ಉಡುಪಿಯಲ್ಲಿ ರೆಡ್ ಅಲರ್ಟ್: ಜಿಲ್ಲೆಯ ಶಾಲೆ ಮತ್ತು ಪದವಿ ಪೂರ್ವ ಕಾಲೇಜಿಗೆ ರಜೆ
Udupi Rain Alert Update: ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಜಿಲ್ಲಾಡಳಿತವು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದ್ದು, ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಸೂಚಿಸಿದೆ. ಕರಾವಳಿ ಭಾಗದಲ್ಲಿ ಗಾಳಿಯ ವೇಗ ಹೆಚ್ಚಾಗುವ ಸಾಧ್ಯತೆಗಳಿವೆ.

ಉಡುಪಿ ಜಿಲ್ಲೆಯಲ್ಲಿ ಅತ್ಯಧಿಕ ಮಳೆಯಾಗಲಿದ್ದು ಈ ಸಂಬಂಧ ಉಡುಪಿ ಜಿಲ್ಲೆಗೆ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಈ ಹಿನ್ನೆಲೆ ಉಡುಪಿ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ, ಪ್ರೌಢ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಮಳೆ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲೂಕಿನ ಶಾಲಾ-ಕಾಲೇಜುಗಳಿಗೆ ಗುರುವಾರ ರಜೆ ಘೋಷಣೆ ಮಾಡಲಾಗಿದೆ. ಮಂಗಳೂರು ತಾಲೂಕಿನಲ್ಲಿ ಅಂಗನವಾಡಿಯಿಂದ ಪದವಿ ಪೂರ್ವ ಕಾಲೇಜುಗಳಿಗೆ ಒಂದು ದಿನದ ರಜೆ ನೀಡಲಾಗಿದೆ.
ಗುರುವಾರ ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಹೇಳಿಕೆ ನೀಡಿದೆ. ಉಡುಪಿ ಜಿಲ್ಲಾಧಿಕಾರಿ ಸ್ವರೂಪ್ ಟಿ.ಕೆ. ಅವರು ರಜೆ ನೀಡಿ ಆದೇಶಿಸಿದ್ದಾರೆ. ಪದವಿ ಕಾಲೇಜುಗಳು ಎಂದಿನಂತೆ ನಡೆಯಲಿವೆ.
ಉಡುಪಿ ಕರಾವಳಿಯಲ್ಲಿ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ. ಇಂದು ಮಳೆ ಪ್ರಮಾಣದಲ್ಲಿ ಕೊಂಚ ಇಳಿಕೆಯಾಗಿತ್ತು. ಗಂಟೆಗೆ 50 ರಿಂದ 60 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಲಾಗಿದೆ. ಮಳೆ ಕಡಿಮೆಯಾದ ಪ್ರದೇಶದಲ್ಲಿ ಗಾಳಿ ವೇಗ ಹೆಚ್ಚಾಗುವ ಸಾಧ್ಯತೆಗಳಿವೆ. ಸ್ವರ್ಣಾ, ಪಾಪಾನಾಶಿನಿ, ಚಕ್ರಾ ನದಿ ತೀರದ ನಿವಾಸಿಗಳು ನಿರಂತರ ಮಳೆಯಿಂದಾಗಿ ಹೈರಾಣು ಆಗಿದ್ದಾರೆ.
ಜುಲೈ 15ರಂದು ಗಂಗೊಳ್ಳಿಯ ಮೂವರು ಮೀನುಗಾರರು ಸಮುದ್ರದ ಪಾಲಾಗಿದ್ದರು. ಮೊದಲು ಲೋಹಿತ್ ಖಾರ್ವಿ ಮತ್ತು ಜಗನ್ನಾಥ ಖಾರ್ವಿ ಎಂಬವರ ಶ*ವ ಪತ್ತೆಯಾಗಿತ್ತು. ಮರುದಿನ ಸುರೇಶ್ ಖಾರ್ವಿ ಎಂಬವರ ಶ*ವ ಕುಂದಾಪುರ ಕೋಡಿ ಸಿವಾಕ್ ಸಮೀಪ ಸಮುದ್ರ ತೀರದಲ್ಲಿ ಪತ್ತೆಯಾಗಿತ್ತು.
ಬಾಗಲಕೋಟೆ, ಗದಗ, ಹಾವೇರಿ, ಕೊಪ್ಪಳ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ. ದಕ್ಷಿಣ ಒಳನಾಡು ಕರ್ನಾಟಕದ ಶಿವಮೊಗ್ಗ ಚಿಕ್ಕಮಗಳೂರು, ಕೊಡಗು ಮತ್ತು ಹಾಸನ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಗಳಿವೆ. ಬಳ್ಳಾರಿ, ಬೆಂಗಳೂರು (ದಕ್ಷಿಣ), ಬೆಂಗಳೂರು (ನಗರ), ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ ಭಾಗದಲ್ಲಿಯೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.