ಬೆಂಗಳೂರು(ಆ.15): ಕರ್ನಾಟಕದಲ್ಲಿ ಕೇಂದ್ರ ಸರ್ಕಾರದ ಯೋಜನೆಗಳ ಅನುಷ್ಠಾನ ಮತ್ತು ರಾಜ್ಯ ಸರ್ಕಾರದ ಯೋಜನೆಗಳ ಬಗ್ಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಮೆಚ್ಚುಗೆ ವ್ಯಕ್ತಪಡಿಸಿ, ಅಭಿನಂದಿಸಿದ್ದಾರೆ.

ಶುಕ್ರವಾರ ರಾಜ್ಯದ 8 ಜಿಲ್ಲೆಗಳ ಬಿಜೆಪಿ ಕಾರ್ಯಾಲಯ ಮತ್ತು ಒಂದು ಮಂಡಲ ಭವನದ ಶಿಲಾನ್ಯಾಸ ಕಾರ್ಯಕ್ರಮಕ್ಕೆ ದೆಹಲಿಯಿಂದಲೇ ವರ್ಚುವಲ್‌ ಕಾನ್ಫರೆನ್ಸ್‌ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.

ರಾಜ್ಯದಲ್ಲಿ ಕೇಂದ್ರ ಸರ್ಕಾರದ ಯೋಜನೆಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲಾಗುತ್ತಿದೆ. ಜತೆಗೆ ರಾಜ್ಯ ಸರ್ಕಾರವೂ ಅನೇಕ ಜನಪರ ಯೋಜನೆಗಳನ್ನು ಅನುಷ್ಠಾನಗೊಳಿಸಿದೆ. ಪ್ರಸಕ್ತ ಕೋವಿಡ್‌ 19 ನಿಯಂತ್ರಿಸುವಲ್ಲಿಯೂ ರಾಜ್ಯ ಸರ್ಕಾರ ಹಿಂದೆ ಬಿದ್ದಿಲ್ಲ. ಕೊರೋನಾ ಸೋಂಕಿನಿಂದ ಉದ್ಭವಿಸಿರುವ ಬಿಕ್ಕಟ್ಟು ನಿರ್ವಹಿಸುವಲ್ಲಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಯಶಸ್ವಿಯಾಗಿದ್ದಾರೆ. ಈ ಕಾರಣಕ್ಕಾಗಿ ಅವರನ್ನು ಅಭಿನಂದಿಸುವುದಾಗಿ ತಿಳಿಸಿದರು.

ಹಿಂದೆಯೂ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಕೇಂದ್ರ ಸರ್ಕಾರದ ವಿವಿಧ ಸಚಿವರು ಕರ್ನಾಟಕದಲ್ಲಿನ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಆಡಳಿತ ಮತ್ತು ಪ್ರಸಕ್ತ ಕೋವಿಡ್‌ 19 ಅನ್ನು ನಿರ್ವಹಿಸುವಲ್ಲಿ ಅನುಸರಿಸಿದ ಕ್ರಮಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದರು