ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ ಅವರು ಉಸಿರಾಟದ ತೊಂದರೆಯಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರ ಪಾರ್ಥಿವ ಶರೀರವನ್ನು ಬೆಂಗಳೂರಿನ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ಇರಿಸಲಾಗಿದ್ದು, ಅಂತ್ಯಕ್ರಿಯೆಯು ಹಾಸನ ಜಿಲ್ಲೆಯ ಹರದನಹಳ್ಳಿಯಲ್ಲಿ ನಡೆಯಲಿದೆ.
ಬೆಂಗಳೂರು (ಜು.18): ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್‌ಡಿ ದೇವೇಗೌಡರ ಪತ್ನಿ ಚೆನ್ನಮ್ಮ (Chennamma Deve Gowda) ಅವರು ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ಕೊನೆಯುಸಿರೆಳೆದಿದ್ದಾರೆ. ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ, ಚಿಕಿತ್ಸೆಗೆ ಸ್ಪಂದಿಸದೆ ಅವರು ಚಿರನಿದ್ರೆಗೆ ಜಾರಿದ್ದಾರೆ. ಮಾತೃವಿಯೋಗದಿಂದ ದೇವೇಗೌಡರ ಕುಟುಂಬದಲ್ಲಿ ಶೋಕ ಮಡುಗಟ್ಟಿದ್ದು, ಅಂತಿಮ ವಿಧಿವಿಧಾನಗಳ ಕುರಿತು ಎಚ್.ಡಿ. ದೇವೇಗೌಡರು, ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹಾಗೂ ನಿಖಿಲ್ ಕುಮಾರಸ್ವಾಮಿ ನಡುವೆ ಚರ್ಚೆ ನಡೆದಿದೆ ಎಂದು ವರದಿಯಾಗಿದೆ.
ಆಸ್ಪತ್ರೆಯಿಂದ ಚೆನ್ನಮ್ಮ ಅವರ ಪಾರ್ಥಿವ ಶರೀರವನ್ನು ಬೆಂಗಳೂರಿನ ಪದ್ಮನಾಭನಗರದಲ್ಲಿರುವ ದೇವೇಗೌಡರ ನಿವಾಸಕ್ಕೆ ತರಲಾಗುತ್ತಿದ್ದು, ಸಾರ್ವಜನಿಕರು ಹಾಗೂ ಅಭಿಮಾನಿಗಳ ಅಂತಿಮ ದರ್ಶನಕ್ಕೆ ಅಲ್ಲೇ ವ್ಯವಸ್ಥೆ ಕಲ್ಪಿಸಲಾಗಿದೆ. ಅಂತಿಮ ದರ್ಶನದ ಪ್ರಕ್ರಿಯೆ ಮುಗಿದ ಬಳಿಕ ಪಾರ್ಥಿವ ಶರೀರವನ್ನು ಹಾಸನ ಜಿಲ್ಲೆಗೆ ರವಾನಿಸಲು ಕುಟುಂಬಸ್ಥರು ನಿರ್ಧರಿಸಿದ್ದಾರೆ.
ಬೆಂಗಳೂರಿನಲ್ಲಿ ಅಂತಿಮ ದರ್ಶನದ ಬಳಿಕ ಚೆನ್ನಮ್ಮ ಅವರ ಪಾರ್ಥಿವ ಶರೀರವನ್ನು ಹಾಸನಕ್ಕೆ ತೆಗೆದುಕೊಂಡು ಹೋಗಿ ಅಲ್ಲಿಯೇ ಅಂತ್ಯಕ್ರಿಯೆ ನೆರವೇರಿಸಲು ತೀರ್ಮಾನಿಸಲಾಗಿದೆ. ದೇವೇಗೌಡರ ಹುಟ್ಟೂರಾದ ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಹರದನಹಳ್ಳಿಯಲ್ಲಿ ಸಕಲ ವಿಧಿವಿಧಾನಗಳೊಂದಿಗೆ ಅಂತ್ಯಸಂಸ್ಕಾರ ನೆರವೇರುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.
ಮಣಿಪಾಲ್ ಆಸ್ಪತ್ರೆ ಬಳಿ ಬಿಗಿ ಪೊಲೀಸ್ ಭದ್ರತೆ
ಚೆನ್ನಮ್ಮ ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ಜೆಡಿಎಸ್ ನಾಯಕರು ಹಾಗೂ ಕಾರ್ಯಕರ್ತರು ಆಸ್ಪತ್ರೆಯತ್ತ ಧಾವಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆ ಸುತ್ತಮುತ್ತ ಬಿಗಿ ಪೊಲೀಸ್ ಭದ್ರತೆಯನ್ನು ನಿಯೋಜಿಸಲಾಗಿದೆ. ಸಾರ್ವಜನಿಕ ಸಂಚಾರಕ್ಕೆ ತೊಂದರೆಯಾಗದಂತೆ ಕಾನೂನು ಸುವ್ಯವಸ್ಥೆ ಹಾಗೂ ಸಂಚಾರಿ ವಿಭಾಗದ ಹೆಚ್ಚುವರಿ ಪೊಲೀಸರನ್ನು ಆಸ್ಪತ್ರೆ ಆವರಣದಲ್ಲಿ ಕರ್ತವ್ಯಕ್ಕೆ ನಿಯೋಜಿಸಲಾಗಿದೆ.
ತವರು ಗ್ರಾಮ ಮುತ್ತಿಗೆಹಿರಿಹಳ್ಳಿಯಲ್ಲಿ ನೀರವ ಮೌನ
ಚೆನ್ನಮ್ಮ ಅವರ ನಿಧನದ ವಾರ್ತೆ ಕೇಳಿ ಅವರ ಹುಟ್ಟೂರಾದ ಹಾಸನ ತಾಲೂಕಿನ ಶಾಂತಿಗ್ರಾಮ ಹೋಬಳಿಯ ಮುತ್ತಿಗೆಹಿರಿಹಳ್ಳಿ ಗ್ರಾಮದಲ್ಲಿ ನೀರವ ಮೌನ ಆವರಿಸಿದೆ. ಗ್ರಾಮದೆಲ್ಲೆಡೆ ಶೋಕದ ವಾತಾವರಣ ನಿರ್ಮಾಣವಾಗಿದ್ದು, ಗ್ರಾಮಸ್ಥರು ಕಂಬನಿ ಮಿಡಿದಿದ್ದಾರೆ. ಮುತ್ತಿಗೆಹಿರಿಹಳ್ಳಿಯಿಂದ ಹರದನಹಳ್ಳಿಗೆ ದೇವೇಗೌಡರ ಕೈಹಿಡಿದು ಸೊಸೆಯಾಗಿ ಹೋಗಿದ್ದ ಚೆನ್ನಮ್ಮ ಅವರಿಗೆ ತವರು ಗ್ರಾಮದ ಮೇಲೆ ಅಪಾರ ಪ್ರೀತಿಯಿತ್ತು. ಗ್ರಾಮಸ್ಥರು ಕೂಡ ಅವರ ಬಗ್ಗೆ ಅಪಾರ ಗೌರವ ಹೊಂದಿದ್ದು, ಅವರ ಅಗಲಿಕೆ ಇಡೀ ಗ್ರಾಮವನ್ನು ಶೋಕ ಸಾಗರದಲ್ಲಿ ಮುಳುಗಿಸಿದೆ.


