂರು (ಅ.10): ಛತ್ತೀಸ್‌ಘಡ ಹಾಗೂ ತಮಿಳುನಾಡಲ್ಲಿ ಚಂಡಮಾರುತ ಬೀಸಿದ ಹಿನ್ನಲೆಯಲ್ಲಿ ಬೆಂಗಳೂರು ಸೇರಿದಂತೆ, ರಾಜ್ಯದ ದಕ್ಷಿಣ ಒಳನಾಡು ಹಾಗೂ ಕರಾವಳಿ ಭಾಗದಲ್ಲಿ ಮುಂದಿನ ಎರಡು ದಿನಗಳ ಕಾಲ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಛತ್ತೀಸ್‌ಘಡ ಹಾಗೂ ತಮಿಳುನಾಡಲ್ಲಿ ಚಂಡಮಾರುತ ಬೀಸಿದ ಹಿನ್ನಲೆಯಲ್ಲಿ ಕರ್ನಾಟಕದ ದಕ್ಷಿಣ ಒಳನಾಡು ಹಾಗೂ ಕರಾವಳಿ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದೆ.
ಹಾಸನ, ಕೊಡಗು, ಮೈಸೂರು, ಬೆಂಗಳೂರು, ಮಂಡ್ಯ ಹಾಗೂ ಚಾಮರಾಜನಗರದಲ್ಲಿ ಮುಂದಿನ ಎರಡು ದಿನ ಗುಡುಗು ಮಿಂಚು ಸಹಿತ ಮಳೆಯಾಗಲಿದೆ.
ರಾಜ್ಯದಲ್ಲಿ ನಿನ್ನೆ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಬೆಂಗಳೂರು ಸೇರಿದಂತೆ ಹಲವು ಪ್ರದೇಶಗಳಲ್ಲಿ ಜನರು ನಲುಗಿ ಹೋಗಿದ್ದಾರೆ.
ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮಂಡ್ಯ, ಚಾಮರಾಜನಗರಕ್ಕೆ ಇಂದು ಯೆಲ್ಲೋ ಅಲರ್ಟ್ ಘೋಷಣೆ ಮಾಡಿದ್ದು, ರಾತ್ರಿ ಭಾರಿ ಮಳೆಯಾಗುವ ಮುನ್ಸೂಚನೆಯಿದೆ.
ನಾಳೆ ಹಾಸನ, ಕೊಡಗು ಹಾಗೂ ಮೈಸೂರು ಜಿಲ್ಲೆಯಲ್ಲಿ ಯಲ್ಲೊ ಅಲರ್ಟ್ ಘೋಷಣೆ ಮಾಡಿದ್ದು, ಕರಾವಳಿ ಭಾಗದಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ.
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಮುಂದಿನ ಮೂರು ದಿನಗಳು ಹಗುರ ಮಳೆ ಆಗಲಿದೆ. ನಂತರದ ದಿನಗಳಲ್ಲಿ ಮಳೆ ಕಡಿಮೆಯಾಗಲಿದೆ.
ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಅ.13ರಿಂದ ಮಳೆ ಪ್ರಮಾಣ ಕೊಂಚ ಕಡಿಮೆಯಾಗಲಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಪ್ರಸಾದ್ ಮಾಹಿತಿ ನೀಡಿದ್ದಾರೆ.