ನವದೆಹಲಿ(ಜು.22): ಈಶಾನ್ಯ ರಾಜ್ಯ ಅಸ್ಸಾಂನಲ್ಲಿ ಪ್ರವಾಹ ಪರಿಸ್ಥಿತಿ ಗಂಭೀರವಾಗಿಯೇ ಮುಂದುವರೆದಿದೆ. ಈ ನಡುವೆ ಅಸ್ಸಾಂ ಸೇರಿದಂತೆ ಈಶಾನ್ಯದ ಹಲವು ರಾಜ್ಯಗಳು, ದೆಹಲಿ, ಹಿಮಾಚಲಪ್ರದೇಶ, ಉತ್ತರಾಖಂಡ, ಪಂಜಾಬ್‌, ಹರ್ಯಾಣ ಸೇರಿದಂತೆ ಹಲವು ರಾಜ್ಯಗಳಲ್ಲಿ ಮುಂದಿನ ಕೆಲ ದಿನಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಅಸ್ಸಾಂ ಜಲ ಪ್ರಳಯ: 25 ಲಕ್ಷ ಜನ ಸಂಕಷ್ಟಕ್ಕೆ!

ಹೀಗಾಗಿ ಅಸ್ಸಾಂ ಸೇರಿದಂತೆ ಈಶಾನ್ಯ ರಾಜ್ಯಗಳಲ್ಲಿ ಎದುರಾಗಬಹುದಾದ ಯಾವುದೇ ಪರಿಸ್ಥಿತಿ ಎದುರಿಸಲು ಸನ್ನದ್ಧ ಸ್ಥಿತಿಯಲ್ಲಿ ಇರುವುದಾಗಿ ಭಾರತೀಯ ವಾಯುಪಡೆ ಹೇಳಿದೆ.

ಅಸ್ಸಾಂನಲ್ಲಿ ಭಾರೀ ಮಳೆ ಮತ್ತು ಪ್ರವಾಹದಿಂದಾಗಿ 24 ಜಿಲ್ಲೆಗಳ 24 ಲಕ್ಷ ಜನರು ಸಂಕಷ್ಟದಲ್ಲಿ ಸಿಕ್ಕಿಹಾಕಿಕೊಂಡಿದ್ದಾರೆ. 1 ಲಕ್ಷ ಹೆಕ್ಟೇರ್‌ನಲ್ಲಿ ಬೆಳೆದಿದ್ದ ಬೆಳೆ ಜಲಾವೃತವಾಗಿದೆ. ಈಗಾಗಲೇ ಪ್ರವಾಹ ಪೀಡಿತ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್‌ ಶಾ ದೂರವಾಣಿಯಲ್ಲಿ ಮಾತುಕತೆ ನಡೆಸಿ ವಿವರ ಪಡೆದುಕೊಂಡಿದ್ದಾರೆ. ಅಲ್ಲದೆ ಎಲ್ಲಾ ನೆರವಿನ ಭರವಸೆ ನೀಡಿದ್ದಾರೆ.