ಸೌಥಾಂಪ್ಟನ್‌[ಜೂ.22]: ವಿಶ್ವಕಪ್ ಟೂರ್ನಿಯಲ್ಲಿಂದು ಭಾರತ-ಆಫ್ಘಾನಿಸ್ತಾನ ತಂಡಗಳು ಮುಖಾಮುಖಿಯಾಗುತ್ತಿದ್ದು, ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ ಗೆಲುವಿನ ನಾಗಾಲೋಟ ಮುಂದುವರೆಸುವ ವಿಶ್ವಾಸದಲ್ಲಿದೆ. ಈಗಾಗಲೇ ಆಡಿದ 4 ಪಂದ್ಯಗಳಲ್ಲಿ ಮೂರು ಗೆಲುವು ಹಾಗೂ ಒಂದು ಪಂದ್ಯ ರದ್ದಾಗಿದ್ದು ಒಟ್ಟು 7 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದೆ. ಇನ್ನು ವಿಶ್ವಕಪ್ ಟೂರ್ನಿಯಲ್ಲಿ ಒಂದೂ ಗೆಲುವು ಕಾಣದ ಆಫ್ಘನ್ ವಿರುದ್ಧದ ಪಂದ್ಯದಲ್ಲಿ ಟೀಂ ಇಂಡಿಯಾ ಕೆಲ ಬದಲಾವಣೆಗಳೊಂದಿಗೆ ಕಣಕ್ಕಿಳಿಯುವ ಸಾಧ್ಯತೆಯಿದೆ.

ಆಫ್ಘನ್‌ ಬೇಟೆಯಾಡಲು ಟೀಂ ಇಂಡಿಯಾ ರೆಡಿ!

ಟೀಂ ಇಂಡಿಯಾದಲ್ಲಿ 2 ಬದಲಾವಣೆ..?
ಮೊದಲೆರಡು ಪಂದ್ಯಗಳಲ್ಲಿ ಟೀಂ ಇಂಡಿಯಾದಲ್ಲಿ ಯಾವುದೇ ಬದಲಾವಣೆ ಮಾಡಿರಲಿಲ್ಲ. ಆದರೆ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಶಿಖರ್ ಧವನ್ ಬದಲು ವಿಜಯ್ ಶಂಕರ್ ಗೆ ಅವಕಾಶ ಕಲ್ಪಿಸಲಾಗಿತ್ತು. ಆದರೆ ಇಂದಿನ ಪಂದ್ಯದಲ್ಲಿ ಟೀಂ ಇಂಡಿಯಾದಲ್ಲಿ 2 ಬದಲಾವಣೆಗಳಾಗುವ ಸಾಧ್ಯತೆಯಿದೆ. ಪಾಕ್ ವಿರುದ್ಧದ ಪಂದ್ಯದಲ್ಲಿ ಸ್ನಾಯು ಸೆಳೆತಕ್ಕೆ ಒಳಗಾಗಿದ್ದ ಭುವನೇಶ್ವರ್ ಕುಮಾರ್ ಬದಲಿಗೆ ಮೊಹಮ್ಮದ್ ಶಮಿ ಕಣಕ್ಕಿಳಿಯುವುದು ಬಹುತೇಕ ಪಕ್ಕಾ ಎನಿಸಿದೆ. ಶಮಿ ಇದುವರೆಗೂ ಈ ವಿಶ್ವಕಪ್’ನಲ್ಲಿ ಆಡುವ ಹನ್ನೊಂದರ ಬಳಗದಲ್ಲಿ ಕಾಣಿಸಿಕೊಂಡಿಲ್ಲ. ಇನ್ನು ಪಾಕ್ ವಿರುದ್ಧ 2 ವಿಕೆಟ್ ಪಡೆದು ಮಿಂಚಿದ್ದ ವಿಜಯ್ ಶಂಕರ್ ನೆಟ್ಸ್’ನಲ್ಲಿ ಅಭ್ಯಾಸ ನಡೆಸುತ್ತಿದ್ದ ವೇಳೆ ತುದಿಗಾಲಿಗೆ ಸ್ವಲ್ಪ ಪೆಟ್ಟಾಗಿದ್ದು, ಈ ಪಂದ್ಯದ ಮಟ್ಟಿಗೆ ಹೊರಗುಳಿಯುವ ಸಾಧ್ಯತೆ ಇದೆ. ಹೀಗಾದರೆ, ಇತ್ತೀಚೆಗಷ್ಟೇ ತಂಡ ಕೂಡಿಕೊಂಡಿರುವ ರಿಷಭ್ ಪಂತ್ ಇಲ್ಲವೇ ದಿನೇಶ್ ಕಾರ್ತಿಕ್ ನಾಲ್ಕನೇ ಕ್ರಮಾಂಕದಲ್ಲಿ ಸ್ಥಾನ ಪಡೆಯಲಿದ್ದಾರೆ. ಇನ್ನುಳಿದಂತೆ ಟೀಂ ಇಂಡಿಯಾದಲ್ಲಿ ಹೆಚ್ಚಿನ ಬದಲಾವಣೆ ಆಗುವ ಸಾದ್ಯತೆಗಳಿಲ್ಲ.

ಮಾಲಿಂಗ ದಾಖಲೆಗಳ ಕಿರೀಟಕ್ಕೆ ಮತ್ತೊಂದು ಗರಿ

ರೋಹಿತ್ ಶರ್ಮಾ ಅದ್ಭುತ ಪಾರ್ಮ್’ನಲ್ಲಿದ್ದು ಈಗಾಗಲೇ 2 ಶತಕ ಹಾಗೂ ಒಂದು ಅರ್ಧಶತಕ ಸಿಡಿಸಿ ಮಿಂಚಿದ್ದಾರೆ. ಇಂದು ಯಾರು ಶತಕ ಬಾರಿಸುತ್ತಾರೆ ಎನ್ನುವುದನ್ನು ಕಾದು ನೋಡಬೇಕಿದೆ. 

ಸುವರ್ಣನ್ಯೂಸ್ ಆಯ್ಕೆ ಮಾಡಿದ ಸಂಭಾವ್ಯ ಟೀಂ ಇಂಡಿಯಾ ಹೀಗಿದೆ ನೋಡಿ...

ಭಾರತ: ರೋಹಿತ್‌ ಶರ್ಮಾ, ರಾಹುಲ್‌, ವಿರಾಟ್‌ ಕೊಹ್ಲಿ(ನಾಯಕ), ರಿಷಭ್‌ ಪಂತ್‌/ದಿನೇಶ್ ಕಾರ್ತಿಕ್, ಎಂ.ಎಸ್‌.ಧೋನಿ, ಕೇದಾರ್‌ ಜಾಧವ್‌, ಹಾರ್ದಿಕ್‌ ಪಾಂಡ್ಯ, ಕುಲ್ದೀಪ್‌ ಯಾದವ್‌, ಯಜುವೇಂದ್ರ ಚಹಲ್‌, ಜಸ್ಪ್ರೀತ್‌ ಬುಮ್ರಾ, ಮೊಹಮದ್‌ ಶಮಿ.